
ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಸಚಿವ ಬೈರತಿ ಸುರೇಶ್ ವಿರುದ್ಧ ಶಾಸಕ ಎಸ್. ಸುರೇಶ್ ಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿಯ ಮುಖ್ಯಸ್ಥರಾದ ಜಿ.ಪ್ರಕಾಶ್ ಮತ್ತು ಮನೋಹರ್ ನೇತೃತ್ವದ ನಿಯೋಗ ವಿಧಾನಸೌಧ ಠಾಣೆಯಲ್ಲಿ ದೂರು ನೀಡಿದೆ.
‘ಮಹಿಳೆಯರಿಗೆ ಅವಮಾನ ಮಾಡಿದ ಶಾಸಕರು ಕ್ಷಮೆಯಾಚಿಸಲಿ’ ಎಂಬ ಘೋಷಣೆವುಳ್ಳ ಪೋಸ್ಟರ್‌ಗಳನ್ನು ಅವರ ನಿವಾಸಕ್ಕೆ ಅಂಟಿಸುವ ಮೂಲಕ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದ್ದರು.
ಬಳಿಕ ಈ ಸಂಬಂಧ ಬಸವೇಶ್ವರನಗರ ಠಾಣೆಗೆ ದೂರು ಕೊಡಲು ಹೋಗಿದ್ದರು. ಆದರೆ, ಈ ಘಟನೆ ವಿಧಾನಸೌಧ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಲ್ಲಿಯೇ ದೂರು ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದರು. ಹಾಗಾಗಿ ಭಾನುವಾರ ಕಾಂಗ್ರೆಸ್ ನಿಯೋಗ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಮಹಿಳೆಯರ ಗೌರವಕ್ಕೆ ಧಕ್ಕೆ ತರುವಂತಹ ಹೇಳಿಕೆ ನೀಡಿರುವ ಸುರೇಶ್ ಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
ದೂರು ಸ್ವೀಕರಿಸಲಾಗಿದ್ದು, ಕಾನೂನು ತಜ್ಞರ ಅಭಿಪ್ರಾಯ ಪಡೆಯಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.