ADVERTISEMENT

ಸಹಾಯಕ ಪ್ರಾಧ್ಯಾಪಕ ನೇಮಕಾತಿ ಅಕ್ರಮ: 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೋಟಿಸ್

ಒಎಂಆರ್‌ ಪ್ರತಿ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2022, 2:50 IST
Last Updated 14 ಅಕ್ಟೋಬರ್ 2022, 2:50 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಸಂಬಂಧತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು, ಇದುವರೆಗೂ 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೋಟಿಸ್ ನೀಡಿ ವಿಚಾರಣೆ ನಡೆಸಿದ್ದಾರೆ.

ಭೂಗೋಳಶಾಸ್ತ್ರ ವಿಷಯದ ಪ್ರಶ್ನೆ ಪತ್ರಿಕೆಯ 18 ಪ್ರಶ್ನೆಗಳು ಸೋರಿಕೆಯಾಗಿದ್ದ ಸಂಬಂಧ ಮಲ್ಲೇಶ್ವರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ತನಿಖೆ ಕೈಗೆತ್ತಿಕೊಂಡಿರುವ ಸಿಸಿಬಿ ಪೊಲೀಸರು, ಧಾರವಾಡ ಕರ್ನಾಟಕ ವಿಶ್ವವಿದ್ಯಾಲಯದ ಕುಲಸಚಿವರಾಗಿದ್ದ
(ಮೌಲ್ಯಮಾಪನ) ಪ್ರೊ. ಎಚ್‌. ನಾಗರಾಜ್ ಹಾಗೂ ಅತಿಥಿ ಉಪನ್ಯಾಸಕಿ ಆರ್. ಸೌಮ್ಯಾ ಅವರನ್ನು ಈಗಾಗಲೇ ಬಂಧಿಸಿ ಮಾಹಿತಿ ಕಲೆಹಾಕಿದ್ದಾರೆ.

ಸಿಸಿಬಿ ತನಿಖೆ ನಡುವೆಯೇ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಳಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕಾರಿಗಳು, ಅಂತಿಮ ಮೆರಿಟ್ ಪಟ್ಟಿಯನ್ನು ಅ. 6ರಂದು ಪ್ರಕಟಿಸಿದ್ದಾರೆ. ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲು ತಯಾರಿ ನಡೆಸಿದ್ದಾರೆ.

ADVERTISEMENT

ಅಂತಿಮ ಅರ್ಹತಾ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳ ಮೇಲೆ ಅನುಮಾನ ವ್ಯಕ್ತಪಡಿಸಿರುವ ಸಿಸಿಬಿ ಪೊಲೀಸರು, ಅವರೆಲ್ಲರನ್ನೂ ಒಬ್ಬೊಬ್ಬರಾಗಿ ವಿಚಾರಣೆ ಮಾಡುತ್ತಿದ್ದಾರೆ.

‘ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲಿ ಕೆಲ ಅಭ್ಯರ್ಥಿಗಳು ಅಕ್ರಮ ಎಸಗಿರುವ ಆರೋಪವಿದೆ. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿ, ಅರ್ಹತೆ ಪಡೆದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಕೆಇಎ ಅಧಿಕಾರಿಗಳಿಂದ ಪಡೆಯಲಾಗಿದೆ. ಆ ಪೈಕಿ 500ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುತ್ತಿದೆ’ ಎಂದು ಸಿಸಿಬಿ ಪೊಲೀಸ್ ಅಧಿಕಾರಿಯೊಬ್ಬರು ‘ಪ್ರಜಾವಾಣಿ’ಗೆ ತಿಳಿಸಿದರು.

‘ಅಭ್ಯರ್ಥಿಗಳ ಹಿನ್ನೆಲೆ, ಶೈಕ್ಷಣಿಕ ಪ್ರಗತಿ ಹಾಗೂ ಇತರೆ ಮಾಹಿತಿಗಳನ್ನು ವಿಚಾರಣೆ ವೇಳೆ ದಾಖಲಿಸಿಕೊಳ್ಳಲಾಗುತ್ತಿದೆ. ಅಗತ್ಯವಿದ್ದರೆ, ಪುನಃ ವಿಚಾರಣೆಗೆ ಕರೆಸಲಾಗುವುದೆಂದು ಹೇಳಿ ವಾಪಸು ಕಳುಹಿಸಲಾಗುತ್ತಿದೆ’ ಎಂದರು.

‘ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಸದ್ಯಕ್ಕೆ ಯಾವುದೇ ಬಲವಾದ ಪುರಾವೆ ಸಿಕ್ಕಿಲ್ಲ. ಆದರೆ, ಅನುಮಾನವಿದೆ. ಎಸಿಪಿ ನೇತೃತ್ವದ ತಂಡ ಎಲ್ಲ ಆಯಾಮದಲ್ಲಿ ತನಿಖೆ ಮುಂದುವರಿಸಿದೆ’ ಎಂದೂ ಹೇಳಿದರು.

ವಿಷಯವಾರು ಅಭ್ಯರ್ಥಿಗಳ ವಿಚಾರಣೆ: ‘ನೇಮಕಾತಿ ಪರೀಕ್ಷೆಯ ವಿಷಯವಾರು ಅಭ್ಯರ್ಥಿಗಳ ಅಂಕಗಳನ್ನು ಪರಿಶೀಲಿಸ
ಲಾಗಿದೆ. ಅನುಮಾನ ಬಂದ ಅಭ್ಯರ್ಥಿಗಳಿಗೆ ಮಾತ್ರ ನೋಟಿಸ್ ನೀಡಿ, ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.

‘ಕನ್ನಡ, ಇಂಗ್ಲಿಷ್, ಹಿಂದಿ, ಉರ್ದು, ಇತಿಹಾಸ, ಅರ್ಥಶಾಸ್ತ್ರ, ರಾಜ್ಯಶಾಸ್ತ್ರ, ಸಮಾಜಶಾಸ್ತ್ರ, ಶಿಕ್ಷಣ, ಕಾನೂನು, ಸಮಾಜ ಕಾರ್ಯ, ಭೂಗೋಳ, ಭೂ ಗರ್ಭ ವಿಜ್ಞಾನ, ವಾಣಿಜ್ಯ, ನಿರ್ವಹಣಾ ವಿಜ್ಞಾನ, ಭೌತ ವಿಜ್ಞಾನ, ರಸಾಯನ ವಿಜ್ಞಾನ, ಜೈವಿಕ ರಸಾಯನ ವಿಜ್ಞಾನ, ಪ್ರಾಣಿ ವಿಜ್ಞಾನ, ಸಸ್ಯ ವಿಜ್ಞಾನ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ವಿಜ್ಞಾನ, ಸಂಖ್ಯಾ ವಿಜ್ಞಾನ ಹಾಗೂ ಫ್ಯಾಷನ್ ತಂತ್ರಜ್ಞಾನ ವಿಷಯದ ಹಲವು ಅಭ್ಯರ್ಥಿಗಳಿಗೆ ನೋಟಿಸ್ ನೀಡಲಾಗಿದೆ. ಹಲವರ ವಿಚಾರಣೆಯೂ ಮುಗಿದಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.