ADVERTISEMENT

ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ ಪರಿಹಾರ: ರೈತರಿಗೆ ನಾಲ್ಕು ಆಯ್ಕೆ

117 ಕಿ.ಮೀ. ಉದ್ದದ ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ಗೆ ಸಚಿವ ಸಂಪುಟದ ಸಮ್ಮತಿ

​ಪ್ರಜಾವಾಣಿ ವಾರ್ತೆ
Published 16 ಅಕ್ಟೋಬರ್ 2025, 22:39 IST
Last Updated 16 ಅಕ್ಟೋಬರ್ 2025, 22:39 IST
<div class="paragraphs"><p>ವಿಧಾನಸೌಧ</p></div>

ವಿಧಾನಸೌಧ

   

ಬೆಂಗಳೂರು: ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ಗೆ (ಪಿಆರ್‌ಆರ್‌) ಭೂಮಿ ನೀಡುವ ರೈತರಿಗೆ ನಾಲ್ಕು ಆಯ್ಕೆಗಳನ್ನು ನೀಡಲು ಹಾಗೂ ಯೋಜನೆಯನ್ನು ಯಾವುದೇ ಕಾರಣಕ್ಕೂ ನಿಲ್ಲಿಸದಿರಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಂಪುಟ ಸಭೆ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್, ‘ಹಿಂದಿನ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿದ್ದ ಪೆರಿಫೆರಲ್ ರಿಂಗ್ ರಸ್ತೆಯನ್ನು ‘ಬೆಂಗಳೂರು ಬ್ಯುಸಿನೆಸ್ ಕಾರಿಡಾರ್’ ಎಂದು ಮರುನಾಮಕರಣ ಮಾಡಿ 117 ಕಿ.ಮೀ ಉದ್ದದ ರಸ್ತೆಗೆ ಅನುಮೋದನೆ ನೀಡಲಾಗಿದೆ. ನಗರದಲ್ಲಿ ಇಷ್ಟು ಪ್ರಮಾಣದ ಹೊಸ ರಸ್ತೆಯನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯುತ್ತಿದೆ’ ಎಂದರು.

ADVERTISEMENT

ತುಮಕೂರು ರಸ್ತೆಯಿಂದ ಯಲಹಂಕ, ಎಲೆಕ್ಟ್ರಾನಿಕ್ ಸಿಟಿ– ಮೈಸೂರು ರಸ್ತೆ ಮೂಲಕ ಬೆಂಗಳೂರು ಎಕ್ಸಿಬಿಷನ್ ಸೆಂಟರ್‌ವರೆಗೂ ಕಾರಿಡಾರ್‌ ಸಾಗಲಿದೆ. ಈ ರಸ್ತೆಯು ಬೆಂಗಳೂರಿನ ಉತ್ತರ ಭಾಗದಲ್ಲಿ 73 ಕಿ.ಮೀ ಸಾಗಲಿದ್ದು, ಉಳಿದದ್ದು ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಸಾಗಲಿದೆ. ಶೇ 40ರಷ್ಟು ದಟ್ಟಣೆ ಕಡಿಮೆಯಾಗಲಿದ್ದು, ಎಲೆಕ್ಟ್ರಾನಿಕ್ ಸಿಟಿ, ತುಮಕೂರು ರಸ್ತೆ, ನೆಲಮಂಗಲ, ಮೈಸೂರು ರಸ್ತೆ ಕಡೆ ಹೋಗುವ ವಾಹನಗಳು ಈ ರಸ್ತೆಯಲ್ಲಿ ಸಾಗಲಿವೆ ಎಂದು ಮಾಹಿತಿ ನೀಡಿದರು.

‘ಈ ಹಿಂದಿನ ಸರ್ಕಾರ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದು, ಅದನ್ನು ಹಿಂಪಡೆದಿರಲಿಲ್ಲ. ಈಗ ಬೆಂಗಳೂರಿನಲ್ಲಿ ನೈಸ್ ರಸ್ತೆಗೆ ಪರ್ಯಾಯ ರಸ್ತೆ ಅಗತ್ಯವಿದೆ. ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಮಾಡಬಾರದು ಎಂದು ಈ ಯೋಜನೆ ಕೈಗೊತ್ತಿಕೊಳ್ಳಲಾಗಿದೆ. ಯೋಜನೆಗೆ ಸರ್ಕಾರದ ಖಾತರಿಯೊಂದಿಗೆ ಹುಡ್ಕೊ ಮೂಲಕ ₹27 ಸಾವಿರ ಕೋಟಿ ಸಾಲ ಪಡೆಯಲಾಗಿದೆ’ ಎಂದರು.

‘ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌ನಲ್ಲಿ 100 ಮೀಟರ್‌ ಅಗಲ ರಸ್ತೆ ನಿರ್ಮಿಸಲು ಅಧಿಸೂಚಿಸಲಾಗಿತ್ತು. ಅದನ್ನು ಕಡಿತಗೊಳಿಸಿ, ಬೆಂಗಳೂರು–ಮೈಸೂರು ಎಕ್ಸ್‌ಪ್ರೆಸ್‌ ಹೈವೇಯಂತೆ 65 ಮೀಟರ್ ಅಗಲದಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ. ರಸ್ತೆಯ ಎರಡೂ ಭಾಗದಲ್ಲಿ ಸರ್ವೀಸ್ ರಸ್ತೆ ಇರಲಿದ್ದು, ಪ್ರಮುಖ ರಸ್ತೆ ಟೋಲ್ ರಸ್ತೆಯಾಗಲಿದೆ. ರಸ್ತೆಯ ಮಧ್ಯೆ ನಮ್ಮ ಮೆಟ್ರೊ ಯೋಜನೆಗೆ 5 ಮೀಟರ್‌ ಕಲ್ಪಿಸಲಾಗುವುದು. ಉಳಿದ 35 ಮೀ. ಜಾಗವನ್ನು ರೈತರಿಗೆ ಪರಿಹಾರ ರೂಪದಲ್ಲಿ ಮರಳಿ ನೀಡಲು ತೀರ್ಮಾನಿಸಿದ್ದೇವೆ. ಈ ಜಾಗವನ್ನು ಹರಾಜು ಹಾಕಬೇಕು ಎಂಬ ಸಲಹೆಗಳು ಬಂದಿತ್ತಾದರೂ ರೈತರಿಗೆ ನೀಡಲು ನಿರ್ಧರಿಸಿದ್ದೇವೆ. ಇದು ವಾಣಿಜ್ಯ ಉದ್ದೇಶಕ್ಕೆ ನೆರವಾಗಲಿರುವ ಹಿನ್ನೆಲೆಯಲ್ಲಿ ರೈತರ ಮನವಿ ಮೇರೆಗೆ ಜಾಗವನ್ನು ಅವರಿಗೆ ನೀಡುವ ತೀರ್ಮಾನ ಮಾಡಲಾಗಿದೆ’ ಎಂದು ತಿಳಿಸಿದರು.

ಪರಿಹಾರ: ಸರ್ಕಾರ ಹಾಗೂ ಬಿಡಿಎ ಮೇಲೆ ಆರ್ಥಿಕ ಹೊರೆ ಕಡಿಮೆ ಮಾಡಲು ಈ ಯೋಜನೆಯಲ್ಲಿ ಭೂಮಿ ಕಳೆದುಕೊಳ್ಳುವ ರೈತರಿಗೆ ನಾಲ್ಕು ರೀತಿಯಲ್ಲಿ ಪರಿಹಾರ ನೀಡಲಾಗುತ್ತದೆ. ಮಾರುಕಟ್ಟೆ ದರದಲ್ಲಿ ನಗರ ಭಾಗದಲ್ಲಿ ಎರಡು ಪಟ್ಟು ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೂರುಪಟ್ಟು ನಗದು ಪರಿಹಾರ ಅಥವಾ ಟಿಡಿಆರ್ ಅಥವಾ ಎಫ್ಎಆರ್ ಅಥವಾ ಶೇ 35ರಷ್ಟು ವಾಣಿಜ್ಯ ಭೂಮಿಯನ್ನು ಪಡೆಯಬಹುದು. ಒಂದು ವೇಳೆ ವಾಣಿಜ್ಯ ಭೂಮಿ ಬೇಡ, ವಸತಿ ಪ್ರದೇಶದಲ್ಲಿ ಜಾಗ ಬೇಕು ಎಂದರೆ ಬಿಡಿಎ ವತಿಯಿಂದ ರೂಪಿಸಲಾಗಿರುವ ನೂತನ ಬಡಾವಣೆಗಳಲ್ಲಿ ಶೇ 40ರಷ್ಟು ಜಾಗ ನೀಡಲಾಗುವುದು. ಬಿಡಿಎ ಕಾಯ್ದೆಯಲ್ಲಿ, ಕೇಂದ್ರದ ಹೊಸ ಕಾಯ್ದೆ ಅನುಸಾರ ಹೆಚ್ಚಿನ ಪರಿಹಾರ ನೀಡಲು ಅವಕಾಶವಿಲ್ಲ. ಆದರೂ ರೈತರಿಗೆ ನೆರವಾಗಲು ಸರ್ಕಾರ ಮಹತ್ವದ ತೀರ್ಮಾನ ಮಾಡಿದೆ ಎಂದು ಮಾಹಿತಿ ನೀಡಿದರು.

‘20 ಗುಂಟೆಗಿಂತ ಒಳಗೆ ಭೂಮಿ ಕಳೆದುಕೊಳ್ಳುವವರಿಗೆ ನಗದು ಪರಿಹಾರ ಮಾತ್ರ ನೀಡಲಾಗುವುದು. ಅದಕ್ಕಿಂತ ಹೆಚ್ಚಿನ ಭೂಮಿ ಕಳೆದುಕೊಳ್ಳುವವರಿಗೆ ನಾಲ್ಕು ಆಯ್ಕೆಗಳನ್ನು ನೀಡಲಾಗಿದೆ. ಯಾವುದಾದರೂ ಒಂದು ಆಯ್ಕೆಯನ್ನು ಆರಿಸಿಕೊಳ್ಳಬಹುದು’ ಎಂದು ಸ್ಪಷ್ಟಪಡಿಸಿದರು.

2 ವರ್ಷಗಳಲ್ಲಿ ಯೋಜನೆ ಪೂರ್ಣ

‘ಬೆಂಗಳೂರು ಬ್ಯುಸಿನೆಸ್‌ ಕಾರಿಡಾರ್‌’ ಯೋಜನೆಯನ್ನು ಎರಡು  ವರ್ಷಗಳಲ್ಲಿ ಪೂರ್ಣಗೊಳಿಸಲಾಗುವುದು. ಒಂದು ವೇಳೆ ಯಾರಾದರೂ ಭೂಮಿ ನೀಡಲು ನಿರಾಕರಿಸಿದರೆ, ಸಹಜ ಸ್ವಾಧೀನ ಪ್ರಕ್ರಿಯೆ ಪರಿಹಾರದ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು ಯೋಜನೆ
ಮುಂದುವರಿಸುತ್ತೇವೆ. ಯಾವುದೇ ಕಾರಣಕ್ಕೂ ಈ ಜಾಗವನ್ನು ಡಿನೋಟಿಫಿಕೇಶನ್ ಮಾಡುವುದಿಲ್ಲ. ಸಂಚಾರ ದಟ್ಟಣೆಯಿಂದ ಬೆಂಗಳೂರಿನಲ್ಲಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗುತ್ತಿದ್ದು, ಈ ಯೋಜನೆ ಅಗತ್ಯವಾಗಿದೆ. ಈ ಯೋಜನೆಯಿಂದ 1,900 ಕುಟುಂಬಗಳ ಮೇಲೆ ಪರಿಣಾಮ ಬೀರುತ್ತದೆಯಾದರೂ ಬೆಂಗಳೂರು ನಗರಕ್ಕೆ ದೊಡ್ಡ ಮಟ್ಟದಲ್ಲಿ ಅನುಕೂಲ ಆಗಲಿದೆ’ ಎಂದು ಶಿವಕುಮಾರ್‌ ಹೇಳಿದರು.

‘ಟಿಡಿಆರ್ ವಿನಿಮಯ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಪ್ರಕ್ರಿಯೆ ಸುಗಮವಾಗಿ ಆಸ್ತಿಗಳ ವಿನಿಮಯ ಮಾಡಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗುವುದು. ಭೂಮಿ ಕಳೆದುಕೊಳ್ಳುವವರು ನೋಂದಣಿ ಮಾಡಿಕೊಂಡು, ಈ ಟಿಡಿಆರ್ ವಿನಿಮಯ
ಮಾಡಿಕೊಳ್ಳಬಹುದಾಗಿದೆ’ ಎಂದರು.

₹10 ಸಾವಿರ ಕೋಟಿ ಉಳಿತಾಯ

‘ಈ ಹಿಂದೆ ಈ ಯೋಜನೆಗೆ ₹27 ಸಾವಿರ ಕೋಟಿ ಅಂದಾಜು ಮಾಡಲಾಗಿತ್ತು. ಈಗ ರೂಪಿಸಿರುವ ಯೋಜನೆ ಮೂಲಕ ಹೆಚ್ಚಿನ ರೈತರು ಜಮೀನನ್ನೇ ಆಯ್ಕೆ ಮಾಡಿಕೊಳ್ಳುವುದರಿಂದ ಸುಮಾರು ₹10 ಸಾವಿರ ಕೋಟಿಗಿಂತ ಕಡಿಮೆ ವೆಚ್ಚವಾಗಲಿದೆ. ಟೋಲ್‌, ತಾಂತ್ರಿಕ ವಿಚಾರದ ಬಗ್ಗೆ ನಂತರ ಮಾಹಿತಿ ನೀಡುತ್ತೇವೆ. ಟೋಲ್ ಇಲ್ಲದೆ ಯಾವುದೇ ರಸ್ತೆಯನ್ನು ನಿಭಾಯಿಸಲು ಸಾಧ್ಯವಿಲ್ಲ’ ಎಂದು ಡಿ.ಕೆ. ಶಿವಕುಮಾರ್‌ ಹೇಳಿದರು.

ಪರಿಹಾರಗಳೇನು?

  • ನಗದು ಪರಿಹಾರ, ಟಿಡಿಆರ್, ಎಫ್ಎಆರ್, ಶೇ 35ರಷ್ಟು ವಾಣಿಜ್ಯ ಅಥವಾ ಶೇ 40ರಷ್ಟು ವಸತಿ ಪ್ರದೇಶದಲ್ಲಿ ಬದಲಿ ಭೂಮಿ

  • ಎರಡು ವರ್ಷಗಳಲ್ಲಿ ಯೋಜನೆ ಜಾರಿ, ಶೇ 40 ಸಂಚಾರ ದಟ್ಟಣೆ ನಿಯಂತ್ರಣ

  • ಯಾವುದೇ ಕಾರಣಕ್ಕೂ ಡಿನೋಟಿಫಿಕೇಶನ್ ಇಲ್ಲ

  • ಪರಿಹಾರ ನಿರಾಕರಿಸಿದರೆ ನ್ಯಾಯಾಲಯದಲ್ಲಿ ಠೇವಣಿ ಕಟ್ಟಿ ಯೋಜನೆ ಮುಂದುವರಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.