ADVERTISEMENT

ಬೇಡಿಕೆ ಈಡೇರಿಸುವಂತೆ ಆಗ್ರಹ| ನ.26ಕ್ಕೆ ಬೆಂಗಳೂರು ಚಲೋ: ಸಂಯುಕ್ತ ಹೋರಾಟ–ಕರ್ನಾಟಕ

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2025, 15:34 IST
Last Updated 19 ನವೆಂಬರ್ 2025, 15:34 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಬಲವಂತದ ಭೂಸ್ವಾಧೀನ ಕ್ರಮ ಕೈಬಿಡುವುದು, ವಿದ್ಯುತ್ ಖಾಸಗೀಕರಣ, ನೂತನ ಕಾರ್ಮಿಕ ಕಾನೂನುಗಳನ್ನು ರದ್ದುಪಡಿಸುವುದು ಸೇರಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 26ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ ಎಂದು ಸಂಯುಕ್ತ ಹೋರಾಟ–ಕರ್ನಾಟಕ ತಿಳಿಸಿದೆ. 

ADVERTISEMENT

ಬುಧವಾರ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಯುಕ್ತ ಹೋರಾಟ–ಕರ್ನಾಟಕದ ಮುಖಂಡರಾದ ಬಡಗಲಪುರ ನಾಗೇಂದ್ರ, ಎಸ್. ವರಲಕ್ಷ್ಮಿ, ಯಶವಂತ ಟಿ., ಕೆ.ವಿ.ಭಟ್, ನೂರ್ ಶ್ರೀಧರ್, ಸುಷ್ಮಾ ಮಾತನಾಡಿ, ‘ಅಸಂಘಟಿತ ಕಾರ್ಮಿಕರ ಕುಂದು ಕೊರತೆಗಳನ್ನು ಪರಿಹರಿಸಲು ರಾಜ್ಯ ಸರ್ಕಾರ ಎಲ್ಲ ಜಿಲ್ಲೆ, ತಾಲ್ಲೂಕು ಹಾಗೂ ಮಹಾನಗರ ಪಾಲಿಕೆ ಮಟ್ಟಗಳಲ್ಲಿ ಕಾರ್ಮಿಕರ ಸೌಲಭ್ಯ ಕೇಂದ್ರಗಳನ್ನು ಸ್ಥಾಪಿಸಬೇಕು. ಗುತ್ತಿಗೆ ಆಧಾರಿತ ನೇಮಕಾತಿಯನ್ನು ರದ್ದುಪಡಿಸಿ, ತಿಂಗಳಿಗೆ ಕನಿಷ್ಠ ₹36 ಸಾವಿರ ವೇತನ ನಿಗದಿಪಡಿಸಬೇಕು’ ಎಂದು ಆಗ್ರಹಿಸಿದರು.   

‘ದುಡಿಮೆಯ ಅವಧಿಯನ್ನು 8ರಿಂದ 12 ಗಂಟೆಗೆ ಹೆಚ್ಚಿಸುವ ತೀರ್ಮಾನವನ್ನು ರದ್ದುಗೊಳಿಸಬೇಕು. ಹೆಚ್ಚುವರಿ ಕೆಲಸಕ್ಕೆ ಎರಡು ಪಟ್ಟು ವೇತನ ನೀಡಬೇಕು. ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಹಂತ–ಹಂತವಾಗಿ ಭರ್ತಿ ಮಾಡಬೇಕು. ಉದ್ಯೋಗ ಸೃಷ್ಟಿಸುವ ಸಮಗ್ರ ಕಾರ್ಯಯೋಜನೆ ರೂಪಿಸಲು ಉದ್ಯೋಗ ಖಾತ್ರಿ ಆಯೋಗವನ್ನು ರಚಿಸಬೇಕು’ ಎಂದು ಒತ್ತಾಯಿಸಿದರು.

‘ಪರಿಶಿಷ್ಟ ಜಾತಿ ಉಪ ಯೋಜನೆ (ಎಸ್‌ಸಿಎಸ್‌ಪಿ) ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ (ಟಿಎಸ್‌ಪಿ) ಅನುದಾನದ ವಿತರಣೆ, ವಿನಿಯೋಗ, ಸಾಧಕ–ಬಾಧಕಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಮೌಲ್ಯಮಾಪನ ಮಾಡಲು ಅವಲೋಕನ ಸಭೆ ಕರೆಯಬೇಕು. ರಾಜ್ಯದಲ್ಲಿ ಮಹಿಳೆಯರ ಮೇಲೆ ಹೆಚ್ಚುತ್ತಿರುವ ದೌರ್ಜನ್ಯಗಳನ್ನು ತಡೆಯಲು, ಸಮಾಜದಲ್ಲಿ ಲಿಂಗ ಸಂವೇದನೆಯನ್ನು ಹೆಚ್ಚಿಸಲು ಸಮಗ್ರ ಕ್ರಿಯಾ ಯೋಜನೆ ರೂಪಿಸಬೇಕು’ ಎಂದರು.

‘ಕೇಂದ್ರ ಸರ್ಕಾರ ಜಾರಿಗೊಳಿಸಲು ಉದ್ದೇಶಿಸಿರುವ ರಾಷ್ಟ್ರೀಯ ಕೃಷಿ ನೀತಿಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು. ರಾಜ್ಯದಲ್ಲಿಯೂ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ (ಎಸ್‌ಐಆರ್) ಪ್ರತಿರೋಧ ವ್ಯಕ್ತಪಡಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.