ADVERTISEMENT

ಸ್ಮಾರ್ಟ್‌ಸಿಟಿ ಯೋಜನೆಗೆ ₹2,303 ಕೋಟಿ ಬಿಡುಗಡೆ: ಸಚಿವ ಭೈರತಿ ಬಸವರಾಜ್

₹906 ಕೋಟಿ ಮೊತ್ತದ ಕಾಮಗಾರಿ ಮುಕ್ತಾಯ: ಬೈರತಿ ಬಸವರಾಜ್

​ಪ್ರಜಾವಾಣಿ ವಾರ್ತೆ
Published 14 ಜೂನ್ 2020, 4:28 IST
Last Updated 14 ಜೂನ್ 2020, 4:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೆ.ಆರ್.ಪುರ: ‘ರಾಜ್ಯದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಗೆ ಕೇಂದ್ರ ಸರ್ಕಾರ ₹1,325 ಕೋಟಿ ಮತ್ತು ರಾಜ್ಯಸರ್ಕಾರ ₹978 ಕೋಟಿ ಸೇರಿದಂತೆ ಒಟ್ಟು ₹2,303 ಕೋಟಿ ಬಿಡುಗಡೆಯಾಗಿದೆ. ಅದರಲ್ಲಿ ₹906 ಕೋಟಿ ಮೊತ್ತದ ಕಾಮಗಾರಿ ಮುಕ್ತಾಯವಾಗಿದೆ’ ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಮಾಹಿತಿ ನೀಡಿದರು.

‘ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಏಳು ನಗರಗಳನ್ನು ಸ್ಮಾರ್ಟ್‌ಸಿಟಿಯಾಗಿ ಅಭಿವೃದ್ಧಿ ಪಡಿಸಲು ಕೇಂದ್ರಸರ್ಕಾರ ಅನುಮೋದನೆ ನೀಡಿದೆ. ರಾಜ್ಯದ ಉಳಿದ ನಾಲ್ಕು ಮಹಾನಗರಗಳಲ್ಲಿ ಸ್ಮಾರ್ಟ್‌ಸಿಟಿ ಯೋಜನೆ ಅನುಷ್ಠಾನಗೊಳಿಸಲು ಕೋರಿ ಕೇಂದ್ರ ನಗರಾಭಿವೃದ್ಧಿ ಸಚಿವರಿಗೆ ಮನವಿ ಸಲ್ಲಿಸಲಾಗಿದೆ’ ಎಂದು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸ್ಮಾರ್ಟ್ ಸಿಟಿ ಅಭಿಯಾನದಡಿಯಲ್ಲಿ ಬೆಂಗಳೂರು, ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ತುಮಕೂರು ಹಾಗೂ ಮಂಗಳೂರು ನಗರಗಳಲ್ಲಿ ನಿಯಂತ್ರಣ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಇವುಗಳು ಪ್ರಸ್ತುತ ಕೋವಿಡ್-19 ಪರಿಸ್ಥಿತಿಯನ್ನು ನಿರ್ವಹಿಸುವಲ್ಲಿ ಜಿಲ್ಲಾಡಳಿತಕ್ಕೆ ತಾಂತ್ರಿಕ ನೆರವು ನೀಡುತ್ತಿವೆ. ಜಿಪಿಎಸ್ ತಂತ್ರಜ್ಞಾನ ಬಳಸಿ ಕೋವಿಡ್-19 ಸೋಂಕಿತ ರೋಗಿಗಳ, ಶಂಕಿತರ ಚಲನವಲನದ ಮೇಲೆ ನಿಗಾ ವಹಿಸಲಾಗುವುದು’ ಎಂದು ಅವರು ಹೇಳಿದರು.

ADVERTISEMENT

‘ಬೆಳಗಾವಿ, ಕಲಬುರಗಿ, ಬಳ್ಳಾರಿ, ಹುಬ್ಬಳ್ಳಿ-ಧಾರವಾಡ, ವಿಜಯಪುರ ಮತ್ತು ತುಮಕೂರುಗಳಿಗೆ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆಯಡಿ ಪ್ರತಿ ಪಾಲಿಕೆಗೆ ₹125 ಕೋಟಿ ರೂ.ಗಳ ಅನುದಾನದಲ್ಲಿ ಕ್ರಿಯಾಯೋಜನೆ ತಯಾರಿಸಿ, ಅನುಮೋದಿಸಲಾಗಿದೆ’ ಎಂದು ತಿಳಿಸಿದರು.

‘ರಾಜ್ಯದ ಜಿಲ್ಲಾ ಕೇಂದ್ರದ ಆಸ್ಪತ್ರೆಗಳಲ್ಲಿ ಪ್ರಯೋಗ ಶಾಲೆಗಳ ಸ್ಥಾಪನೆಗೆ ಕ್ರಮ ವಹಿಸಲಾಗಿದೆ. 530 ಆಸ್ಪತ್ರೆಗಳನ್ನು ಕೊರೊನಾ ವಾರ್ ರೂಮ್‌ಗಳಾಗಿ ಪರಿವರ್ತಿಸಲಾಗಿದೆ. ಎಲ್ಲ ಕುಟುಂಬಗಳಿಗೆ ಎರಡು ತಿಂಗಳ ಮುಂಗಡ ಪಡಿತರ, ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ₹5 ಸಾವಿರ, ಆಶಾ ಕಾರ್ಯಕರ್ತೆಯರಿಗೆ ₹5 ಸಾವಿರ ಆರ್ಥಿಕ ನೆರವು ನೀಡಲಾಗಿದೆ’ ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.