ADVERTISEMENT

ಏಪ್ರಿಲ್ 27 ರಂದು ಬಂಜಾರ ಅಕಾಡೆಮಿ ಪ್ರಶಸ್ತಿ ಪ್ರದಾನ

​ಪ್ರಜಾವಾಣಿ ವಾರ್ತೆ
Published 25 ಮಾರ್ಚ್ 2025, 16:06 IST
Last Updated 25 ಮಾರ್ಚ್ 2025, 16:06 IST
ಎ.ಆರ್. ಗೋವಿಂದಸ್ವಾಮಿ
ಎ.ಆರ್. ಗೋವಿಂದಸ್ವಾಮಿ   

ಬೆಂಗಳೂರು: ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ರಾಜ್ಯ ಮಟ್ಟದ ಬಂಜಾರ ಸಾಹಿತ್ಯ ಹಾಗೂ ಸಾಂಸ್ಕೃತಿಕ ಉತ್ಸವ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಇದೇ 27ರಂದು ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದೆ. 

ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಕಾಡೆಮಿ ಅಧ್ಯಕ್ಷ ಎ.ಆರ್. ಗೋವಿಂದಸ್ವಾಮಿ, ‘ಗುರುವಾರ ಮಧ್ಯಾಹ್ನ 2.30ರಿಂದ ವಿವಿಧ ಬಂಜಾರ ಕಲಾ ತಂಡಗಳ ಮೆರವಣಿಗೆ ಹಡ್ಸನ್‌ ವೃತ್ತದಿಂದ ರವೀಂದ್ರ ಕಲಾಕ್ಷೇತ್ರದವರೆಗೆ ನಡೆಯಲಿದೆ. ವೇದಿಕೆ ಕಾರ್ಯಕ್ರಮ ಸಂಜೆ 4.30ರಿಂದ ಪ್ರಾರಂಭವಾಗಲಿದ್ದು, ಸಂಜೆ 6ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾರಂಭ ಉದ್ಘಾಟಿಸುತ್ತಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡುತ್ತಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರು ಪ್ರಶಸ್ತಿ ವಿಜೇತರ ಕಿರುಹೊತ್ತಿಗೆ ಬಿಡುಗಡೆ ಮಾಡುತ್ತಾರೆ. ಶಾಸಕ ಉದಯ್ ಗರುಡಾಚಾರ್ ಅವರು ಅಧ್ಯಕ್ಷತೆ ವಹಿಸುತ್ತಾರೆ’ ಎಂದರು. 

‘ಮುಖ್ಯ ಅತಿಥಿಗಳಾಗಿ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಎಸ್.ಜಿ. ಸಿದ್ಧರಾಮಯ್ಯ ಪಾಲ್ಗೊಳ್ಳುತ್ತಾರೆ. ಬಂಜಾರ ಸಮುದಾಯದ ರಾಜಕೀಯ ಮುಖಂಡರು ಪಾಲ್ಗೊಳ್ಳುತ್ತಾರೆ. 2024ನೇ ಸಾಲಿನ ‘ಶ್ರೀ ಸಂತ ಸೇವಾಲಾಲ್ ಪ್ರಶಸ್ತಿ’ಯನ್ನು ಬಿ.ಟಿ. ಲಲಿತಾ ನಾಯಕ್ ಅವರಿಗೆ ಪ್ರದಾನ ಮಾಡಲಾಗುತ್ತದೆ. 2023 ಹಾಗೂ 2024ನೇ ಸಾಲಿನ ಗೌರವ ಹಾಗೂ ವಾರ್ಷಿಕ ಪ್ರಶಸ್ತಿ ಮತ್ತು ಮೂರು ವರ್ಷಗಳ ಪುಸ್ತಕ ಬಹುಮಾನ ಪ್ರದಾನ ಮಾಡಲಾಗುತ್ತದೆ’ ಎಂದು ಮಾಹಿತಿ ನೀಡಿದರು. 

ADVERTISEMENT

ಅಕಾಡೆಮಿ ರಿಜಿಸ್ಟ್ರಾರ್ ಡಿ.ಎಂ. ರವಿಕುಮಾರ್ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.