ADVERTISEMENT

ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಮಹೇಶ ಜೋಶಿ

ಕಾನೂನು ಹೋರಾಟ ಮಾಡುವುದಾಗಿ ಕಸಾಪ ಅಧ್ಯಕ್ಷ ಮಹೇಶ ಜೋಶಿ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 23 ಆಗಸ್ಟ್ 2023, 16:17 IST
Last Updated 23 ಆಗಸ್ಟ್ 2023, 16:17 IST
   

ಬೆಂಗಳೂರು: ‘ಬ್ಯಾಂಕಿಂಗ್ ಪರೀಕ್ಷೆಯಲ್ಲಿ ಕನ್ನಡ ಭಾಷೆಗೆ ಅವಕಾಶ ಕಲ್ಪಿಸದಿರುವುದು ಕನ್ನಡಿಗರಿಗೆ ಮಾಡುತ್ತಿರುವ ಅವಮಾನ. ಈ ಬಗ್ಗೆ ಕಾನೂನು ಹೋರಾಟ ನಡೆಸುವ ಬಗ್ಗೆ ಚಿಂತನೆ ಮಾಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ (ಕಸಾಪ) ಅಧ್ಯಕ್ಷ ಮಹೇಶ ಜೋಶಿ ತಿಳಿಸಿದ್ದಾರೆ.  

ಕೇಂದ್ರ ಸರ್ಕಾರದಡಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆಯು (ಐಬಿಪಿಎಸ್‌) ಹಿಂದಿ ಹಾಗೂ ಇಂಗ್ಲಿಷ್‌ ಭಾಷೆಯಲ್ಲಿ ಪರೀಕ್ಷೆ ನಡೆಸುತ್ತಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಅವರು, ‘ಐಬಿಪಿಎಸ್ ಪರೀಕ್ಷೆಯನ್ನು ಹಿಂದಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ನಡೆಸುವುದರಿಂದ ಎಲ್ಲಾ ಪ್ರಾದೇಶಿಕ ಭಾಷಿಕರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಪರಿಷತ್ತು ಕೇಂದ್ರ ಸರ್ಕಾರ ಸೇರದಂತೆ ಇತರ ನೇಮಕಾತಿ ಸಂಸ್ಥೆಗಳಿಗೆ ಪ್ರಾದೇಶಿಕ ಭಾಷೆಗಳ ಮಹತ್ವ ಮತ್ತು ಅವುಗಳನ್ನು ಕಡೆಗಣಿಸದೇ ಇರುವಂತೆ ಎಚ್ಚರಿಕೆಯನ್ನು ನೀಡುತ್ತಲೇ ಬಂದಿದೆ. ಆದರೂ ಭಾಷಾ ಗೊಂದಲಕ್ಕೆ ಕಾರಣವಾಗುವಂತೆ ರಾಷ್ಟ್ರೀಯ ಪರೀಕ್ಷೆಯಲ್ಲಿ ಹಿಂದಿಯೇತರ ಭಾಷೆಗಳನ್ನು ಕಡೆಗಣನೆ ಮಾಡಲಾಗುತ್ತಿದೆ’ ‌ಎಂದು ಮಹೇಶ ಜೋಶಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ದೇಶದಲ್ಲಿರುವ ಹಿಂದಿ ಭಾಷಿಗರು ಹಿಂದಿಯಲ್ಲೇ ಪರೀಕ್ಷೆ ತೆಗೆದುಕೊಳ್ಳಬಹುದಾದರೆ, ಕನ್ನಡಿಗರು ಹಾಗೂ ದೇಶದ ಇನ್ನಿತರ ಮಾತೃಭಾಷಿಗರಿಗೂ ಅವರದೇ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅವಕಾಶ ಇರಬೇಕು. ತಮ್ಮ ಮಾತೃಭಾಷೆಯನ್ನು ಬಿಟ್ಟು ಇಂಗ್ಲಿಷ್ ಭಾಷೆಯಲ್ಲಿ ಪರೀಕ್ಷೆ ಬರೆಯುವ ಅನಿವಾರ್ಯ ವಾತಾವರಣ ತಂದಿರುವುದು ಖಂಡನೀಯ. ಹಿಂದಿ ಹೇರಿಕೆ ಹಾಗೂ ಹಿಂದಿಯೇತರರನ್ನು ದ್ವಿತೀಯ ದರ್ಜೆಯ ನಾಗರಿಕರಂತೆ ಕನಿಷ್ಠ ದೃಷ್ಟಿಯಿಂದ ಕಾಣುವ ಮನಸ್ಸುಗಳು ಇಂತಹ ಕೃತ್ಯಕ್ಕೆ ಕೈ ಹಾಕುತ್ತಿದೆ’ ಎಂದು ಹೇಳಿದ್ದಾರೆ. 

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.