ಬೆಂಗಳೂರು: ಉದ್ಯಮಿಯೊಬ್ಬರ ಪುತ್ರನ ಅಪಹರಣ ಮಾಡಿ ಕೊಲೆ ಮಾಡುವ ಬೆದರಿಕೆ ಒಡ್ಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಬನ್ನಂಜೆ ರಾಜನ ಸಹಚರ ಶಶಿಕುಮಾರ್ ಅಲಿಯಾಸ್ ಶಶಿ ಪೂಜಾರಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ.
ಈ ಸಂಬಂಧಶಶಿ ಪೂಜಾರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ವಜಾಗೊಳಿಸಿ, ‘ಆರೋಪಿಯ ವಿರುದ್ಧ ಕರ್ನಾಟಕ ಅಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಕೋಕಾ) ಅನ್ವಯವಾಗುತ್ತದೆ’ ಎಂದು ಆದೇಶಿಸಿದೆ.
‘ಈತನನ್ನು ಬಿಡುಗಡೆ ಮಾಡಿದರೆ ಸಮಾಜಕ್ಕೆ ಅಪಾಯವಿದೆ.ಸುಪ್ರೀಂಕೋರ್ಟ್ ನಿಗದಿಪಡಿಸಿರುವ ಮಾನದಂಡಗಳ ಪ್ರಕಾರ ಇಂತಹ ಆರೋಪಿಗೆ ಜಾಮೀನು ನೀಡಲು ಸಾಧ್ಯವಿಲ್ಲ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ಪ್ರಕರಣವೇನು?: 2019ರ ಮಾರ್ಚ್‌ನಲ್ಲಿಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ, ‘ಉದ್ಯಮಿಯೊಬ್ಬರ ಪುತ್ರನನ್ನು ಅಪಹರಿಸಿ ಕೊಲೆ ಮಾಡುವ ಬೆದರಿಕೆ ಒಡ್ಡಲಾಗಿದೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ‘ಅಪಹರಣಕಾರರು ತುಳು ಭಾಷೆಯಲ್ಲಿ ಮಾತನಾಡಿದ್ದು, ಹಣ ನೀಡದಿದ್ದರೆ ಉದ್ಯಮಿಯ ಪುತ್ರನನ್ನು ಕೊಲ್ಲುವುದಾಗಿ ಬೆದರಿಕೆ ಒಡ್ಡಿದ್ದಾರೆ’ ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಉಡುಪಿ ಪೊಲೀಸರುಶಶಿ ಪೂಜಾರಿಯನ್ನು 2019ರ ಮಾರ್ಚ್ 21ರಂದು ಬಂಧಿಸಿದ್ದರು.ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಶಶಿ ಪೂಜಾರಿಯನ್ನು ಎರಡನೇ ಆರೋಪಿಯನ್ನಾಗಿ ಮತ್ತು ಬನ್ನಂಜೆ ರಾಜನನ್ನು ಮೊದಲನೇ ಆರೋಪಿಯನ್ನಾಗಿ ಹೆಸರಿಸಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.