ಬೆಂಗಳೂರು: ಒಂದು ತಿಂಗಳಿನಿಂದ ರಾಜ್ಯದಲ್ಲಿ ನಡೆಯುತ್ತಿರುವ ಬಸವ ಸಂಸ್ಕೃತಿ ಅಭಿಯಾನದ ಸಮಾರೋಪ ಸಮಾರಂಭ ಬೆಂಗಳೂರಿನ ಅರಮನೆ ಮೈದಾನದಲ್ಲಿ ಅ.5ರಂದು ನಡೆಯಲಿದ್ದು, 500ಕ್ಕೂ ಲಿಂಗಾಯತ ಸಮುದಾಯದ ಸ್ವಾಮೀಜಿಗಳು, ಒಂದು ಲಕ್ಷಕ್ಕೂ ಅಧಿಕ ಭಕ್ತರು ಭಾಗಿಯಾಗುವರು.
‘ಸಮಾರೋಪ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಸೇರಿ ಸಂಪುಟದ ಪ್ರಮುಖ ಸಚಿವರು ಹಾಗೂ ರಾಜಕೀಯ, ಸಾಮಾಜಿಕ ಗಣ್ಯರು ಪಾಲ್ಗೊಳ್ಳಲಿದ್ದಾರೆ. ಜತೆಗೆ ಬಸವ ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ’ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು ಸ್ವಾಮೀಜಿ ತಿಳಿಸಿದ್ದಾರೆ.
‘ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನ ಭಾವಚಿತ್ರ ಕಡ್ಡಾಯ ಮಾಡಿದ ಹಾಗೂ ಸ್ವತಂತ್ರ ಲಿಂಗಾಯತ ಧರ್ಮ ಘೋಷಣೆಗೆ ಕೇಂದ್ರಕ್ಕೆ ಶಿಫಾರಸು ಮಾಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮಾರಂಭದಲ್ಲಿ ವಿಶೇಷವಾಗಿ ಸನ್ಮಾನಿಸಲಾಗುವುದು’ ಎಂದು ತಿಳಿಸಿದ್ದಾರೆ.
ಅಭಿಯಾನವು ಸೆ.1ರಂದು ಬಸವಣ್ಣನ ಜನ್ಮಭೂಮಿ ಬಸವನ ಬಾಗೇವಾಡಿಯಲ್ಲಿ ಆರಂಭಗೊಂಡಿತ್ತು. ಬಳಿಕ ಜಿಲ್ಲಾ ಕೇಂದ್ರಗಳಲ್ಲಿ ಸಂಚರಿಸಿ ವಿದ್ಯಾರ್ಥಿಗಳ ಜತೆ ವಚನ ಸಂವಾದ, ಬಸವರಥ ಮೆರವಣಿಗೆ, ಶರಣರ ಚಿಂತನೆಗಳ ಕುರಿತು ಉಪನ್ಯಾಸಗಳು, ‘ಜಂಗಮದೆಡೆಗೆ’ ನಾಟಕ ಪ್ರದರ್ಶನದಂತಹ ಚಟುವಟಿಕೆಗಳನ್ನು ಒಳಗೊಂಡಿತ್ತು.
ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಪದಾಧಿಕಾರಿಗಳಾದ ಗದಗಿನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ, ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಕೂಡಲಸಂಗಮ ಬಸವಧರ್ಮ ಪೀಠದ ಗಂಗಾದೇವಿ ಮಾತಾಜಿ ಈ ಅಭಿಯಾನದ ನೇತೃತ್ವ ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.