
ಬೆಂಗಳೂರು: ಬಸವಣ್ಣನವರ ಹೆಸರಿನಲ್ಲಿ ಯಲಹಂಕದಲ್ಲಿ ಉದ್ಯಾನ ನಿರ್ಮಾಣ ಮಾಡಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಲಾಲ್‌ಬಾಗ್, ಕಬ್ಬನ್ ಪಾರ್ಕ್ ನಂತರದ ಮೂರನೇ ಅತಿದೊಡ್ಡ ಉದ್ಯಾನ ಇದಾಗಲಿದೆ.
ಯಲಹಂಕದಲ್ಲಿ ಅರಣ್ಯ ಇಲಾಖೆಗೆ ಸೇರಿದ 153 ಎಕರೆ ಪ್ರದೇಶದಲ್ಲಿ ‘ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ’ ನಿರ್ಮಿಸಲು ಶುಕ್ರವಾರ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು ಸುದ್ದಿಗಾರರಿಗೆ ತಿಳಿಸಿದರು.
‘ಬೆಂಗಳೂರು ನಗರಕ್ಕೆ ಅತ್ಯಗತ್ಯವಾದ ಶ್ವಾಸತಾಣ ಮತ್ತು ಮನೋಲ್ಲಾಸ ಕೇಂದ್ರವಾಗಿ ಅಭಿವೃದ್ಧಿಪಡಿಸಲು ₹50 ಕೋಟಿ ಮಂಜೂರು ಮಾಡಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎಲ್ಲ ಸಂಪುಟ ಸಹೋದ್ಯೋಗಿಗಳಿಗೆ ಧನ್ಯವಾದ ಸಲ್ಲಿಸಲಾಯಿತು’ ಎಂದರು.
‘265 ವರ್ಷಗಳ ಹಿಂದೆ 1760ರಲ್ಲಿ 240 ಎಕರೆ ಪ್ರದೇಶದಲ್ಲಿ ಲಾಲ್‌ಬಾಗ್ ನಿರ್ಮಾಣವಾಗಿತ್ತು. 155 ವರ್ಷಗಳ ಹಿಂದೆ 1870ರಲ್ಲಿ 197 ಎಕರೆ ಪ್ರದೇಶದಲ್ಲಿ ಕಬ್ಬನ್ ಪಾರ್ಕ್ ನಿರ್ಮಾಣವಾಗಿದೆ. ಕಬ್ಬನ್ ಪಾರ್ಕ್ ನಿರ್ಮಾಣವಾದ 155 ವರ್ಷಗಳಲ್ಲಿ ನಗರದಲ್ಲಿ ಹಲವು ಸಣ್ಣ ಉದ್ಯಾನಗಳು ನಿರ್ಮಾಣವಾಗಿವೆ. ಆದರೆ ಇಷ್ಟು ದೊಡ್ಡ ಪ್ರದೇಶದಲ್ಲಿ ಯಾವ ಉದ್ಯಾನವೂ ಇಲ್ಲ. ಹೀಗಾಗಿ, ನಗರದ ಮೂರನೇ ಅತಿದೊಡ್ಡ ಜೀವವೈವಿಧ್ಯ ಉದ್ಯಾನವಾಗಿ ಜನರಿಗೆ ಸಮರ್ಪಿಸಲಾಗುತ್ತದೆ’ ಎಂದು ಮಾಹಿತಿ ನೀಡಿದರು.
ಬೆಂಗಳೂರು ಉತ್ತರ ತಾಲ್ಲೂಕು ಯಲಹಂಕ ಬಳಿಯ ಮಾದಪ್ಪನಹಳ್ಳಿಯಲ್ಲಿ 153 ಎಕರೆ ಪ್ರದೇಶದಲ್ಲಿ ‘ವಿಶ್ವಗುರು ಬಸವಣ್ಣ ಜೀವವೈವಿಧ್ಯ ಉದ್ಯಾನ’ ಅಭಿವೃದ್ಧಿಯಾಗಲಿದೆ. ಈ ಹಿಂದೆ ಈ ಪ್ರದೇಶದಲ್ಲಿ, ಅರಣ್ಯ ಇಲಾಖೆ ನೆಡುತೋಪು ಬೆಳೆಸಲು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮಕ್ಕೆ ನೀಡಿತ್ತು. ಆ ಜಾಗವನ್ನು ಮರಳಿ ಇಲಾಖೆಗೆ ಪಡೆದುಕೊಂಡಿದ್ದು, ಇಲ್ಲಿರುವ ನೀಲಗಿರಿ ಮರಗಳನ್ನು ಹಂತ ಹಂತವಾಗಿ ತೆಗೆದು, ನಂದಿ, ಹೊನ್ನೆ, ಬಿಲ್ವ, ಮಹಾಬಿಲ್ವ ಮೊದಲಾದ ನೂರಾರು ಪ್ರಭೇದದ ಸಸಿಗಳನ್ನು ನೆಟ್ಟು ಬೆಳೆಸಲಾಗುವುದು. ಹೀಗೆ ಬೆಳೆಸುವ ಎಲ್ಲ ಮರಗಳ ಬಳಿ ವೃಕ್ಷದ ಹೆಸರು, ಪ್ರಭೇದ ಇತ್ಯಾದಿ ವೈಜ್ಞಾನಿಕ ವಿವರದ ಫಲಕ ಹಾಕುವ ಮೂಲಕ ಮುಂದಿನ ಪೀಳಿಗೆ ಕನಿಷ್ಠ 50 ಮರಗಳನ್ನು ಗುರುತಿಸುವಂತೆ ಅರಿವು ಮೂಡಿಸಲು ತೀರ್ಮಾನಿಸಲಾಗಿದೆ ಎಂದರು.
ದಿವ್ಯೌಷಧೀಯ ಸಸ್ಯವನ, ಪಕ್ಷಿ ಲೋಕ, ವೃಕ್ಷೋದ್ಯಾನ ಹಾಗೂ ಇಂಟರ್‌ಪ್ರಿಟೇಷನ್ ಸೆಂಟರ್ ನಿರ್ಮಾಣ ಮಾಡಲು ಚಿಂತಿಸಲಾಗಿದೆ. ಈ ಉದ್ಯಾನ ಬಿಡಿಎ ನಿರ್ಮಿಸಿರುವ ಶಿವರಾಮಕಾರಂತ ಬಡಾವಣೆಗೆ ಅತ್ಯಂತ ಸಮೀಪದಲ್ಲಿದೆ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.