ಬೆಂಗಳೂರು: ‘ಹೊಸದಾಗಿ ರಚನೆಯಾಗಲಿರುವ ಐದು ಪಾಲಿಕೆಗಳಿಗೆ ಚುನಾವಣೆ ನಡೆಯುವ ತನಕ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಡಳಿತವೇ ಮುಂದುವರಿಯಲಿದೆ’ ಎಂದು ಅಡ್ವೊಕೇಟ್ ಜನರಲ್ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದ್ದಾರೆ.
ಕಟ್ಟಡ ಬೈ–ಲಾ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಕಾರಿ ಎಂಜಿನಿಯರ್ (ಎಇಇ) ನೀಡಿರುವ ನೋಟಿಸ್ ಪ್ರಶ್ನಿಸಿ ಸಿ.ವಿ.ರಾಮನ್ ನಗರದ ಮುನಿವೆಂಕಟಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪಿಠಕ್ಕೆ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ ಈ ಕುರಿತಂತೆ ವಿವರಿಸಿದರು.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ರಚನೆ ಕುರಿತು ಅಧಿಸೂಚನೆ ಹೊರಡಿಸಲಾಗಿದೆ. ಹಾಗಾಗಿ, ಎಇಇಗೆ ನೋಟಿಸ್ ನೀಡುವ ಅಧಿಕಾರವಿಲ್ಲ. ನೋಟಿಸ್ ಕಾನೂನು ಬಾಹಿರವಾಗಿದ್ದು ರದ್ದುಗೊಳಿಸಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.
ಇದಕ್ಕೆ ಬಿಬಿಎಂಪಿ ಪರ ವಕೀಲರು ಆಕ್ಷೇಪ ವ್ಯಕ್ತಪಡಿಸಿದರಲ್ಲದೆ, ‘ಜಿಬಿಎ ರಚನೆ ಆಗುವ ತನಕ ಬಿಬಿಎಂಪಿ ಕಾಯ್ದೆ–2020 ಜಾರಿಯಲ್ಲಿರುತ್ತದೆ. ಈ ಕುರಿತಂತೆ ಸರ್ಕಾರವೇ 2025ರ ಮೇ 15ರಂದು ಆದೇಶ ಹೊರಡಿಸಿದೆ. ಹಾಗಾಗಿ, ಎಇಇಗೆ ನೋಟಿಸ್ ನೀಡುವ ಎಲ್ಲ ಅಧಿಕಾರವಿದೆ’ ಎಂದು ಸಮರ್ಥಿಸಿಕೊಂಡರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಜಿಬಿಎ ರಚನೆಗೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಕಾಯ್ದೆ ಜಾರಿಯಲ್ಲಿ ಇಲ್ಲ ಎಂಬ ವಿಚಾರವನ್ನು ಅರ್ಜಿದಾರರು ಎತ್ತಿದ್ದಾರೆ. ಜಿಬಿಎ ಜಾರಿ ಯಾವಾಗ ಎಂಬ ಬಗ್ಗೆ ಸ್ಪಷ್ಟನೆ ನೀಡಿ’ ಎಂದು ಸರ್ಕಾರಕ್ಕೆ ಸೂಚಿಸಿತು.
ನ್ಯಾಯಪೀಠದ ಮುಂದೆ ಹಾಜರಾದ ಅಡ್ವೊಕೇಟ್ ಜನರಲ್ ಅವರು, ‘ಪಾಲಿಕೆಗಳಿಗೆ ಜನವರಿ ವೇಳೆಗೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ’ ಎಂದು ಸ್ಪಷ್ಟನೆ ನೀಡಿದರು.
ಇದನ್ನು ಮಾನ್ಯ ಮಾಡಿದ ನ್ಯಾಯಪೀಠ, ‘ಅರ್ಜಿದಾರರಿಗೆ ಸಂಬಂಧಿಸಿದಂತೆ ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು’ ಎಂದು ಪಾಲಿಕೆ ಪರ ವಕೀಲರಿಗೆ ಸೂಚಿಸಿ ವಿಚಾರಣೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.