ADVERTISEMENT

ಟ್ರಾನ್ಸ್‌ಫಾರ್ಮರ್‌ ಸ್ಥಳಾಂತರಕ್ಕೆ ಸಮಿತಿ

​ಪ್ರಜಾವಾಣಿ ವಾರ್ತೆ
Published 13 ಏಪ್ರಿಲ್ 2021, 5:00 IST
Last Updated 13 ಏಪ್ರಿಲ್ 2021, 5:00 IST
ಹೈಕೋರ್ಟ್
ಹೈಕೋರ್ಟ್   

ಬೆಂಗಳೂರು: ನಗರದ ಪಾದಚಾರಿ ಮಾರ್ಗಗಳಲ್ಲಿ ಇರುವ ವಿದ್ಯುತ್ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸುವ ಸಂಬಂಧ ವಿಧಾನಗಳನ್ನು ರೂಪಿಸಲು ಸಮನ್ವಯ ಸಮಿತಿ ರಚಿಸಲಾಗುವುದು ಎಂದು ಹೈಕೋರ್ಟ್‌ಗೆ ಬಿಬಿಎಂಪಿ ಮತ್ತು ಬೆಸ್ಕಾಂ ಮಾಹಿತಿ ನೀಡಿವೆ.

ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಎಂ.ಬಿ. ರಾಜೇಶಗೌಡ ಮತ್ತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಪ್ರಮಾಣಪತ್ರ ಸಲ್ಲಿಸಿದ್ದಾರೆ. ವಿದ್ಯುತ್ ಉಪಕರಣ ಅಥವಾ ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸಲು ಅನುಕೂಲಕರ ಸ್ಥಳಗಳನ್ನು ಗುರುತಿಸುವ ಉದ್ದೇಶದಿಂದ ಸಮಿತಿ ರಚಿಸಲಾಗುತ್ತಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಜನ ಸಂಚಾರಕ್ಕೆ ಅಡ್ಡಿಯಾಗುತ್ತಿರುವ ಸುಮಾರು 800 ಟ್ರಾನ್ಸ್‌ಫಾರ್ಮರ್‌ಗಳನ್ನು ಬದಲಿಸುವ ಕೆಲಸ ನಡೆಯುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ. ಆಗುತ್ತಿರುವ ಅನಾನುಕೂಲ ತಪ್ಪಿಸಲು ಸಮಾಲೋಚನೆ ಪ್ರಕ್ರಿಯೆ ಕೂಡಲೇ ಆರಂಭಿಸಲಾಗುವುದು ಎಂದು ಬಿಬಿಎಂಪಿ ಭರವಸೆ ನೀಡಿದೆ.

ADVERTISEMENT

ಈ ಪ್ರಕ್ರಿಯೆಗೆ ಸಮಯಾವಕಾಶ ನೀಡಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ, ಎರಡು ಪ್ರಾಧಿಕಾರಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳದಿದ್ದರೆ ಪರಿಶೀಲನೆಗೆ ಸೂಕ್ತ ಏಜೆನ್ಸಿ ನೇಮಿಸಲಾಗುವುದು ಎಂದು ತಿಳಿಸಿತು.

ಪಾದಚಾರಿ ಮಾರ್ಗಗಳಲ್ಲಿ ಇರುವ ಅಪಾಯಕಾರಿ ಟ್ರಾನ್ಸ್‌ಫಾರ್ಮರ್‌ಗಳನ್ನು ಸ್ಥಳಾಂತರಿಸಲು ನಿರ್ದೇಶನ ನೀಡಲು ಕೋರಿ ನಿವೃತ್ತ ವಿಂಗ್ ಕಮಾಂಡರ್ ಜಿ.ಬಿ. ಅತ್ರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.