ADVERTISEMENT

ಸಂಪರ್ಕ ಪತ್ತೆ ಪ್ರಕ್ರಿಯೆ ಚುರುಕು

ಕೋವಿಡ್‌ ವಾರ್‌ ರೂಂ ಪ್ರಕ್ರಿಯೆ ಪರಿಶೀಲಿಸಿದ ಮುಖ್ಯ ಆಯುಕ್ತ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2021, 19:32 IST
Last Updated 2 ಏಪ್ರಿಲ್ 2021, 19:32 IST
ಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಗೌರವ್‌ ಗುಪ್ತ, ಅಧಿಕಾರಿಗಳಿಂದ ಮಾಹಿತಿ ಪಡೆದರು
ಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿದ ಗೌರವ್‌ ಗುಪ್ತ, ಅಧಿಕಾರಿಗಳಿಂದ ಮಾಹಿತಿ ಪಡೆದರು   

ಬೆಂಗಳೂರು: ‘ನಗರದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಿದ್ದು, ಸೋಂಕಿತರ ಸಂಪರ್ಕ ಪತ್ತೆ ಕಾರ್ಯವನ್ನು ಇನ್ನಷ್ಟು ಸದೃಢ ಮತ್ತು ಚುರುಕುಗೊಳಿಸಬೇಕು’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್‌ ಗುಪ್ತ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಹಲಸೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಶುಕ್ರವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ‘ಪಾಲಿಕೆ ವ್ಯಾಪ್ತಿಯಲ್ಲಿ 60,000 ಕೋವಿಡ್ ಪರೀಕ್ಷೆಗಳನ್ನು ಮಾಡಲಾಗುತ್ತಿದ್ದು, ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮ ವಹಿಸಲಾಗುವುದು’ ಎಂದರು.

‘ಸೋಂಕು ಹೆಚ್ಚಳವಾಗುತ್ತಿರುವ ಪ್ರದೇಶದಲ್ಲಿ ಹೆಚ್ಚು ಪರೀಕ್ಷೆಗಳನ್ನು ಮಾಡಬೇಕು’ ಎಂದು ಹೇಳಿದರು.

ADVERTISEMENT

ನಿತ್ಯ 35 ಸಾವಿರ ಲಸಿಕೆ:

‘ನಗರದಲ್ಲಿ ಪ್ರತಿನಿತ್ಯ ಸುಮಾರು 35,000 ಮಂದಿ ಲಸಿಕೆ ಪಡೆಯುತ್ತಿದ್ದಾರೆ. ಅದನ್ನು ಮತ್ತಷ್ಟು ಹೆಚ್ಚಳ ಮಾಡಲು ಕ್ರಮವಹಿಸಲಾಗುತ್ತಿದೆ’ ಎಂದರು.

‘ಅಪಾರ್ಟ್‌ಮೆಂಟ್‌ಗಳಲ್ಲಿರುವ, ಗಾರ್ಮೆಂಟ್ಸ್ ಕಾರ್ಖಾನೆಗಳಲ್ಲಿ ಕೆಲಸ ಮಾಡುವ ಎಲ್ಲರೂ ಲಸಿಕೆ ತೆಗೆದುಕೊಳ್ಳಬೇಕು’ ಎಂದರು.

ಪೂರ್ವ ವಲಯ ವಾರ್ ರೂಂಗೆ ಭೇಟಿ:

ಪೂರ್ವ ವಲಯ ವ್ಯಾಪ್ತಿಗೆ ಸಂಬಂಧಿಸಿದಂತೆ ವಾರ್ ರೂಂಗೆ ಭೇಟಿ ನೀಡಿದ ಗೌರವ್‌ ಗುಪ್ತ, ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿರುವವರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿಕೊಳ್ಳುವ ಪ್ರಕ್ರಿಯೆಯ ಪರಿಶೀಲನೆ ನಡೆಸಿದರು.

‘ಮನೆಗಳಲ್ಲಿಯೇ ಪ್ರತ್ಯೇಕವಾಗಿದ್ದುಕೊಂಡು ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಗೆ ನಿತ್ಯ ಕರೆ ಮಾಡಿ ಅವರ ಆರೋಗ್ಯ ವಿಚಾರಿಸಿಕೊಳ್ಳಬೇಕು’ ಎಂದು ಸಿಬ್ಬಂದಿಗೆ ಸೂಚನೆ ನೀಡಿದರು.

ಇದೇ ವೇಳೆ, ಗೌರವ್‌ ಗುಪ್ತ ಅವರು ಕೋವಿಡ್‌ ಎರಡನೇ ಡೋಸ್ ಲಸಿಕೆ ಪಡೆದರು.

ವಿಶೇಷ ಆಯುಕ್ತ (ಆರೋಗ್ಯ) ರಾಜೇಂದ್ರ ಚೋಳನ್, ಜಂಟಿ ಆಯುಕ್ತರಾದ ಪಲ್ಲವಿ, ಮುಖ್ಯ ಆರೋಗ್ಯ ಅಧಿಕಾರಿ ಡಾ. ವಿಜೇಂದ್ರ, ವಲಯ ಆರೋಗ್ಯಾಧಿಕಾರಿ ಡಾ. ಸಿದ್ದಪ್ಪಾಜಿ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.