ADVERTISEMENT

ಕೋವಿಡ್ ಚಿಕಿತ್ಸೆ: ಬಿಬಿಎಂಪಿಯಿಂದ ನಾಲ್ಕು ಸಾವಿರ ಹಾಸಿಗೆಗೆ ಬೇಡಿಕೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2021, 8:23 IST
Last Updated 8 ಏಪ್ರಿಲ್ 2021, 8:23 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ಕೋವಿಡ್ ರೋಗಿಗಳ ಚಿಕಿತ್ಸೆಗಾಗಿ ಮುಂದಿನ ಹತ್ತು ದಿನಗಳವರೆಗೆ ಹೆಚ್ಚುವರಿಯಾಗಿ ನಾಲ್ಕು ಸಾವಿರ ಹಾಸಿಗೆಗಳನ್ನು ಒದಗಿಸುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಆರೋಗ್ಯ ಇಲಾಖೆಗೆ ಬೇಡಿಕೆ ಸಲ್ಲಿಸಿದೆ.

ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧಿಕಾರಿಗಳ ಜತೆ ಗುರುವಾರ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಈ ವಿಷಯ ತಿಳಿಸಿದರು.

'ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಒಂದು ಸಾವಿರ ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ. ಇನ್ನೂ ನಾಲ್ಕು ಸಾವಿರ ಹಾಸಿಗೆಗಳಿಗೆ ಬೇಡಿಕೆ ಬಂದಿದೆ. ಹತ್ತು ದಿನಗಳ ಬಳಿಕ ಮತ್ತೆ ಬೇಡಿಕೆ‌ ಸಲ್ಲಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ' ಎಂದರು.

ADVERTISEMENT

ರಾಜ್ಯದಲ್ಲಿ ನಿತ್ಯ ವರದಿಯಾಗುವ ಕೋವಿಡ್ ಪ್ರಕರಣಗಳಲ್ಲಿ ಶೇಕಡ 80ರಷ್ಟು ಬೆಂಗಳೂರು ನಗರದ ವ್ಯಾಪ್ತಿಯಲ್ಲೇ ಪತ್ತೆಯಾಗುತ್ತಿವೆ. ಆದ್ದರಿಂದ ನಿತ್ಯದ ಕೋವಿಡ್ ಪರೀಕ್ಷೆಯ ಗುರಿಯನ್ನು ಒಂದು ಲಕ್ಷಕ್ಕೆ ಹೆಚ್ಚಿಸಲಾಗಿದೆ ಎಂದು ತಿಳಿಸಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಕಾಯ್ದಿರಿಸುವ ಸಂಬಂಧ ಖಾಸಗಿ ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳ ಮುಖ್ಯಸ್ಥರ ಜತೆ ಸಭೆ ನಡೆಸಲಾಗುವುದು. ಬೆಂಗಳೂರಿನಲ್ಲಿ ಮಾರ್ಗಸೂಚಿ ಪಾಲನೆ ಮೇಲೆ ನಿಗಾ ಇಡಲು 2,000 ಗೃಹ ರಕ್ಷಕ ಸಿಬ್ಬಂದಿ ಒದಗಿಸುವಂತೆ ಮನವಿ ಸಲ್ಲಿಸಲಾಗಿದೆ ಎಂದು ಸುಧಾಕರ್ ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ಬಿಬಿಎಂಪಿ ವ್ಯಾಪ್ತಿಯಲ್ಲಿ 8,500 ಮತಗಟ್ಟೆಗಳ ಹಂತದಲ್ಲಿ ತಂಡಗಳನ್ನು ರಚಿಸಲಾಗುವುದು. ಪ್ರತಿ ವಾರ್ಡ್ ಗೆ ಒಂದು ಆಂಬುಲೆನ್ಸ್ ಒದಗಿಸಲಾಗಿದೆ. ಹೆಚ್ಚುವರಿಯಾಗಿ ತಲಾ‌ ಒಂದು ಆಂಬುಲೆನ್ಸ್ ಒದಗಿಸಲು ಸಿದ್ಧತೆ ನಡೆದಿದೆ ಎಂದರು.

ಪಾಲಿಕೆಯ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸೇರಿದಂತೆ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.