ADVERTISEMENT

ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರ ಚುನಾವಣೆಗೆ ತಡೆ

ಹೈಕೋರ್ಟ್‌ ಆದೇಶ: ಪ್ರತಿವಾದಿಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 4 ಅಕ್ಟೋಬರ್ 2019, 20:09 IST
Last Updated 4 ಅಕ್ಟೋಬರ್ 2019, 20:09 IST
ಬಿಬಿಎಂಪಿ
ಬಿಬಿಎಂಪಿ   

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನದ ಚುನಾವಣೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಕುರಿತಂತೆ ತೆರಿಗೆ ಹಾಗೂ ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಎಸ್.ಪಿ.ಹೇಮಲತಾ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ರಜಾಕಾಲದ ಏಕಸದಸ್ಯ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಪಿ.ಬಿ.ಭಜಂತ್ರಿ ಶುಕ್ರವಾರ ವಿಚಾರಣೆ ನಡೆಸಿದರು.

ಪ್ರತಿವಾದಿಗಳಾದ ನಗರಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ನಗರ ಪ್ರಾದೇಶಿಕ ಆಯುಕ್ತರು, ಬಿಬಿಎಂಪಿ ಆಯುಕ್ತರು ಮತ್ತು ಕೌನ್ಸಿಲ್ ಕಾರ್ಯದರ್ಶಿಗೆ ತುರ್ತು ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆ ಮುಂದೂಡಿದೆ.

ADVERTISEMENT

‘ಕರ್ನಾಟಕ ಪೌರಾಡಳಿತ ಕಾಯ್ದೆ ಕಲಂ 11(5) ಅನ್ವಯ ಸ್ಥಾಯಿ ಸಮಿತಿ ಅಧ್ಯಕ್ಷರ ಅವಧಿ ಒಂದು ವರ್ಷ. ಬಿಬಿಎಂಪಿಯ 12 ಸ್ಥಾಯಿ ಸಮಿತಿಗಳಿಗೆ 2018ರ ಡಿಸೆಂಬರ್ 5ರಂದು ಚುನಾವಣೆ ನಡೆಸಲಾಗಿದೆ. ನಿಯಮದ ಪ್ರಕಾರ 2019ರ ಡಿಸೆಂಬರ್ 4ಕ್ಕೆ ಮತ್ತೆ ಚುನಾವಣೆ ನಡೆಯಬೇಕಿದೆ. ಆದರೆ, ಮೇಯರ್ ಹಾಗೂ ಉಪ ಮೇಯರ್ ಚುನಾವಣೆ ಜತೆಗೆ ಅಕ್ಟೋಬರ್‌ 1ರಂದು 12 ಸ್ಥಾಯಿ ಸಮಿತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಅಧಿಸೂಚನೆ ಹೊರಡಿಸಿರುವುದು ಕಾನೂನು ಬಾಹಿರ’ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಸೇರಿದಂತೆ ವಿವಿಧ 8 ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನದ ಚುನಾವಣೆಗೆ ಕಳೆದ ತಿಂಗಳ 27ರಂದು ಹೈಕೋರ್ಟ್ ಈಗಾಗಲೇ ತಡೆ ನೀಡಿದೆ.

ಅರ್ಜಿದಾರರ ಪರ ಎಂ.ವಿ.ಹಿರೇಮಠ ವಕಾಲತ್ತು ವಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.