ADVERTISEMENT

ಬಿಬಿಎಂಪಿ ಪೌರ ಕಾರ್ಮಿಕರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 11 ಜುಲೈ 2020, 8:24 IST
Last Updated 11 ಜುಲೈ 2020, 8:24 IST

ಬೆಂಗಳೂರು: ‘ಪೌರಕಾರ್ಮಿಕರ ಆರೋಗ್ಯ ಕಾಪಾಡಲು ಹಾಗೂ ಸುರಕ್ಷತೆಗಾಗಿ ರಾಜ್ಯ ಸರ್ಕಾರ ಶಿಫಾರಸು ಮಾಡಿರುವ ನೀತಿ–ನಿಯಮಗಳು ಪಾಲನೆಯಾಗುತ್ತಿಲ್ಲ’ ಎಂದು ಆರೋಪಿಸಿ ಬಿಬಿಎಂಪಿ ಪೌರಕಾರ್ಮಿಕರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ತಾವು ಕರ್ತವ್ಯ ನಿರ್ವಹಿಸುವ ಸ್ಥಳಗಳಲ್ಲೇ ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದ ಕಾರ್ಮಿಕರು, ವಾರ್ಡ್‌ ಅಧಿಕಾರಿಗಳ ಮೂಲಕ ಬಿಬಿಎಂಪಿ ಆಯುಕ್ತರಿಗೆ ಮನವಿ ಪತ್ರ ರವಾನಿಸಿದರು. ಬಿಬಿಎಂಪಿ ಪೌರ ಕಾರ್ಮಿಕರ ಸಂಘ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಆಫ್ ಟ್ರೇಡ್ ಯೂನಿಯನ್ (ಎಐಸಿಸಿಟಿಯು) ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

‘ಕೊರೊನಾ ಸೋಂಕಿತರು ಹೆಚ್ಚುತ್ತಿರುವ ಸಂದರ್ಭದಲ್ಲೂ ಪೌರಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಹೀಗಾಗಿ, ಕಾರ್ಮಿಕರಿಗೆ ನಿತ್ಯವೂ ಹೊಸ ಸುರಕ್ಷಾ ಕವಚ, ಮಾಸ್ಕ್‌ ನೀಡಬೇಕು. ಸರಕುಗಳನ್ನು ಸ್ವಚ್ಛಗೊಳಿಸಲು ಕ್ರಿಮಿನಾಶಕ ಒದಗಿಸಬೇಕು. ಕುಡಿಯುವ ನೀರು, ಆಹಾರ, ಬಟ್ಟೆ ಹಾಗೂ ಮೂಲ ಸೌಕರ್ಯಗಳನ್ನು ಕಲ್ಪಿಸಬೇಕು. ಸಾರಿಗೆ ಭತ್ಯೆಯೆಂದು ದಿನಕ್ಕೆ ₹100 ನೀಡಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

ADVERTISEMENT

‘ಒಂದು ತಿಂಗಳ ವೇತನವನ್ನು ಆಪತ್ತು ಭತ್ಯೆಯೆಂದು ನೀಡಬೇಕು. ಹಾಜರಾತಿ ಮುನ್ನ ಥರ್ಮಲ್ ಸ್ಕ್ಯಾನಿಂಗ್ ಹಾಗೂ ಆರೋಗ್ಯ ತಪಾಸಣೆ ಮಾಡಬೇಕು. ಘನತ್ಯಾಜ್ಯ ನಿರ್ವಹಣೆ ಕಾರ್ಮಿಕರಿಗೂ ನೇರ ಪಾವತಿ ವೇತನ ಒದಗಿಸಬೇಕು. ನಿವೃತ್ತಿಪಡೆಯುವ ಕಾರ್ಮಿಕರಿಗೆ 3 ತಿಂಗಳ ಮುಂಚಿತವಾಗಿ ನೋಟಿಸ್ ನೀಡಿ, ಅವರಿಗೆ ನೀಡಬೇಕಾದ ಪಿಂಚಣಿ ಕೊಡಬೇಕು. ಅನುಕಂಪ ನೇಮಕಾತಿ ಪ್ರಕ್ರಿಯೆಯನ್ನೂ ಮುಗಿಸಬೇಕು’ ಎಂದೂ ಅವರು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.