ADVERTISEMENT

ಮಳೆ ಹಾನಿ: ಸನ್ನದ್ಧವಾಗಿರಿ: ಬಿಬಿಎಂಪಿ ಆಡಳಿತಾಧಿಕಾರಿ ಸೂಚನೆ

​ಪ್ರಜಾವಾಣಿ ವಾರ್ತೆ
Published 23 ನವೆಂಬರ್ 2021, 20:41 IST
Last Updated 23 ನವೆಂಬರ್ 2021, 20:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ನಗರದಲ್ಲಿ ಭಾರಿ ಮಳೆಯಿಂದ ಪ್ರವಾಹ ಸ್ಥಿತಿ ಉಂಟಾಗುವುದನ್ನು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಪ್ರವಾಹದಂತಹ ವಿಷಮ ಸ್ಥಿತಿ ಎದುರಾದರೂ ಅದನ್ನು ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧವಾಗಿರಬೇಕು ಎಂದು ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್‌ ಸಿಂಗ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರವಾಹ ನಿರ್ವಹಣೆಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು ಅವರು ಅಧಿಕಾರಿಗಳ ಜೊತೆ ಮಂಗಳವಾರ ಸಭೆ ನಡೆಸಿದರು.

‘ರಾಜಕಾಲುವೆ, ರಸ್ತೆ ಬದಿಯ ಚರಂಡಿಗಳಲ್ಲಿ ತುಂಬಿರುವ ಹೂಳನ್ನು ಮಳೆಗಾಲಕ್ಕೆ ಮೊದಲೇ ತೆರವುಗೊಳಿಸಿ ನೀರು ಸರಾಗವಾಗಿ ಹರಿದುಹೋಗುವಂತೆ ವ್ಯವಸ್ಥೆ ಮಾಡಬೇಕು. ಅಗೆದು ರಸ್ತೆ ಪಕ್ಕದಲ್ಲಿ ಬಿಟ್ಟಿರುವ ಮಣ್ಣು ನೀರುಗಾಲುವೆಗಳಿಗೆ ಸೇರದಂತೆ ತಡೆಯಬೇಕು’ ಎಂದರು.

ADVERTISEMENT

ಬೆಸ್ಕಾಂ, ಜಲಮಂಡಳಿಯವರು ಕಾಮಗಾರಿಗಾಗಿ ರಸ್ತೆ ಕತ್ತರಿಸುವ ಮುನ್ನ ಕಡ್ಡಾಯವಾಗಿ ಬಿಬಿಎಂಪಿಯಿಂದ ಅನುಮತಿ ಪಡೆಯಬೇಕು ಹಾಗೂ ರಸ್ತೆ ಕತ್ತರಿಸಿದ ಭಾಗವನ್ನು ಆಯಾ ಇಲಾಖೆಗಳೇ ದುರಸ್ತಿ ಮಾಡಬೇಕು. ಇದನ್ನು ಬಿಬಿಎಂಪಿ ಅಧಿಕಾರಿಗಳು ಪ್ರಮಾಣೀಕರಿಸಬೇಕು ಎಂದು ನಿರ್ದೇಶನ ನೀಡಿದರು.

ಮುಖ್ಯ ಆಯುಕ್ತ ಗೌರವ್ ಗುಪ್ತ, ‘ಮಳೆಗಾಲದಲ್ಲಿ ಪ್ರವಾಹ ಸ್ಥಿತಿ ಎದುರಾದಾಗ ಎಲ್ಲಾ ಅಧಿಕಾರಿಗಳು ತ್ವರಿತವಾಗಿ ಸ್ಪಂದಿಸಬೇಕು’ ಎಂದರು.

ಆಯಾ ವಾರ್ಡ್ ವ್ಯಾಪ್ತಿಯ ರಸ್ತೆಗಳು ಸುಸ್ಥಿತಿಯಲ್ಲಿರುವಂತೆ ನೋಡಿಕೊಳ್ಳುವುದು ಸಹಾಯಕ ಎಂಜಿನಿಯರ್‌ಗಳ ಜವಾಬ್ದಾರಿ ಎಂದು ನೆನಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.