ADVERTISEMENT

ಬೆಂಗಳೂರಲ್ಲಿ 1,200ಕ್ಕೂ ಅಧಿಕ ಫ್ಲೆಕ್ಸ್‌, ಬ್ಯಾನರ್‌ ತೆರವು

ಬಿಬಿಎಂಪಿ ಮುಖ್ಯ ಆಯುಕ್ತರ ಸೂಚನೆ ಮೇರೆಗೆ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2022, 16:13 IST
Last Updated 10 ಫೆಬ್ರುವರಿ 2022, 16:13 IST
ಜ್ಞಾನಭಾರತಿ ವಾರ್ಡ್‌ನಲ್ಲಿ ಅನಧಿಕೃತ ಫ್ಲೆಕ್ಸ್‌ ಅನ್ನು ಬಿಬಿಎಂಪಿ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು
ಜ್ಞಾನಭಾರತಿ ವಾರ್ಡ್‌ನಲ್ಲಿ ಅನಧಿಕೃತ ಫ್ಲೆಕ್ಸ್‌ ಅನ್ನು ಬಿಬಿಎಂಪಿ ಸಿಬ್ಬಂದಿ ಗುರುವಾರ ತೆರವುಗೊಳಿಸಿದರು   

ಬೆಂಗಳೂರು: ಅನಧಿಕೃತವಾಗಿ ಅಳವಡಿಸಲಾಗಿದ್ದ ಬ್ಯಾನರ್, ಫ್ಲೆಕ್ಸ್‌ ಹಾಗೂ ಬಂಟಿಂಗ್‌ಗಳನ್ನು ತೆರವುಗೊಳಿಸಲು ಬಿಬಿಎಂಪಿ ಸಿಬ್ಬಂದಿ ಗುರುವಾರ ವಿಶೇಷ ಕಾರ್ಯಾಚರಣೆ ನಡೆಸಿದರು. ನಗರದಲ್ಲಿ 1,200ಕ್ಕೂ ಹೆಚ್ಚು ಫ್ಲೆಕ್ಸ್‌ಗಳನ್ನು ಒಂದೇ ದಿನ ತೆರವುಗೊಳಿಸಲಾಗಿದೆ.

ನಗರದಲ್ಲಿ ಅನಧಿಕೃತವಾಗಿ ಅಳವಡಿಸಿರುವ ಫ್ಲೆಕ್ಸ್‌, ಬ್ಯಾನರ್‌, ಬಂಟಿಂಗ್‌ಗಳನ್ನು ಮುಲಾಜಿಲ್ಲದೇ ತೆರವುಗೊಳಿಸುವಂತೆ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ಎಲ್ಲ ವಲಯಗಳ ಮುಖ್ಯ ಎಂಜಿನಿಯರ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು. ಅದರಂತೆ, ಪಾಲಿಕೆಯ ಎಲ್ಲ 8 ವಲಯಗಳಲ್ಲಿಯೂ ಮುಖ್ಯ ಎಂಜಿನಿಯರ್ ನೇತೃತ್ವದ ತಂಡಗಳು ತೆರವು ಕಾರ್ಯಾಚರಣೆ ನಡೆಸಿದವು. ರಸ್ತೆ ಬದಿಯ ವಿದ್ಯುತ್ ಕಂಬಗಳು, ಪಾದಚಾರಿ ಮಾರ್ಗ, ರಾಜಕಾಲುವೆಯ ಬೇಲಿಗಳ ಮೇಲೆ ಅಳವಡಿಸಿರುವ ಫ್ಲೆಕ್ಸ್‌ಗಳನ್ನು ತೆರವುಗೊಳಿಸಲಾಯಿತು.

ಪಾಲಿಕೆ ವ್ಯಾಪ್ತಿಯ ಮಾರತ್ತಹಳ್ಳಿ, ವೈಟ್‌ಫೀಲ್ಡ್‌, ಹೂಡಿ, ಎಚ್.ಬಿ.ಆರ್ ಬಡಾವಣೆ, ಯಲಹಂಕ, ಥಣಿಸಂದ್ರ ಮುಖ್ಯ ರಸ್ತೆ, ರಾಜಾಜಿನಗರ, ಎಚ್.ಎಸ್.ಆರ್ ಬಡಾವಣೆ, ಬೇಗೂರು ಮುಖ್ಯ ರಸ್ತೆ, ಅಂಜನಾಪುರ, ಜ್ಞಾನ ಭಾರತಿ ಲೇಔಟ್, ದಾಸರಹಳ್ಳಿ ಮೊದಲಾದ ಕಡೆ ಫ್ಲೆಕ್ಸ್ ತೆರವುಗೊಳಿಸಲಾಯಿತು. ತೆರವು ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬಿಬಿಎಂಪಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.