ADVERTISEMENT

ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತ ಆಹಾರ ಪೊಟ್ಟಣ ವಿತರಣೆ

ಮಾಸ್ಕ್‌ ಧರಿಸುವುದು, ಅಂತರ ಕಾಪಾಡುವುದು ಕಡ್ಡಾಯ

​ಪ್ರಜಾವಾಣಿ ವಾರ್ತೆ
Published 11 ಮೇ 2021, 20:11 IST
Last Updated 11 ಮೇ 2021, 20:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಇದೇ 24ರವರೆಗೆ ಲಾಕ್‌ಡೌನ್‌ ಘೋಷಿಸಿರುವ ಕಾರಣ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಇಂದಿರಾ ಕ್ಯಾಂಟೀನ್‌ಗಳಲ್ಲಿ ಮಂಗಳವಾರದಿಂದಲೇ ದಿನದ ಮೂರು ಹೊತ್ತು ಉಚಿತ ಆಹಾರ ವಿತರಿಸಲಾಗುತ್ತದೆ.

ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿಯ ಊಟಗಳನ್ನು ಉಚಿತವಾಗಿ ವಿತರಿಸುವಂತೆ ಪೌರಾಡಳಿತ ನಿರ್ದೇಶಕರು ಹೊರಡಿಸಿದ ಆದೇಶದಲ್ಲಿ ಸೂಚಿಸಿದ್ದಾರೆ.

ಲಾಕ್‌ಡೌನ್‌ ದಿನಗಳಲ್ಲಿ ನಿರಾಶ್ರಿತರಿಗೆ ಆಹಾರ ಕಿಟ್‌ ಮತ್ತು ಆಹಾರ ಪದಾರ್ಥಗಳ ಕಿಟ್‌ಗಳನ್ನು ನೀಡುವ ಕುರಿತಂತೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಅಧ್ಯಕ್ಷತೆಯಲ್ಲಿ ಸೋಮವಾರ ವಿಡಿಯೊ ಸಂವಾದ ನಡೆದಿತ್ತು.

ADVERTISEMENT

ಕೂಲಿ ಕಾರ್ಮಿಕರು, ವಲಸಿಗರು ಮತ್ತು ಇತರ ದುರ್ಬಲ ವರ್ಗದವರಿಗೆ ಅನುಕೂಲ ಮಾಡಿಕೊಡಲು ಸ್ಥಳೀಯ ಸಂಸ್ಥೆಗಳಲ್ಲಿರುವ ಇಂದಿರಾ ಕ್ಯಾಂಟೀನ್‌ಗಳಲ್ಲಿ ಉಚಿತವಾಗಿ ಆಹಾರ ವಿತರಿಸಲು ಈ ವಿಡಿಯೊ ಸಂವಾದದಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.

ಅದರಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಆಯುಕ್ತರು ಸೂಚನೆ ನೀಡಿದ್ದಾರೆ.

ಬಾಕಿ ಬಿಲ್‌ ಪಾವತಿಗೆ ₹ 25 ಕೋಟಿ

ಇಂದಿರಾ ಕ್ಯಾಂಟೀನ್‌ಗಳಿಗೆ ಆಹಾರ ಪೂರೈಸುವ ಗುತ್ತಿಗೆದಾರರಿಗೆ ಬಾಕಿ ಉಳಿಸಿಕೊಂಡಿರುವ ಬಿಲ್‌ ಪಾವತಿಗೆ ₹ 25 ಕೋಟಿ ಮೊತ್ತವನ್ನು ಈಗಾಗಲೇ ಬಿಡುಗಡೆ ಮಾಡಿರುವ ಪ್ರಕೃತಿ ವಿಕೋಪ ಪರಿಹಾರ ನಿಧಿಯಿಂದ ಬಳಸುವಂತೆ ಸರ್ಕಾರ ಬಿಬಿಎಂ‍ಪಿಗೆ ಸೂಚಿಸಿದೆ.

ಈ ಕುರಿತು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರಿಗೆ ಪತ್ರ ಮಂಗಳವಾರ ಬರೆದಿರುವ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್‌, ‘ಸದ್ಯಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಬಿಡುಗಡೆ ಮಾಡಿರುವ ₹ 300 ಕೋಟಿಯಲ್ಲಿ ₹25 ಕೋಟಿಯನ್ನು ಈ ಉದ್ದೇಶಕ್ಕೆ ಬಳಸಿಕೊಳ್ಳಬೇಕು. ನಂತರ ಇದರ ಮರುಪಾವತಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು’ ಎಂದು ಸೂಚಿಸಿದ್ದಾರೆ. ಎಷ್ಟು ಜನರಿಗೆ ಊಟ ವಿತರಿಸಲಾಗಿದೆ ಎಂಬ ಬಗ್ಗೆ ವಿವರಗಳನ್ನು ನಿರ್ವಹಿಸಬೇಕು ಎಂದೂ ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.