ADVERTISEMENT

ಬಿಬಿಎಂಪಿ ವಾರ್ಡ್‌ಗಳ ಮೀಸಲಾತಿ ನಿಗದಿ: ಅಧಿಸೂಚನೆಗೆ ಸರ್ಕಾರ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 29 ಜುಲೈ 2022, 0:06 IST
Last Updated 29 ಜುಲೈ 2022, 0:06 IST
   

ಬೆಂಗಳೂರು: ಸುಪ್ರೀಂಕೋರ್ಟ್ ಆದೇಶದಂತೆ ಒಂದು ವಾರದೊಳಗೆ ವಾರ್ಡ್‌ಗಳ ಮೀಸಲಾತಿ ನಿಗದಿಪಡಿಸಿ ಅಧಿಸೂಚನೆ ಹೊರಡಿಸಲು ಸರ್ಕಾರ ಸಿದ್ಧತೆ ನಡೆಸಿದೆ.

ಶುಕ್ರವಾರ ಅಥವಾ ಶನಿವಾರ ವಾರ್ಡ್ ಮೀಸಲಾತಿಯ ಕರಡು ಅಧಿಸೂಚನೆ ಹೊರಬೀಳಲಿದೆ. ಆಕ್ಷೇಪಣೆ ಸಲ್ಲಿಸಲು ಮೂರು ದಿನದ ಅವಕಾಶ ನೀಡಲಾಗುತ್ತದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ. ವಾರ್ಡ್ ಮೀಸಲಾತಿ ಕರಡು ಪಟ್ಟಿಗೆ ಕೆಲವು ಮಾರ್ಗಸೂಚಿಯನ್ನು ಅನುಸರಿಸಲು ಸೂಚಿಸಲಾಗಿದೆ.

2012-13ನೇ ಸಾಲಿನಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆಯನ್ನು ನಡೆಸುವ ಸಲುವಾಗಿ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪರಿಷ್ಕರಿಸಿ, ಮಹಾನಗರ ಪಾಲಿಕೆಗಳ ಚುನಾವಣೆಗಳಿಗೆ, ವಿವಿಧ ಪ್ರವರ್ಗಗಳಿಗೆ ಸೇರದ ಸದಸ್ಯರುಗಳಿಗೆ ವಿವಿಧ ವಾರ್ಡ್‌ಗಳಿಗೆ ರೊಟೇಷನ್‌ ಮೇಲೆ ಮೀಸಲಾದ ಸ್ಥಾನಗಳನ್ನು ಹಂಚಿಕೆ ಮಾಡಬೇಕು. ಇದಕ್ಕೆ ಕೆಲವು ಮಾರ್ಗದರ್ಶನಗಳನ್ನು ಸೂಚಿಸಲಾಗಿದೆ. 2011ರ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ನಿಗದಿಯಾಗಲಿದೆ.

ADVERTISEMENT

ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಗಳಿಗಾಗಿ ಮೀಸಲಿರಿಸಬಹುದಾದ ಸ್ಥಾನಗಳ ಸಂಖ್ಯೆಯು ಆಯಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಒಟ್ಟು ಜನಸಂಖ್ಯೆಯ ಒಟ್ಟು ಸ್ಥಾನಗಳ ಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಬೇಕು. ಪರಿಶಿಷ್ಟ ಜಾತಿಗೆ ಸಂಬಂಧಪಟ್ಟ ಅಭ್ಯರ್ಥಿಯು ಲಭ್ಯವಾಗದಿದ್ದಂತಹ ಸಂದರ್ಭದಲ್ಲಿ ಪರಿಶಿಷ್ಟ ಪಂಗಡಕ್ಕೆ ಸಂಬಂಧಪಟ್ಟ ಅಭ್ಯರ್ಥಿಯಿಂದ ಭರ್ತಿ ಮಾಡಬಹುದಾಗಿದೆ.
ಪ್ರತಿಯೊಂದು ವರ್ಗದಲ್ಲಿ ಅಂದರೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ಪ್ರವರ್ಗ 'ಎ' ಮತ್ತು 'ಬಿ' ಮತ್ತು ಮೀಸಲೇತರ (ಸಾಮಾನ್ಯ) ಸ್ಥಾನಗಳಲ್ಲಿ ಶೇ 50ಕ್ಕೆ ಮೀರದಂತೆ ಸ್ಥಾನಗಳನ್ನು ಮಹಿಳೆಯರಿಗೆ ಮೀಸಲಿಡಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.