
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಕಾರ್ಯಾಚರಣೆ ನಡೆಸಿ, ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಮಲ್ಲತ್ತಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 49/2ರಲ್ಲಿ ₹45 ಕೋಟಿ ಮೌಲ್ಯದ ಸ್ವತ್ತು ವಶಪಡಿಸಿಕೊಂಡಿತು.
ಅನಧಿಕೃತವಾಗಿ ನಿರ್ಮಿಸಿದ್ದ ಶೆಡ್, ಕಟ್ಟಡಗಳನ್ನು ಜೆಸಿಬಿ ಯಂತ್ರದ ಮೂಲಕ ತೆರವುಗೊಳಿಸಿ, 35 ಗುಂಟೆ ಜಾಗವನ್ನು ವಶಕ್ಕೆ ಪಡೆದುಕೊಳ್ಳಲಾಯಿತು. ಜಾಗದ ಸುತ್ತಲೂ ಬೇಲಿ ಹಾಕಿ ರಕ್ಷಣೆ ಮಾಡಲಾಗಿದೆ.
‘ಆಸ್ತಿ ಖರೀದಿಸುವ ಮೊದಲು ಸಂಬಂಧಿತ ದಾಖಲೆಗಳ ಸಮಗ್ರ ಪರಿಶೀಲನೆ ನಡೆಸಬೇಕು. ಅನುಮೋದಿತ ಬಡಾವಣೆಗಳಲ್ಲಿ ಮಾತ್ರ ನಿವೇಶನಗಳನ್ನು ಖರೀದಿಸಬೇಕು. ಕಾನೂನುಬದ್ಧ ಅನುಮತಿ ಹಾಗೂ ಸಂಬಂಧಿತ ಪ್ರಾಧಿಕಾರಗಳಿಂದ ದೃಢೀಕರಣ ಪಡೆಯುವುದು ಅಗತ್ಯ’ ಎಂದು ನಾಗರಿಕರಿಗೆ ಬಿಡಿಎ ತಿಳಿಸಿದೆ.
ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಬಿಡಿಎ ಕಾರ್ಯಪಡೆಯ ಪಶ್ಚಿಮ ವಿಭಾಗದ ಕಾರ್ಯಪಾಲಕ ಎಂಜಿನಿಯರ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.