ಹಲ್ಲೆ
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ಮದ್ಯದಂಗಡಿಗೆ ನುಗ್ಗಿ ಇಬ್ಬರ ಮೇಲೆ ಬಾಟಲಿಯಿಂದ ಹಲ್ಲೆ ಮಾಡಿ ಕೊಲೆಗೆ ಯತ್ನಿಸಿದ ಘಟನೆ ಮಹಾಲಕ್ಷ್ಮೀ ಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ನಗರದ ನಿವಾಸಿಗಳಾದ ವಂಶಿ ಕೃಷ್ಣ ಹಾಗೂ ಪವನ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಸರಸ್ವತಿ ಮುಖ್ಯ ರಸ್ತೆಯಲ್ಲಿರುವ ಸ್ಪೂರ್ತಿ ಬಾರ್‌ನಲ್ಲಿ ಇಬ್ಬರು ಸ್ನೇಹಿತರು ರಾತ್ರಿ ಮದ್ಯ ಸೇವಿಸುತ್ತಿದ್ದ ವೇಳೆ ಮೂವರು ವ್ಯಕ್ತಿಗಳು ಬಂದು ಬೀರು ಬಾಟಲಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಪರಾರಿಯಾಗಿದ್ದಾರೆ.
ಸ್ಥಳಕ್ಕೆ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
‘ಇಬ್ಬರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. ವೈಯಕ್ತಿಕ ದ್ವೇಷದಿಂದಾಗಿ ಹಲ್ಲೆ ನಡೆದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗಿದೆ. ಗಾಯಾಳುಗಳು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿಗಳ ಸುಳಿವು ಸಿಕ್ಕಿಲ್ಲ. ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸಲಾಗುತ್ತಿದೆ’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.