ಬೆಂಗಳೂರು: ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಆರು ಆರೋಪಿಗಳನ್ನು ಎಲೆಕ್ಟ್ರಾನಿಕ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಆಂಧ್ರಪ್ರದೇಶದ ಕಡಪ ಜಿಲ್ಲೆಯ ನಾಗನೂರು ಕುಮಾರ್(22) ಹಾಗೂ ನಂದ್ಯಾಲ ಜಿಲ್ಲೆಯ ಶಿವಶಂಕರ(20), ಬೆಳಗಾವಿ ಜಿಲ್ಲೆಯ ಸಾಗರ್ ಸಣ್ಣಕ್ಕಿ(32), ಗೋಕಾಕ್‌ನ ಶಿವಕುಮಾರ್ (30), ಮೂಡಲಗಿಯ ಹಾಲಪ್ಪ (29) ಹಾಗೂ ಗುಡೂಸಾಬ್ ಮುಲ್ಲಾ (36) ಬಂಧಿತರು. ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಯ ಪತ್ತೆಗೆ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.
ಬಂಧಿತರಿಂದ ₹25 ಲಕ್ಷ ಮೌಲ್ಯದ ಒಂದು ಆಟೊ ಹಾಗೂ 70 ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಎಲೆಕ್ಟ್ರಾನಿಕ್ ಸಿಟಿಯ ಪ್ರಗತಿನಗರದ ನಿವಾಸಿಯೊಬ್ಬರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಗ್ಯಾಂಗ್ ಅನ್ನು ಪತ್ತೆಹಚ್ಚಲಾಯಿತು ಎಂದು ಪೊಲೀಸರು ತಿಳಿಸಿದರು.
ದೂರುದಾರರು, ಜುಲೈ 10ರಂದು ಎಲೆಕ್ಟ್ರಾನಿಕ್ ಸಿಟಿಯಲ್ಲಿರುವ ಬಿಎಂಟಿಸಿ ಬಸ್ ನಿಲ್ದಾಣದಿಂದ ಕೂಡ್ಲು ಗೇಟ್ ಬಳಿಯಿರುವ ಸ್ನೇಹಿತನ ಮನೆಗೆ ತೆರಳಲು ಬಿಎಂಟಿಸಿ ಬಸ್ ಹತ್ತುತ್ತಿದ್ದರು. ಆ ಸಂದರ್ಭದಲ್ಲಿ ನಾಲ್ವರು ಹುಡುಗರು ದೂರುದಾರರನ್ನು ತಳ್ಳಿಕೊಂಡು ಮುಂದೆ ಹೋಗಿ ಮೊಬೈಲ್ ಕಳ್ಳತನ ಮಾಡಿದ್ದರು. ಸ್ವಲ್ಪ ದೂರ ಪ್ರಯಾಣಿಸಿದ ಬಳಿಕ, ಮೊಬೈಲ್ ಕಳ್ಳತನ ಆಗಿರುವುದು ದೂರುದಾರರ ಗಮನಕ್ಕೆ ಬಂದಿತ್ತು. ಈ ಸಂಬಂಧ ಜುಲೈ 13ರಂದು ಎಲೆಕ್ಟ್ರಾನಿಕ್ ಸಿಟಿ ಠಾಣೆಯ ಪೊಲೀಸರಿಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಹೊಸೂರು ಮುಖ್ಯ ರಸ್ತೆಯ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ಮೂವರು ಅನುಮಾನಾಸ್ಪದವಾಗಿ ಓಡಾಟ ನಡೆಸುತ್ತಿದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ, ನಡೆಸಿದಾಗ ಪ್ರಯಾಣಿಕರ ಸೋಗಿನಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿರುವುದಾಗಿ ತಪ್ಪೊಪ್ಪಿಕೊಂಡಿದ್ದರು. ಅವರು ನೀಡಿದ ಸುಳಿವು ಆಧರಿಸಿ, ದೇವನಹಳ್ಳಿಯ ದೇವಗಾನಹಳ್ಳಿಯ ದೇವಸ್ಥಾನದ ಬಳಿ ಮತ್ತೆ ಮೂವರನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
‘ಕದ್ದ ಮೊಬೈಲ್‌ಗಳನ್ನು ಆಂಧ್ರಪ್ರದೇಶ ಹಾಗೂ ಬೆಂಗಳೂರಿನ ಕೆಲವು ಕಡೆ ಕಡಿಮೆ ಬೆಲೆಗೆ ಮಾರಾಟ ಮಾಡಿದ್ದರು. ಇನ್ನೂ ಕೆಲವು ಮೊಬೈಲ್‌ಗಳ ಬಿಡಿಭಾಗಗಳನ್ನು ಬೇರ್ಪಡಿಸಿ ಮಾರಾಟ ಮಾಡಿದ್ದರು’ ಎಂದು ಪೊಲೀಸರು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.