ADVERTISEMENT

ಬೆಂಗಳೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ಬಾಲಕನ ಶವ ಸಂಪ್‌ನಲ್ಲಿ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2026, 18:04 IST
Last Updated 1 ಫೆಬ್ರುವರಿ 2026, 18:04 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಮೂರು ದಿನಗಳ ಹಿಂದೆ ನಾಪತ್ತೆಯಾಗಿದ್ದ 14 ವರ್ಷದ ಬಾಲಕ, ದಕ್ಷಿಣ ತಾಲ್ಲೂಕಿನ ತಾತಗುಣಿ ಸಮೀಪ ಶವವಾಗಿ ಪತ್ತೆಯಾಗಿದ್ದಾನೆ.

ಬೆಂಗಳೂರು ಜಲಮಂಡಳಿ (ಬಿಡಬ್ಲ್ಯುಎಸ್‌ಎಸ್‌ಬಿ) ಪೈಪ್‌ಲೈನ್ ಅಳವಡಿಕೆಗಾಗಿ ನಿರ್ಮಿಸಿದ್ದ ತೆರೆದ ಸಂಪ್‌ನಲ್ಲಿ ಬಾಲಕನ ಮೃತದೇಹ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ರಜನಿಕಾಂತ್ ಎಂಬುವವರ ಪುತ್ರ ಪ್ರೀತಮ್ (14) ಮೃತ ಬಾಲಕ.

‘ಈ ದುರ್ಘಟನೆಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ. ಪೈಪ್‌ಲೈನ್‌ಗಾಗಿ ತೆಗೆಯಲಾಗಿದ್ದ ಸಂಪ್‌ ಅನ್ನು ಮುಚ್ಚಿರಲಿಲ್ಲ. ಬಾಲಕ ಓಡಾಡುವ ವೇಳೆ ಆಕಸ್ಮಿಕವಾಗಿ ಸಂಪ್‌ಗೆ ಬಿದ್ದಿರುವ ಸಾಧ್ಯತೆಯಿದೆ’ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ADVERTISEMENT

ತಾತಗುಣಿಯ ಬಾಡಿಗೆ ಮನೆಯಲ್ಲಿ ರಜನಿಕಾಂತ್‌ ಕುಟುಂಬ ವಾಸವಿದೆ. ಪ್ರೀತಮ್ ಮೂರು ದಿನಗಳ ಹಿಂದೆ ಮನೆಯಿಂದ ಹೊರಗೆ ಹೋದವನು ವಾಪಸ್‌ ಬಂದಿರಲಿಲ್ಲ. ಈ ಸಂಬಂಧ ಪೋಷಕರು ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.

ಪೊಲೀಸರು ಮತ್ತು ಸ್ಥಳೀಯರು ಹುಡುಕಾಟ ನಡೆಸುತ್ತಿದ್ದ ವೇಳೆ ಭಾನುವಾರ ಜಲಮಂಡಳಿ ಕಾಮಗಾರಿ ನಡೆಯುತ್ತಿದ್ದ ಸ್ಥಳದ ತೆರೆದ ಸಂಪ್‌ನಲ್ಲಿ ಶವ ಪತ್ತೆಯಾಗಿದೆ. ಮೃತದೇಹದ ಎದುರು ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.

ಸ್ಥಳಕ್ಕೆ ಧಾವಿಸಿದ ಕಗ್ಗಲೀಪುರ ಪೊಲೀಸರು ಮೃತದೇಹವನ್ನು ಸಂಪ್‌ನಿಂದ ಹೊರತೆಗೆದು, ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡು, ತನಿಖೆಗೆ ಮುಂದಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.