ದಂಡ (ಸಾಂದರ್ಭಿಕ ಚಿತ್ರ)
– ಐಸ್ಟಾಕ್ ಚಿತ್ರ
ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ಬಸವನಗುಡಿ ವ್ಯಾಪ್ತಿಯ ಎಂ.ಎನ್. ಕೃಷ್ಣರಾವ್ ರಸ್ತೆಯಲ್ಲಿ ನಿರ್ಮಾಣ ಹಂತದ ಕಟ್ಟಡದ ಮುಂಭಾಗದಲ್ಲಿರುವ ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ನಾಗರಿಕರ ಓಡಾಟಕ್ಕೆ ಸಮಸ್ಯೆ ಮಾಡಿದ ಮಾಲೀಕರಿಗೆ ₹1 ಲಕ್ಷ ದಂಡ ವಿಧಿಸಲಾಗಿದೆ.
ಸ್ವತ್ತಿನ ಸಂಖ್ಯೆ 16ರಲ್ಲಿ ಕಟ್ಟಡ ನಿರ್ಮಿಸುತ್ತಿದ್ದು, ಪಾದಚಾರಿ ಮಾರ್ಗದಲ್ಲಿ ಸಾರುವೆ ಅಳವಡಿಸಿ ಅದಕ್ಕೆ ಹಸಿರು ಬಣ್ಣದ ನೆಟ್ ಹಾಕಿ ಸಂಪೂರ್ಣವಾಗಿ ಒತ್ತುವರಿ ಮಾಡಿಕೊಳ್ಳಲಾಗಿತ್ತು. ಕಟ್ಟಡ ಮಾಲೀಕರಿಗೆ ನೋಟೀಸ್ ನೀಡಿ ದುಪ್ಪಟ್ಟು ದಂಡ ವಿಧಿಸಲು ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೂಚಿಸಿದ್ದರು.
ಅದರಂತೆ ವಲಯ ಮುಖ್ಯ ಎಂಜಿನಿಯರ್ ಬಸವರಾಜ್ ಕಬಾಡೆ ಅವರ ಮಾರ್ಗದರ್ಶನದಲ್ಲಿ ಸ್ಥಳ ಪರಿಶೀಲನೆ ನಡೆಸಲಾಯಿತು. ಪಾಲಿಕೆಯಿಂದ ಅನುಮತಿ ಪಡೆಯದೆ ರಸ್ತೆ/ ಪಾದಚಾರಿ ಮಾರ್ಗವನ್ನು ಒತ್ತುವರಿ ಮಾಡಿಕೊಂಡು ಸಾರ್ವಜನಿಕರಿಗೆ ಸಮಸ್ಯೆ ಉಂಟಾಗಿರುವುದು ಕಂಡುಬಂತು. ಕಟ್ಟಡ ಮಾಲೀಕರಾದ ರಾಜೇಂದ್ರ ಕುಮಾರ್ ಅವರಿಗೆ ಸೂಚನಾ ಪತ್ರ ನೀಡಿ, ₹1 ಲಕ್ಷ ದಂಡವನ್ನು ಪಾವತಿಸಲು ಸೂಚಿಸಲಾಗಿತ್ತು. ಅವರು ದಂಡವನ್ನು ಚೆಕ್ ಮೂಲಕ ಪಾವತಿಸಿದ್ದಾರೆ ಎಂದು ಚಿಕ್ಕಪೇಟೆ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.