ಗ್ರೇಟರ್ ಬೆಂಗಳೂರು
ಬೆಂಗಳೂರು: ಕಟ್ಟಡ ಪ್ರಾರಂಭಿಕ ಪ್ರಮಾಣ ಪತ್ರ (ಸಿಸಿ) ಹಾಗೂ ಸ್ವಾಧೀನಾನುಭವ ಪ್ರಮಾಣಪತ್ರ (ಒಸಿ) ಇಲ್ಲದಿರುವ ಕಟ್ಟಡಗಳಿಗೆ ವಿದ್ಯುತ್ ಮತ್ತು ನೀರು ಸಂಪರ್ಕ ನೀಡುವ ಬಗ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು ರಾಜ್ಯದ ಇತರೆಡೆಗಳಲ್ಲಿ ನಿರ್ಮಿಸಿರುವ ಕಟ್ಟಡಗಳಿಗೆ ನೀರು ಹಾಗೂ ವಿದ್ಯುತ್ ಸಂಪರ್ಕ ಕಲ್ಪಿಸುವ ಕುರಿತು ಇರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈ ಸಭೆ ಕರೆಯಲಾಗಿತ್ತು.
‘ಗುರುವಾರ (ಅ.9) ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ತೀರ್ಮಾನ ತೆಗೆದುಕೊಳ್ಳಲು ನಿರ್ಧರಿಸಲಾಯಿತು. ಈ ಬಗ್ಗೆ ಪ್ರಸ್ತಾವ ಸಲ್ಲಿಸುವಂತೆ ಕಾನೂನು ಸಚಿವ ಎಚ್.ಕೆ.ಪಾಟೀಲ ಮತ್ತು ಇತರ ಇಲಾಖೆಗಳ ಸಚಿವರಿಗೆ ಮುಖ್ಯಮಂತ್ರಿ ಸೂಚಿಸಿದರು’ ಎಂದು ಸಭೆಯ ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸುದ್ದಿಗಾರರಿಗೆ ತಿಳಿಸಿದರು.
‘30X40 ಅಡಿ ಅಳತೆಯ ನಿವೇಶನದಲ್ಲಿ ನಿರ್ಮಿಸಿದ ಕಟ್ಟಡಗಳಿಗೆ ಅನುಮತಿ ನೀಡಲು ತೀರ್ಮಾನ ಮಾಡಿದ್ದೇವೆ. ಇದರ ಅನುಷ್ಠಾನಕ್ಕೆ ಇಂಧನ ಇಲಾಖೆಗೆ ಕಾನೂನಿನ ಅಡೆತಡೆಗಳಿವೆ. ಈ ಅಡೆತಡೆಗಳನ್ನು ನಿವಾರಿಸಲು ಚರ್ಚೆ ನಡೆಸಲಾಯಿತು’ ಎಂದು ಅವರು ಹೇಳಿದರು.
‘ಈ ವಿಚಾರವಾಗಿ ಹಲವು ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳಿಗೆ ಸುಪ್ರೀಂ ಕೋರ್ಟ್ ನ್ಯಾಯಾಂಗ ನಿಂದನೆಯ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಿಂದ ಈ ಕುರಿತ ಮಾಹಿತಿಯನ್ನು ಪಡೆದಿದ್ದೇವೆ. ಕಾನೂನು ಚೌಕಟ್ಟಿನಲ್ಲಿ ದಾರಿ ಹುಡುಕುತ್ತಿದ್ದೇವೆ. ಜಿಬಿಎ ಮಾತ್ರವಲ್ಲದೇ ಇಡೀ ರಾಜ್ಯಕ್ಕೆ ಅನ್ವಯ ಆಗುವಂತೆ ಮಾಡಲು ಕಾನೂನು ತಜ್ಞರ ಜತೆ ಚರ್ಚಿಸಿ, ಪ್ರಸ್ತಾವನೆ ಸಲ್ಲಿಸಲು ಕಾನೂನು ಇಲಾಖೆಗೆ ಸೂಚಿಸಿದ್ದೇವೆ’ ಎಂದು ಶಿವಕುಮಾರ್ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.