
ಬೆಂಗಳೂರು: ಕಾರಿನಿಂದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆಸಿ ದಂಪತಿಯ ಕೊಲೆಗೆ ಯತ್ನಿಸಿದ್ದ ಆರೋಪಿಯನ್ನು ಸದಾಶಿವನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಕೊಡಿಗೇಹಳ್ಳಿ ಬಾಲಾಜಿ ಲೇಔಟ್‌ನ ಸುಕೃತ್ (23) ಬಂಧಿತ.
ಘಟನೆಯಲ್ಲಿ ವಿದ್ಯಾರಣ್ಯಪುರ ನಿವಾಸಿಗಳಾದ ಎ.ವಿನೇತ್ ಹಾಗೂ ಅಂಕಿತಾ ಪಾಟೀಲ್ ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು. ಅಂಕಿತಾ ಅವರು ನೀಡಿದ ದೂರಿನ ಮೇರೆಗೆ ಭಾರತೀಯ ನ್ಯಾಯ ಸಂಹಿತೆ(ಬಿಎನ್‌ಎಸ್) ಸೆಕ್ಷನ್ 109(1) ಅಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಅಕ್ಟೋಬರ್ 26ರಂದು ದ್ವಿಚಕ್ರ ವಾಹನದಲ್ಲಿ ತಮ್ಮ ಮಗನೊಂದಿಗೆ ದಂಪತಿ ಇಂದಿರಾನಗರಕ್ಕೆ ತೆರಳಲು ನ್ಯೂ ಬಿಇಎಲ್ ಮುಖ್ಯ ರಸ್ತೆಯ ಮೂಲಕ ಎಂ.ಎಸ್.ರಾಮಯ್ಯ ಆಸ್ಪತ್ರೆಯ ಸಿಗ್ನಲ್ ಜಂಕ್ಷನ್ ಕಡೆಯಿಂದ ಸದಾಶಿವನಗರ ಜಂಕ್ಷನ್ ಕಡೆಗೆ ತೆರಳುತ್ತಿದ್ದರು. ಅಲ್ಲಿ ವೇಗವಾಗಿ ಬಂದ ಕಾರು, ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿತ್ತು. ಡಿಕ್ಕಿಯ ರಭಸಕ್ಕೆ ದ್ವಿಚಕ್ರ ವಾಹನದಿಂದ ಮೂವರು ಕೆಳಕ್ಕೆ ಬಿದ್ದಿದ್ದರು. ದಂಪತಿ ಗಂಭೀರವಾಗಿ ಗಾಯಗೊಂಡಿದ್ದರು ಎಂದು ಪೊಲೀಸರು ಹೇಳಿದರು.
ಜಂಕ್ಷನ್‌ನಲ್ಲಿ ಅಳವಡಿಸಿದ್ದ ಸಿ.ಸಿ.ಟಿ.ವಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿಯನ್ನು ಸದಾಶಿವನಗರ ಸಂಚಾರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದಾಗ ಕಾರು ಚಾಲಕ ಉದ್ದೇಶಪೂರ್ವಕವಾಗಿ ಕೃತ್ಯ ಎಸಗಿರುವುದು ಸಾಬೀತಾಗಿತ್ತು. ಬಳಿಕ, ಪ್ರಕರಣವನ್ನು ಸದಾಶಿವನಗರದ ಕಾನೂನು ಸುವ್ಯವಸ್ಥೆ ಠಾಣೆಗೆ ವರ್ಗಾವಣೆ ಮಾಡಿದ್ದರು. ಕೊಲೆ ಯತ್ನ ಪ್ರಕರಣ ದಾಖಲು ಮಾಡಿಕೊಂಡು ತಿಂಡ್ಲುವಿನ ಬಾಲಾಜಿನಗರದಲ್ಲಿ ಆರೋಪಿಯನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ಆರೋಪಿ ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆದುಕೊಳ್ಳಲಾಗಿದೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.