ಬೆಂಗಳೂರು: ‘ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಬರುವ ನಗರ ಪಾಲಿಕೆಗಳ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಈಗಲೇ ಸಿದ್ಧರಾಗಿ’ ಎಂದು ವಿಧಾನ ಪರಿಷತ್‌ನ ಸರ್ಕಾರಿ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.
‘ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಮತ ಕಳವು ನಡೆಸುತ್ತಿದೆ’ ಎಂದು ಆರೋಪಿಸಿ ಕೆಪಿಸಿಸಿ ವತಿಯಿಂದ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
‘ವಿಧಾನಸಭೆ ಚುನಾವಣೆ ವೇಳೆ ಕೊಟ್ಟ ಭರವಸೆಯಂತೆ ಐದು ಗ್ಯಾರಂಟಿಗಳನ್ನು ಜಾರಿಗೊಳಿಸುವ ಮೂಲಕ ನುಡಿದಂತೆ ನಡೆದಿದ್ದೇವೆ. ಗ್ಯಾರಂಟಿಯಿಂದ ರಾಜ್ಯದ ಜನತೆ ನೆಮ್ಮದಿಯ ಬದುಕು ಕಟ್ಟಿಕೊಂಡಿದ್ದಾರೆ. ಜನವರಿ ತಿಂಗಳಲ್ಲಿ ನಡೆಯುವ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆ ಆಗಲಿದೆ’ ಎಂದರು.
‘ಕಾರ್ಯಕರ್ತರು ಮನೆ ಮನೆಗೆ ತೆರಳಿ ರಾಜ್ಯ ಸರ್ಕಾರದ ಸಾಧನೆಗಳಿಗೆ ಪ್ರಚಾರ ನೀಡಬೇಕು. ಅಲ್ಲದೆ,
ಬೆಂಗಳೂರು ನಗರದಲ್ಲಿ ಕೈಗೊಂಡಿರುವ ಪ್ರಮುಖ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಬೇಕು’ ಎಂದೂ ಅವರು ಮನವಿ ಮಾಡಿದರು.
‘ಕೇಂದ್ರದ ಬಿಜೆಪಿ ಸರ್ಕಾರದ 11 ವರ್ಷಗಳ ಆಡಳಿತದಲ್ಲಿ ಬೆಲೆ ಏರಿಕೆ, ನಿರುದ್ಯೋಗದಿಂದ ಜನರು ಭ್ರಮನಿರಸನರಾಗಿದ್ದಾರೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ಬರಬೇಕಾದ ಅನುದಾನದಲ್ಲಿ ತಾರತಮ್ಯ ಮಾಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ’ ಎಂದೂ ದೂರಿದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹನುಮಂತರಾಯಪ್ಪ, ಮಾಜಿ ಮೇಯರ್ ಹುಚ್ಚಪ್ಪ, ಪಕ್ಷದ ಮುಖಂಡ ಕೇಶವಮೂರ್ತಿ, ರಾಜ್ಯ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಂಜುನಾಥ್ ಗೌಡ ಮತ್ತಿತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.