ADVERTISEMENT

ಬೆಂಗಳೂರು | RSS ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ಕಾರ್ಯಕರ್ತರ ಯತ್ನ

ಪ್ರತಿಭಟನೆ ನಡೆಸಿದವರ ವಿರುದ್ಧ ಎಫ್‌ಐಆರ್ ದಾಖಲಿಸಲು ಬಿಜೆಪಿ ಮುಖಂಡರ ಆಗ್ರಹ

​ಪ್ರಜಾವಾಣಿ ವಾರ್ತೆ
Published 17 ಅಕ್ಟೋಬರ್ 2025, 22:54 IST
Last Updated 17 ಅಕ್ಟೋಬರ್ 2025, 22:54 IST
ಆರ್‌ಎಸ್‌ಎಸ್‌ ಕಚೇರಿ ಎದುರು ಪ್ರತಿಭಟನೆ ನಡಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಗರ ಪೊಲೀಸ್‌ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರಿಗೆ ಬಿಜೆಪಿ ಮುಖಂಡರು ಶುಕ್ರವಾರ ಮನವಿ ಸಲ್ಲಿಸಿದರು
ಆರ್‌ಎಸ್‌ಎಸ್‌ ಕಚೇರಿ ಎದುರು ಪ್ರತಿಭಟನೆ ನಡಸಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ನಗರ ಪೊಲೀಸ್‌ ಕಮಿಷನರ್ ಸೀಮಾಂತ್ ಕುಮಾರ್ ಸಿಂಗ್ ಅವರಿಗೆ ಬಿಜೆಪಿ ಮುಖಂಡರು ಶುಕ್ರವಾರ ಮನವಿ ಸಲ್ಲಿಸಿದರು   

ಬೆಂಗಳೂರು: ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಕೇಶವ ಕೃಪಾಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್‌ ಘಟಕದ ಕಾರ್ಯಕರ್ತರನ್ನು ಪೊಲೀಸರು ಶುಕ್ರವಾರ ವಶಕ್ಕೆ ಪಡೆದು ಬಿಡುಗಡೆ ಮಾಡಿದರು.

ಕಾಂಗ್ರೆಸ್‌ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನ ನಡೆಸಿರುವ ವಿಚಾರ ತಿಳಿಯುತ್ತಿದ್ದಂತೆ ಆರ್‌ಎಸ್‌ಎಸ್‌ನ ಮುಖಂಡರು ಕಚೇರಿಗೆ ಧಾವಿಸಿದರು. ಆಗ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು.

ನಂತರ ಪೊಲೀಸರು ಸ್ಥಳಕ್ಕೆ ಬಂದು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದರು. ಪ್ರತಿಭಟನಕಾರರನ್ನು ವಶಕ್ಕೆ ಪಡೆದುಕೊಂಡರು. 

ADVERTISEMENT

ಆರ್‌ಎಸ್‌ಎಸ್‌ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿರುವುದರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ಕಾರ್ಯಕರ್ತರು ನಗರ ಪೊಲೀಸ್‌ ಕಮಿಷನರ್‌ ಸೀಮಾಂತ್‌ ಕುಮಾರ್ ಸಿಂಗ್ ಅವರಿಗೆ ದೂರು ನೀಡಿದರು.

‘ಪೊಲೀಸ್ ಇಲಾಖೆ ಸ್ವತಂತ್ರವಾಗಿ ಕಾರ್ಯ ನಿರ್ವಹಿಸಬೇಕು. ಆದರೆ, ಇಲಾಖೆ ಯಾವುದೇ ಮುಂಜಾಗ್ರತೆ ವಹಿಸದೇ ನಿರ್ಲಕ್ಷ್ಯ ತೋರಿದೆ. ರಾಜ್ಯ ಸರ್ಕಾರವು ಇಲಾಖೆಗಳ ಕಾರ್ಯ ವ್ಯಾಪ್ತಿಯಲ್ಲಿ ಅನಗತ್ಯ ಹಸ್ತಕ್ಷೇಪ ನಡೆಸುತ್ತಿರುವುದು ವೈಫಲ್ಯಕ್ಕೆ ಕಾರಣವಾಗಿದೆ’ ಎಂದು ವಿಧಾನ ಪರಿಷತ್‌ನ ವಿರೋಧ ಪಕ್ಷದ ಮುಖ್ಯಸಚೇತಕ ಎನ್‌.ರವಿಕುಮಾರ್ ಅವರು ದೂರಿದರು.

‘ಶತಮಾನೋತ್ಸವ ಸಂಭ್ರಮದಲ್ಲಿ ವರ್ಷವಿಡೀ ನೂರಾರು ಜನಮುಖಿ ಕಾರ್ಯಕ್ರಮಗಳ ಯೋಜನೆಯಲ್ಲಿರುವ ಐತಿಹಾಸಿಕ ಸಂಘಟನೆಯ ಕಚೇರಿ ಎದುರು ಕಿಡಿಗೇಡಿತನಕ್ಕೆ ಪೊಲೀಸ್‌ ಇಲಾಖೆ ಅವಕಾಶ ಮಾಡಿಕೊಡಬಾರದು. ಆರ್‌ಎಸ್‌ಎಸ್‌ ಬಗ್ಗೆ ತಕರಾರುಗಳಿದ್ದರೆ ಮಾಧ್ಯಮಗಳಲ್ಲಿ ಚರ್ಚಿಸಲು ಮುಕ್ತ ಅವಕಾಶವಿದೆ’ ಎಂದರು.

‘ಆರ್‌ಎಸ್‌ಎಸ್‌ ರಾಜ್ಯ ಕಚೇರಿ ಮುಂದೆ ಕಾಂಗ್ರೆಸ್‌ನವರು ಗೂಂಡಾವರ್ತನೆ ತೋರಿದ್ದಾರೆ. ಅವರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು’ ಎಂದು ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್ ಕುಮಾರ್ ಆಗ್ರಹಿಸಿದರು.

‘ಸಂಘದ ಶತಮಾನೋತ್ಸವದ ಸಂದರ್ಭದಲ್ಲಿ ದೇಶದಾದ್ಯಂತ ನೂರಾರು ಕಾರ್ಯಕ್ರಮಗಳನ್ನು ಕಳೆದ 3-4 ತಿಂಗಳಲ್ಲಿ ಮಾಡುತ್ತಿದ್ದೇವೆ. ಇಂತಹ ಸಂದರ್ಭದಲ್ಲಿ ಕೇಶವ ಕೃಪಾದ ಮುಂದೆ ಕೆಲವರು ಗೂಂಡಾವರ್ತನೆ ಮಾಡಿದ್ದು, ಪ್ರತಿಭಟನೆ ನೆಪದಲ್ಲಿ ಅವಾಚ್ಯ ಶಬ್ದಗಳಿಂದ ಕೂಗಿರುವುದನ್ನು ಸಹಿಸಲು ಸಾಧ್ಯವಿಲ್ಲ’ ಎಂದರು.

ಪೂರ್ವಾನುಮತಿ ಇಲ್ಲದೇ ಪ್ರತಿಭಟಿಸುವಂತಿಲ್ಲ; ಅನುಮತಿ ಪಡೆದು ಪ್ರತಿಭಟನೆ ಮಾಡುವುದಾದರೆ ಬೆಂಗಳೂರಿನಲ್ಲಿ ನಿರ್ದಿಷ್ಟ ಸ್ಥಳ ಇದೆ. ಅನುಮತಿ ಪಡೆಯದೇ ಪ್ರತಿಭಟನೆ ಮಾಡಿದ್ದರೆ ಅವರ ಮೇಲೆ ಎಫ್‍ಐಆರ್ ದಾಖಲಿಸಿ ಎಂದು ಆಗ್ರಹಿಸಿದರು.

ಶಾಸಕ ಭರತ್ ಶೆಟ್ಟಿ, ಬಿಜೆಪಿ ಉತ್ತರ ಜಿಲ್ಲಾ ಘಟಕದ ಅಧ್ಯಕ್ಷ ಎಸ್. ಹರೀಶ್ ಹಾಗೂ ಬಿಜೆಪಿ ಬೆಂಗಳೂರು ಕೇಂದ್ರ ಜಿಲ್ಲಾ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ ಅವರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.