ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ವಿಚಾರಣೆಗೆ ಕರೆತಂದಿದ್ದ ವಿಚಾರಣಾಧೀನ ಕೈದಿಯೊಬ್ಬರು ಸಿಟಿ ಸಿವಿಲ್ ಕೋರ್ಟ್ ಕಟ್ಟಡದ ಐದನೇ ಮಹಡಿಯಿಂದ ಜಿಗಿದು ಗುರುವಾರ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗೌತಮ್ ಆತ್ಮಹತ್ಯೆ ಮಾಡಿಕೊಂಡ ವಿಚಾರಣಾಧೀನ ಕೈದಿ.
ಕೆ.ಆರ್.ಪುರದ ನಿವಾಸಿ ಗೌತಮ್ ಅವರು ತಮ್ಮ ಸಂಬಂಧಿಯೂ ಆಗಿರುವ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂಬ ಆರೋಪವಿತ್ತು. ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಅಡಿ ಆಡುಗೋಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿದ್ದರು. ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಿ ಆರೋಪಿಯನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದರು. ಗುರುವಾರ ಬೆಳಿಗ್ಗೆ ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ವಿಚಾರಣೆಗೆಂದು ಕರೆತಂದಿದ್ದರು. ಆಗ ವಿಚಾರಣಾಧೀನ ಕೈದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
‘ಮೂರನೇ ತ್ವರಿತಗತಿ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಪೋಕ್ಸೊ ಪ್ರಕರಣದ ವಿಚಾರಣೆ ನಿಗದಿ ಆಗಿತ್ತು. ನ್ಯಾಯಾಂಗ ಬಂಧನದಲ್ಲಿದ್ದ ಗೌತಮ್ ಜೊತೆಗೆ ಮತ್ತೊಂದು ಪ್ರಕರಣದ ಆರೋಪಿಯನ್ನೂ ಪೊಲೀಸರು ಪರಪ್ಪನ ಅಗ್ರಹಾರ ಜೈಲಿನಿಂದ ನ್ಯಾಯಾಲಯಕ್ಕೆ ಕರೆ ತಂದಿದ್ದರು’ ಎಂದು ಮೂಲಗಳು ಹೇಳಿವೆ.
‘ಆರೋಪಿಗೆ ಕೈಕೋಳ ಧರಿಸಿಯೇ ಕೋರ್ಟ್ಗೆ ಕರೆತರಲಾಗಿತ್ತು. ಬಳಿಕ ಕೋರ್ಟ್ ಸಭಾಂಗಣದಲ್ಲಿ ಕೈಕೋಳ ತೆಗೆಯಲಾಗಿತ್ತು. ವಿಚಾರಣೆ ಮುಗಿಸಿ ಹೊರಬಂದಿದ್ದ ಗೌತಮ್, ಕುಟುಂಬಸ್ಥರನ್ನು ಕಂಡು ಬೇಸರಕ್ಕೆ ಒಳಗಾಗಿದ್ದರು. ಆಗ ಪೊಲೀಸರ ಕಣ್ತಪ್ಪಿಸಿ 5ನೇ ಮಹಡಿಗೆ ತೆರಳಿದ್ದರು. ಅಲ್ಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಆತ್ಮಹತ್ಯೆ ಪ್ರಕರಣದ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.