ADVERTISEMENT

ಬೆಂಗಳೂರು | ಬಾಂಗ್ಲಾ ಮಹಿಳೆ ಕೊಲೆ: ಚಾಲಕ ಸೆರೆ

ಮಾತನಾಡಲು ನಿರಾಕರಣೆ: ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2025, 14:05 IST
Last Updated 4 ಫೆಬ್ರುವರಿ 2025, 14:05 IST
<div class="paragraphs"><p>ಬಂಧನ</p></div>

ಬಂಧನ

   

(ಪ್ರಾತಿನಿಧಿಕ ಚಿತ್ರ)

ಬೆಂಗಳೂರು: ಬಾಂಗ್ಲಾದೇಶದ ಮಹಿಳೆ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ, ಬಾಗಲಕೋಟೆಯ ಮುದುಕಪ್ಪ (28) ಎಂಬಾತನನ್ನು ರಾಮಮೂರ್ತಿ ನಗರ ಪೊಲೀಸರು ಬಂಧಿಸಿದ್ದಾರೆ.

ADVERTISEMENT

ಜನವರಿ 24ರಂದು ರಾಮಮೂರ್ತಿ ನಗರ ಠಾಣಾ ವ್ಯಾಪ್ತಿಯ ಕಲ್ಕೆರೆ ಕೆರೆ ಬಳಿಯ ನಿರ್ಜನ ಪ್ರದೇಶದಲ್ಲಿ ಅತ್ಯಾಚಾರ ಎಸಗಿ ಬಳಿಕ ಕಲ್ಲು ಎತ್ತಿಹಾಕಿ ಕೊಲೆ ಮಾಡಿದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚಲಾಯಿತು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

‘ಆರೋಪಿ ಹಾಗೂ ಕೊಲೆಯಾದ ಮಹಿಳೆ ನಡುವೆ ಸಲುಗೆ ಇತ್ತು. ಇಬ್ಬರು ಅಕ್ಕಪಕ್ಕದ ಶೆಡ್‌ಗಳಲ್ಲಿ ವಾಸವಾಗಿದ್ದರು. ಆರು ತಿಂಗಳ ಹಿಂದೆ ಬಾಂಗ್ಲಾ ವಲಸಿಗರು ವಾಸವಿದ್ದ ಶೆಡ್‌ಗಳನ್ನು ತೆರವು ಮಾಡಿಸಲಾಗಿತ್ತು. ಆಗಿನಿಂದ ಇಬ್ಬರ ನಡುವೆ ಸಂಪರ್ಕ ಇರಲಿಲ್ಲ. ವಾಟರ್ ಟ್ಯಾಂಕರ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಮುದುಕಪ್ಪ, ಮಹಿಳೆ ಕೆಲಸ ಮಾಡುತ್ತಿದ್ದ ಅಪಾರ್ಟ್‌ಮೆಂಟ್‌ಗೆ ನೀರು ಪೂರೈಸಲು ಹೋದಾಗ ಮಾತನಾಡಿಸಲು ಪ್ರಯತ್ನಿಸುತ್ತಿದ್ದ. ಆದರೆ, ಆಕೆ ನಿರಾಕರಿಸುತ್ತಿದ್ದಳು’ ಎಂದು ಪೊಲೀಸರು ತಿಳಿಸಿದ್ದಾರೆ.

‘ಜನವರಿ 23ರಂದು ಕೆಲಸ ಮುಗಿಸಿ ಮನೆಗೆ ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿದ್ದ ಆರೋಪಿ, ಆಕೆಯನ್ನು ಕಲ್ಕೆರೆ ಸಮೀಪದ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದ. ಆಕೆ ವಿರೋಧಿಸಿದಾಗ, ಅತ್ಯಾಚಾರ ಎಸಗಿ ನಂತರ ಉಸಿರುಗಟ್ಟಿಸಿ ಕೊಲೆ ಮಾಡಿ, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಪರಾರಿಯಾಗಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಕರಣ ದಾಖಲಿಸಿಕೊಂಡಿದ್ದ ರಾಮಮೂರ್ತಿ ನಗರ ಠಾಣೆ ಪೊಲೀಸರು ಘಟನೆಯ ದಿನ ಕೆರೆಯ ಸುತ್ತಮುತ್ತ ಓಡಾಡಿದ್ದ 30ಕ್ಕೂ ಹೆಚ್ಚು ಜನರನ್ನು ವಿಚಾರಣೆಗೆ ಒಳಪಡಿಸಿದ್ದರು. ಮೃತದೇಹದ ಮರಣೋತ್ತರ ಪರೀಕ್ಷಾ ವರದಿ ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್ಎಸ್ಎಲ್‌) ವರದಿಯನ್ನು ಆಧರಿಸಿ ಆರೋಪಿಯನ್ನು ಬಂಧಿಸಿದ್ದಾರೆ. 

ಸಿಸಿಟಿವಿ ಕ್ಯಾಮೆರಾ ಸುಳಿವು ಆಧರಸಿ ಬಂಧನ: ಕೆಲವು ಸ್ಥಳಗಳ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲಿಸಿದಾಗ ಕೆರೆಯ ಪಕ್ಕದ ರಸ್ತೆಯಲ್ಲಿ ಐದಾರು ಮಂದಿ ಅನುಮಾನಾಸ್ಪದವಾಗಿ ಓಡಾಡಿರುವುದು ಕಂಡು ಬಂದಿತ್ತು. ಇದರಲ್ಲಿ ಆರೋಪಿ ಮುದುಕಪ್ಪನ ಚಲನವಲನ ಸೆರೆಯಾಗಿತ್ತು. ಹೀಗಾಗಿ ಆತನನ್ನು ಪತ್ತೆಹಚ್ಚಿ ವಶಕ್ಕೆ ಪಡೆದು ವಿಚಾರಣೆ ಮಾಡಿದಾಗ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಆರೋಪಿ ಮುದುಕಪ್ಪನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ಪಡೆದಿದ್ದು, ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.