
ಬಂಧನ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ನಗರದಲ್ಲಿ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡಿದ್ದ ಆರೋಪಿಯನ್ನು ಮೈಕೋ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ಬನ್ನೇರುಘಟ್ಟ ನಿವಾಸಿ ಕಿರಣ್ ಅಲಿಯಾಸ್ ಚಿಟ್ಟೆಯನ್ನು ಬಂಧಿಸಿ, ₹ 5.60 ಲಕ್ಷ ಮೌಲ್ಯದ ಎರಡು ದ್ವಿಚಕ್ರ ವಾಹನ, 40 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಠಾಣಾ ವ್ಯಾಪ್ತಿಯ ಕುವೆಂಪುನಗರದ ಬಿ.ಟಿ.ಎಂ ಲೇಔಟ್‌ನ ನಿವಾಸಿಯೊಬ್ಬರು ಪಿ.ಜಿ. ಮುಂಭಾಗ ನಿಲ್ಲಿಸಿದ್ದ ದ್ವಿಚಕ್ರ ವಾಹನ ಕಳುವಾಗಿತ್ತು. ಪ್ರಕರಣ ದಾಖಲಿಸಿಕೊಂಡು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಿ, ಅರೆಕೆರೆ ಸಾಮ್ರಾಟ್ ಲೇಔಟ್ ಬಳಿ ಆರೋಪಿಯನ್ನು ದ್ವಿಚಕ್ರ ವಾಹನ ಸಮೇತ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.
ನಗರದ ವಿವಿಧ ಕಡೆ ದ್ವಿಚಕ್ರ ವಾಹನ ಹಾಗೂ ಮೊಬೈಲ್ ಕಳ್ಳತನ ಮಾಡಿರುವುದಾಗಿ ವಿಚಾರಣೆ ವೇಳೆ ಆರೋಪಿ ಒಪ್ಪಿಕೊಂಡಿದ್ದಾನೆ. ಬಿಟಿಎಂ ಲೇಔಟ್‌ನ ವಿವೇಕಾನಂದ ಮೈದಾನ ಪಕ್ಕದ ಖಾಲಿ ಜಾಗದಲ್ಲಿ ನಿಲ್ಲಿಸಿದ್ದ ಕಳವು ಮಾಡಿದ್ದ ವಾಹನವನ್ನು ವಶಪಡಿಸಿಕೊಳ್ಳಲಾಯಿತು. ಬನ್ನೇರುಘಟ್ಟದಲ್ಲಿರುವ ಆರೋಪಿ ನಿವಾಸದಿಂದ ಮೊಬೈಲ್‌ಗಳನ್ನು ಜಪ್ತಿ ಮಾಡಲಾಗಿದ್ದು, ಮೈಕೋ ಲೇಔಟ್ ಠಾಣೆಯ ಎರಡು ದ್ವಿಚಕ್ರ ವಾಹನ ಕಳವು ಪ್ರಕರಣ ಪತ್ತೆಯಾಗಿದೆ ಎಂದು ತಿಳಿಸಿದರು.
ಕದ್ದ ಬೈಕ್‌ಗಳನ್ನು ಬಳಸಿಕೊಂಡು ಮೊಬೈಲ್‌ಗಳನ್ನು ಕಳವು ಮಾಡುತ್ತಿದ್ದ ಎಂಬುದು ತನಿಖೆಯಿಂದ ಗೊತ್ತಾಗಿದೆ. ರಸ್ತೆ ಬದಿ ಮಾತನಾಡಿಕೊಂಡು ಹೋಗುತ್ತಿದ್ದ ವ್ಯಕ್ತಿಗಳನ್ನೇ ಗುರಿಯಾಗಿಸಿಕೊಂಡು ಮೊಬೈಲ್ ಕಳ್ಳತನ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.