ಬೀದಿ ನಾಯಿಗಳು
ಬೆಂಗಳೂರು: ನಗರದಲ್ಲಿ ಬೀದಿ ನಾಯಿಗಳಿಗೆ ಆಹಾರ ನೀಡುತ್ತಿದ್ದ ಮಹಿಳೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರ ವಿರುದ್ಧ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚೂಡಸಂದ್ರ ನಿವಾಸಿ ನೇಹಾ ಪರ್ವೀನ್ ಅವರ ದೂರಿನ ಮೇರೆಗೆ ಸಲೀಂ, ಸುಧಾ, ಕವಿತಾ ಕೌಶಿಕ, ಅಮಿನುಲ್ ರೆಹಮಾನ್, ವಿನೋದ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
‘ಖಾಸಗಿ ಕಂಪನಿ ಉದ್ಯೋಗಿಯಾಗಿರುವ ನೇಹಾ ಅವರು ನಾಲ್ಕು ವರ್ಷಗಳಿಂದ ಅಹದ್ ಸೆರಿನಿಟಿ ಅಪಾರ್ಟ್‌ಮೆಂಟ್‌ನಲ್ಲಿ ನಾಯಿಗಳಿಗೆ ಆಹಾರ ನೀಡುತ್ತಿದ್ದಾರೆ. ಸ್ಥಳೀಯ ನಿವಾಸಿಗಳು ಇದಕ್ಕೆ ವಿರೋಧ ವ್ಯಕ್ತಪಡಿಸಿ, ಹಲವು ಬಾರಿ ಅವರೊಂದಿಗೆ ಜಗಳವಾಡಿದ್ದಾರೆ. ಆಗಸ್ಟ್ 27ರಂದು ನಾಯಿಗಳಿಗೆ ಆಹಾರ ನೀಡಲು ತೆರಳಿದ ನೇಹಾ ಹಾಗೂ ಅವರ ತಂದೆಗೆ, ಅಪಾರ್ಟ್‌ಮೆಂಟ್ ನಿವಾಸಿಗಳಾದ ಸಲೀಂ, ಸುಧಾ, ಕವಿತಾ, ಅಮಿನುಲ್, ವಿನೋದ್ ಅವರು ಅವಾಚ್ಯ ಶಬ್ಧಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ. ಅಲ್ಲದೇ ನಾಯಿಗಳಿಗೂ ಹೊಡೆದು ಹಿಂಸೆ ನೀಡಿದ್ದಾರೆ’ ಎಂದು ಪೊಲೀಸರು ತಿಳಿಸಿದ್ದಾರೆ.
ನೇಹಾ ಅವರ ದೂರಿನ ಮೇರೆಗೆ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ವಿಚಾರಣೆ ನಡೆಸಲಾಗುವುದು ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.