ADVERTISEMENT

ಬೆಂಗಳೂರು | ₹1.50 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ: 9 ಮಂದಿ ಬಂಧನ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 13:51 IST
Last Updated 9 ಸೆಪ್ಟೆಂಬರ್ 2025, 13:51 IST
   

ಬೆಂಗಳೂರು: ನಗರದ ಏಳು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಸಿಸಿಬಿಯ ಮಾದಕ ದ್ರವ್ಯ ನಿಗ್ರಹ ದಳದ ಪೊಲೀಸರು, ಡ್ರಗ್ಸ್‌ ವಿರುದ್ಧ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪೆಡ್ಲರ್‌ಗಳೂ ಸೇರಿ 9 ಮಂದಿಯನ್ನು ಬಂಧಿಸಿ ₹1.50 ಕೋಟಿ ಮೌಲ್ಯದ ವಿವಿಧ ಮಾದರಿಯ ಮಾದಕ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ಬಂಧಿತರಿಂದ 506 ಗ್ರಾಂ ಎಂಡಿಎಂಎ ಕ್ರಿಸ್ಟಲ್‌, 50 ಎಲ್‌ಎಸ್‌ಡಿ ಸ್ಟ್ರಿಪ್ಸ್‌, 85 ಗ್ರಾಂ ಕೊಕೇನ್‌, 56 ಗ್ರಾಂ ಹೈಡ್ರೊ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ನಗರ ಪೊಲೀಸ್ ಕಮಿಷನರ್‌ ಸೀಮಾಂತ್‌ಕುಮಾರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾಹಿತಿ ನೀಡಿದರು.

ಕುಮಾರಸ್ವಾಮಿ ಲೇಔಟ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ತ್ಯಾಗರಾಜನಗರದ ಶ್ರೇಯಸ್‌ (23) ಹಾಗೂ ಅಶ್ವತ್ಥ್‌ನಗರದ ರಕ್ಷಿತ್‌(24) ಎಂಬುವವರನ್ನು ಬಂಧಿಸಿ 6 ಲಕ್ಷ ಮೌಲ್ಯದ 50 ಎಲ್‌ಎಸ್‌ಡಿ ಸ್ಟ್ರಿಪ್ಸ್‌ ಜಪ್ತಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ADVERTISEMENT

‘ಆರೋಪಿಗಳಿಬ್ಬರೂ ಖಾಸಗಿ ಕಾಲೇಜಿನಲ್ಲಿ ಎಂಜಿನಿಯರಿಂಗ್‌ ಪದವಿ ಪಡೆಯುತ್ತಿದ್ದರು. ಅಪರಿಚಿತರಿಂದ ಕಡಿಮೆ ಬೆಲೆಗೆ ಮಾದಕ ವಸ್ತು ಖರೀದಿಸಿ, ಪರಿಚಯಸ್ಥರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು. ಬಂದ ಹಣವನ್ನು ಮೋಜು–ಮಸ್ತಿಗೆ ಬಳಸುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ಆವಲಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯ ಬಿಎಸ್‌ಆರ್‌ ಲೇಔಟ್‌ನಲ್ಲಿ ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ನೈಜೀರಿಯಾ ದೇಶದ ಒಸ್‌ಬೆಂಜೊ ಮರೆಮ್‌ ಮಾರೆ ಎಂಬಾಕೆಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆಕೆಯಿಂದ ₹2 ಲಕ್ಷ ಮೌಲ್ಯದ ಕೊಕೇನ್ ವಶಕ್ಕೆ ಪಡೆದಿದ್ದಾರೆ. 2024ರಲ್ಲಿ ವೈದ್ಯಕೀಯ ವೀಸಾ ಪಡೆದು ಭಾರತಕ್ಕೆ ಬಂದಿದ್ದ ಮಹಿಳೆ, ಡ್ರಗ್ಸ್ ಪೆಡ್ಲಿಂಗ್‌ನಲ್ಲಿ ತೊಡಗಿದ್ದಳು. ವಿದೇಶದ ಪೆಡ್ಲರ್‌ಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ, ಪರಿಚಯಸ್ಥರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಳು. ಖಚಿತ ಮಾಹಿತಿ ಮೇಲೆ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

ಮತ್ತೊಂದು ಪ್ರಕರಣದಲ್ಲಿ ಅಮೃತಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಹೈಡ್ರೊ ಗಾಂಜಾ ಮಾರಾಟ ಮಾಡುತ್ತಿದ್ದ ಲುಂಬಿನಿ ಗಾರ್ಡನ್‌ನ ನಿವಾಸಿ ಲೋಕೇಶ್ ತಿಮ್ಮಪ್ಪ ಎಂಬಾತನನ್ನು ಬಂಧಿಸಲಾಗಿದೆ. ಆರೋಪಿಯಿಂದ ₹28 ಲಕ್ಷ ಮೌಲ್ಯದ ಹೈಡ್ರೊ ಗಾಂಜಾ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಹೆಬ್ಬಗೋಡಿ ವ್ಯಾಪ್ತಿಯ ವಿನಾಯಕ ಲೇಔಟ್‌ನಲ್ಲಿ ಡ್ರಗ್ಸ್‌ ಪೆಡ್ಲಿಂಗ್‌ನಲ್ಲಿ ತೊಡಗಿದ್ದ ಕೇರಳದ ರೆಹನ್‌ ಮಂಗಟಿಲ್‌ (35) ಎಂಬಾತನನ್ನು ಬಂಧಿಸಲಾಗಿದೆ. ಈತ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ನೆಲಸಿದ್ದ. ಮೊಬೈಲ್‌ ಸರ್ವಿಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಕೆಲಸ ಮುಗಿದ ಬಳಿಕ ಡ್ರಗ್ಸ್ ಮಾರಾಟ ಮಾಡುತ್ತಿದ್ದ. ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿಸಿ, ಹೆಚ್ಚಿನ ಬೆಲೆಗೆ ಗ್ರಾಹಕರಿಗೆ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಹೇಳಿದರು.

ಸಿಲ್ಕ್‌ ಬೋರ್ಡ್ ಜಂಕ್ಷನ್‌ನ ಹೋಟೆಲ್‌ನಲ್ಲಿ ಎಂಡಿಎಂಎ ಕ್ರಿಸ್ಟಲ್‌ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಬಂಧಿಸಿ, ₹36 ಲಕ್ಷ ಮೌಲ್ಯದ ಎಂಡಿಎಂಎ ಕ್ರಿಸ್ಟಲ್‌ ಜಪ್ತಿ ಮಾಡಲಾಗಿದೆ. ಹೆಬ್ಬಗೋಡಿ ಹಾಗೂ ರಾಮಮೂರ್ತಿನಗರದ ಲಾಡ್ಜ್‌ಗಳ ಮೇಲೂ ದಾಳಿ ನಡೆಸಿ, ಇಬ್ಬರು ಡ್ರಗ್ಸ್ ಪೆಡ್ಲರ್‌ಗಳನ್ನು ಬಂಧಿಸಲಾಗಿದೆ. ಬಂಧಿತರಿಂದ ಎಂಡಿಎಂಎ ಕ್ರಿಸ್ಟಲ್‌, ಕೊಕೇನ್‌, ಸಿರಿಂಜ್‌ಗಳು, ನೀಡಲ್‌, ಎಲೆಕ್ಟ್ರಾನಿಕ್ ತೂಕದ ಯಂತ್ರ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.