ಪ್ರಾತಿನಿಧಿಕ ಚಿತ್ರ
– ಪ್ರಜಾವಾಣಿ ಚಿತ್ರ
ಬೆಂಗಳೂರು: ನಿರ್ಮಾಣ ಹಂತದಲ್ಲಿರುವ ಕಟ್ಟಡಗಳಿಗೆ ತಾತ್ಕಾಲಿಕ ವಿದ್ಯುತ್ ಸಂಪರ್ಕ ಪಡೆದು ಹಾಗೂ ಕಾಮಗಾರಿ ಪೂರ್ಣಗೊಂಡಿರುವ ಕಟ್ಟಡಗಳಿಗೆ ಕಡ್ಡಾಯಗೊಳಿಸಿರುವ ಸ್ವಾಧೀನಾನುಭವ ಪತ್ರದಿಂದ (ಒಸಿ) ವಿನಾಯಿತಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇದೇ 20ರಂದು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾದರರ ಸಂಘ ತಿಳಿಸಿದೆ.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ. ರಮೇಶ್, ‘ಸುಪ್ರೀಂ ಕೋರ್ಟ್‌ನ ಆದೇಶದಂತೆ ಕಳೆದ ಏಪ್ರಿಲ್‌ನಿಂದ ಇದುವರೆಗೂ ಎಂಟು ಲಕ್ಷ ಮನೆ ಹಾಗೂ ಕೈಗಾರಿಕೆಗಳಿಗೆ ವಿದ್ಯುತ್ ಸಂಪರ್ಕ ನೀಡಿಲ್ಲ. ಇದರಿಂದ ಸಾರ್ವಜನಿಕರಿಗೆ ಸಮಸ್ಯೆ ಆಗುತ್ತಿದ್ದು, ಈ ಆದೇಶವನ್ನು ಕೂಡಲೇ ಹಿಂಪಡೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.
‘ಎಸ್ಕಾಂಗಳಲ್ಲಿ ಕರೆದಿರುವ ಬೃಹತ್ ಟೆಂಡರ್‌ಗಳನ್ನು ಸ್ಥಳೀಯ ಗುತ್ತಿಗೆದಾರರಿಗೆ ನೀಡಬೇಕು. ಈ ಬಗ್ಗೆ ಇಂಧನ ಸಚಿವರಿಗೆ ಮನವಿ ಸಲ್ಲಿಸಲಾಗಿದೆ. ಪ್ರಥಮ ದರ್ಜೆ ಗುತ್ತಿಗೆದಾರರ ಪರವಾನಗಿ ಪಡೆಯಲು ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ ಕಡ್ಡಾಯ ಮಾಡಲಾಗಿದೆ. ಇದರಿಂದ ವಿನಾಯಿತಿ ನೀಡಬೇಕು. ಅನುಭವದ ಆಧಾರದ ಮೇಲೆ ಪ್ರಥಮ ದರ್ಜೆ ಗುತ್ತಿಗೆದಾರರ ಪರವಾನಗಿ ನೀಡಬೇಕು’ ಎಂದರು.
66/11ಕೆವಿ ಹಾಗೂ 110/11 ವಿದ್ಯುತ್ ವಿತರಣಾ ಕೇಂದ್ರಗಳ ಪಾಳಿ ಗುತ್ತಿಗೆ ಕಾಮಗಾರಿಗಳನ್ನು ನಿರ್ವಹಿಸಲು ಪ್ರಥಮ ದರ್ಜೆ ಗುತ್ತಿಗೆದಾರರಿಗೆ ಅನುಮತಿ ನೀಡಬೇಕು. ಎಸ್ಕಾಂಗಳಲ್ಲಿ ವಿದ್ಯುತ್ ಗುತ್ತಿಗೆದಾರರು ಕಾರ್ಯನಿರ್ವಹಿಸುವ ಸಂದರ್ಭದಲ್ಲಿ ವಿದ್ಯುತ್ ಅವಘಡಗಳಲ್ಲಿ ಅಪಘಾತ ಅಥವಾ ಮರಣ ಹೊಂದಿದರೆ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.