ಬೆಂಗಳೂರು: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಹಾಗೂ ಆಶಾ ಕಾರ್ಯಕರ್ತೆಯರು ಶನಿವಾರ ಮಲ್ಲೇಶ್ವರದ ಸುವರ್ಣ ಭವನ ಎದುರು ಪ್ರತಿಭಟನೆ ನಡೆಸಿದರು.
ಕನಿಷ್ಠ ₹ 7,500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು. ಈ ಬಗ್ಗೆ ಕೇಂದ್ರ ಸರ್ಕಾರ ಕೂಡಲೇ ನಿರ್ಧಾರ ಕೈಗೊಳ್ಳಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು.
ಜನವರಿ 28ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಈ ಬಾರಿಯಾದರೂ ನಿವೃತ್ತರ ಬೇಡಿಕೆ ಈಡೇರಿಸಬೇಕು. ಬೇಡಿಕೆ ಈಡೇರದಿದ್ದರೆ ಹೋರಾಟ ಮಾಡಲಾಗುವುದು. ಸುಪ್ರೀಂ ಕೋರ್ಟ್ ಆರ್.ಸಿ.ಗುಪ್ತ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ನೀಡಿರುವ ತೀರ್ಪು ಅನ್ನು ಅನುಷ್ಠಾನಗೊಳಿಸಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಆಪ್ತ ಕಾರ್ಯದರ್ಶಿ ವೆಂಕಟೇಶ್ ಅವರು ಮನವಿ ಪತ್ರ ಸ್ವೀಕರಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ನಂಜುಂಡೇಗೌಡ, ಪದಾಧಿಕಾರಿಗಳಾದ ಶಂಕರ್ ಕುಮಾರ್, ರಂಗನಾಥ್, ನಾಗರಾಜ್, ಮನೋಹರ್ ಹಾಗೂ ಕೃಷ್ಣಮೂರ್ತಿ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.