ADVERTISEMENT

ಬೆಂಕಿ ಅವಘಡ: ₹ 30 ಲಕ್ಷ ಮೌಲ್ಯದ ಗೃಹೋಪಯೋಗಿ ವಸ್ತುಗಳು ಭಸ್ಮ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2025, 15:57 IST
Last Updated 3 ಅಕ್ಟೋಬರ್ 2025, 15:57 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ಬೆಂಗಳೂರು: ಉಲ್ಲಾಳ ಉಪನಗರ ಬಳಿಯ ಸರ್.ಎಂ.ವಿಶ್ವೇಶ್ವರಯ್ಯ ಲೇಔಟ್‍ನ ಮನೆಯೊಂದರಲ್ಲಿ ಶುಕ್ರವಾರ ಮುಂಜಾನೆ ಅಗ್ನಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ ಪೀಠೋಪಕರಣಗಳು ಭಸ್ಮವಾಗಿವೆ.

ಬಾಲಾಜಿ ಅವರ ಮನೆಯಲ್ಲಿ ಅವಘಡ ಸಂಭವಿಸಿದೆ. ₹30 ಲಕ್ಷ ಮೌಲ್ಯದ ವಸ್ತುಗಳು ಭಸ್ಮವಾಗಿವೆ ಎಂದು ಅಂದಾಜಿಸಲಾಗಿದೆ.

ADVERTISEMENT

ಬಾಲಾಜಿ ಅವರಿಗೆ ಸೇರಿದ ಮೂರು ಅಂತಸ್ತಿನ ಮನೆಯ ಮೊದಲ ಅಂತಸ್ತಿನಲ್ಲಿ ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ವಿದ್ಯುತ್ ಶಾರ್ಟ್ ಸರ್ಕಿಟ್‍ನಿಂದ ಬೆಂಕಿ ಹೊತ್ತಿಕೊಂಡಿದೆ. ನಂತರ, ಎರಡು ಮತ್ತು ಮೂರನೇ ಅಂತಸ್ತಿಗೆ ಬೆಂಕಿ ವ್ಯಾಪಿಸಿದೆ. ಈ ವೇಳೆ ಎರಡನೇ ಅಂತಸ್ತಿನ ರೂಂನಲ್ಲಿ ಮಲಗಿದ್ದ ಬಾಲಾಜಿ ಅವರು ಕೂಡಲೇ ಮನೆಯಿಂದ ಹೊರಗೆ ಓಡಿ ಬಂದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬಾಲಾಜಿ ಅವರು ಅಗ್ನಿಶಾಮಕ ನಿಯಂತ್ರಣ ಕೊಠಡಿಗೆ ಕರೆ ಮಾಡಿ, ಅಗ್ನಿ ಅನಾಹುತದ ವಿಷಯ ತಿಳಿಸಿದ್ದರು. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ಹತೋಟಿಗೆ ತರುವಲ್ಲಿ ಯಶಸ್ವಿಯಾದರು. ಅಷ್ಟರಲ್ಲಿ ಪೀಠೋಪಕರಣಗಳು, ಎಲೆಕ್ಟ್ರಾನಿಕ್ ವಸ್ತುಗಳು, ಗೃಹೋಪಯೋಗಿ ವಸ್ತುಗಳು ಸುಟ್ಟು ಹೋಗಿದ್ದವು ಎಂದು ಸ್ಥಳೀಯರು ತಿಳಿಸಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಗೊತ್ತಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಜ್ಞಾನಭಾರತಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.