ಬೆಂಗಳೂರು: 33 ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ 17 ವರ್ಷಗಳಿಂದ ಪೊಲೀಸರಿಗೆ ಸಿಗದೇ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಯಲಹಂಕ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಮುರುಗೇಶ್ (55) ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಆರೋಪಿ ತಲೆಮರೆಸಿಕೊಂಡಿದ್ದ. ಖಚಿತ ಮಾಹಿತಿ ಆಧರಿಸಿ ತಮಿಳುನಾಡಿಗೆ ತೆರಳಿ, ಆರೋಪಿಯನ್ನು ಬಂಧಿಸಲಾಯಿತು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಹೇಳಿದರು.
ಆರೋಪಿಯ ವಿರುದ್ಧ ತಮಿಳುನಾಡು ಹಾಗೂ ರಾಜ್ಯದ ಬೆಂಗಳೂರು, ಕೋಲಾರ, ಕೊಡಗು ಸೇರಿ ವಿವಿಧ ಪೊಲೀಸ್ ಠಾಣೆಗಳಲ್ಲಿ 33 ಪ್ರಕರಣಗಳು ದಾಖಲಾಗಿದ್ದವು ಎಂದು ಪೊಲೀಸರು ಹೇಳಿದರು.
ಯಲಹಂಕ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ 2008ರಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದವು. ಬೆಂಗಳೂರು, ತಮಿಳುನಾಡು ಹಾಗೂ ಕೇರಳ ರಾಜ್ಯದ ವಿವಿಧೆಡೆ ಶೋಧ ನಡೆಸಿದ್ದರೂ ಆರೋಪಿ ಸಿಕ್ಕಿರಲಿಲ್ಲ. ನ್ಯಾಯಾಲಯ ಜಾಮೀನುರಹಿತ ವಾರಂಟ್ ಜಾರಿ ಮಾಡಿತ್ತು. ಹಿರಿಯ ಅಧಿಕಾರಿಗಳು ಇತ್ತೀಚೆಗೆ ಠಾಣೆಗೆ ಭೇಟಿ ನೀಡಿ ಅಪರಾಧ ಪ್ರಕರಣಗಳ ಬಗ್ಗೆ ಪರಾಮರ್ಶೆ ನಡೆಸಿದ್ದರು. ಆಗ ಈ ಪ್ರಕರಣದಲ್ಲಿ ಆರೋಪಿ ಪತ್ತೆ ಆಗದಿರುವುದು ಹಿರಿಯ ಅಧಿಕಾರಿಗಳ ಗಮನಕ್ಕೆ ಬಂದಿತ್ತು. ಆರೋಪಿಯ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ವಿಶೇಷ ತಂಡವು ತಮಿಳುನಾಡಿಗೆ ತೆರಳಿ ಆರೋಪಿಯನ್ನು ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.