ಬೆಂಗಳೂರು: ಕಲಾಸಿಪಾಳ್ಯ ಹಾಗೂ ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ದಾಳಿ ನಡೆಸಿ, ಪರವಾನಗಿ ಇಲ್ಲದೆ ದಾಸ್ತಾನು ಮಾಡಿದ್ದ ₹15.3 ಲಕ್ಷ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಕುಂಬಳಗೂಡು ಪೊಲೀಸ್ ಠಾಣೆ ವ್ಯಾಪ್ತಿಯ ಧನನಾಯಕನಹಳ್ಳಿಯ ಮನೆಯಲ್ಲಿ ಪರವಾನಗಿ ಇಲ್ಲದ ₹10.13 ಲಕ್ಷ ಮೌಲ್ಯದ 317 ಪಟಾಕಿ ಬಾಕ್ಸ್‌ಗಳನ್ನು ವಶಪಡಿಸಿಕೊಂಡು, ಸಮೃದ್ಧಿ ಲೇಔಟ್ ನಿವಾಸಿ ಶ್ರೀನಿವಾಸ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.
ಸುರಕ್ಷಿತ ಹಾಗೂ ಮುಂಜಾಗ್ರತಾ ಕ್ರಮ ಅನುಸರಿಸದೆ ಪಟಾಕಿ ಸಂಗ್ರಹಿಸಿಟ್ಟಿದ್ದರು. ಪಟಾಕಿ ಬಾಕ್ಸ್‌ಗಳನ್ನು ವಶಕ್ಕೆ ಪಡೆದು ಸ್ಫೋಟಕ ವಸ್ತು ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ ಕಲಾಸಿಪಾಳ್ಯ ಠಾಣೆ ಪೊಲೀಸರು ₹5 ಲಕ್ಷ ಮೌಲ್ಯದ 36 ಪಟಾಕಿ ಬಾಕ್ಸ್‌ಗಳನ್ನು ಜಪ್ತಿ ಮಾಡಿದ್ದಾರೆ. ಕಲಾಸಿಪಾಳ್ಯ ಮುಖ್ಯರಸ್ತೆಯ ಅಯ್ಯಪ್ಪಸ್ವಾಮಿ ದೇವಸ್ಥಾನ ಪಕ್ಕದಲ್ಲಿರುವ ಟ್ರಸ್ಟ್‌ನ ನೆಲಮಹಡಿಯಲ್ಲಿ ಪರವಾನಗಿ ಇಲ್ಲದೆ ಸಂಗ್ರಹಿಸಿದ ಕಾರಣ ಅಥಿ ಸುಬ್ರಹ್ಮಣ್ಯ ಎಂಬುವರನ್ನು ಬಂಧಿಸಿದ್ದಾರೆ.
‘ದಾಸ್ತಾನು ಮಾಡಿರುವ ಸ್ಥಳ ಜನನಿಬಿಡ ಪ್ರದೇಶವಾಗಿತ್ತು. ಆಕಸ್ಮಿಕವಾಗಿ ಸ್ಫೋಟ ಸಂಭವಿಸಿದರೆ ಜೀವಹಾನಿ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗುವ ಸಂಭವ ಇರುವುದರಿಂದ ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಎಸ್.ಗಿರೀಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.