ಬೆಂಗಳೂರು: ನಮ್ಮ ಮೆಟ್ರೊ ಹಳದಿ ಮಾರ್ಗದಲ್ಲಿ ರೈಲು ಸಂಚಾರ ಆರಂಭಿಸಲು ರೈಲ್ವೆಯ ಮೆಟ್ರೊ ರೈಲು ಸುರಕ್ಷತಾ ಆಯೋಗ (ಸಿಎಂಎಸ್‌ಆರ್) ಅನುಮತಿ ನೀಡಿದೆ.
ಆರ್.ವಿ. ರಸ್ತೆಯಿಂದ ಬೊಮ್ಮಸಂದ್ರ ಸಂಪರ್ಕಿಸುವ ಈ ಮಾರ್ಗದಲ್ಲಿ ಮೆಟ್ರೊ ರೈಲು ಸುರಕ್ಷತೆ ದಕ್ಷಿಣ ವೃತ್ತದ ಆಯುಕ್ತ ಅನಂತ್ ಮಧುಕರ್ ಚೌಧರಿ ನೇತೃತ್ವದ ತಂಡವು ಜುಲೈ 22ರಿಂದ 25ರವರೆಗೆ ವಿವಿಧ ಪರೀಕ್ಷೆಗಳನ್ನು ನಡೆಸಿತ್ತು.
ಕೆಲವು ಸಣ್ಣ ಸಣ್ಣ ಬದಲಾವಣೆಗಳನ್ನು ಮಾಡಿಕೊಳ್ಳಬೇಕೆಂಬ ಷರತ್ತು ವಿಧಿಸಿ ಅನುಮತಿ ನೀಡಿದೆ. ಆ ಬದಲಾವಣೆಗಳನ್ನು ಮಾಡಿಕೊಳ್ಳುವ ಕಾರ್ಯಗಳು ನಡೆಯುತ್ತಿವೆ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
‘ಸುರಕ್ಷತಾ ಅನುಮತಿ ಸಿಕ್ಕಿರುವ ಬಗ್ಗೆ ನಗರಾಭಿವೃದ್ಧಿ ಇಲಾಖೆಗೆ ಶುಕ್ರವಾರ ತಿಳಿಸಲಾಗಿದೆ. ಅಲ್ಲಿಂದ ಕೇಂದ್ರದ ವಸತಿ ಮತ್ತು ನಗರ ವ್ಯವಹಾರ ಇಲಾಖೆಗೆ ಮಾಹಿತಿ ರವಾನೆಯಾಗಲಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದರು.
ರೈಲುಗಳ ವ್ಯವಸ್ಥೆ: 19.15 ಕಿ.ಮೀ ಉದ್ದದ ಹಳದಿ ಮಾರ್ಗಕ್ಕೆ ಈಗಾಗಲೇ ಮೂರು ರೈಲುಗಳು ಬಂದಿವೆ. ಪಶ್ಚಿಮ ಬಂಗಾಳದ ಟಿಟಾಗಢ ರೈಲ್ ಸಿಸ್ಟಂ ಲಿಮಿಟೆಡ್ (ಟಿಆರ್‌ಎಸ್‌ಎಲ್) ಕಾರ್ಯಾಗಾರದಿಂದ ನಾಲ್ಕನೇ ರೈಲು ಕಳುಹಿಸಿದ್ದು, ಒಂದು ವಾರದ ಒಳಗೆ ಬೆಂಗಳೂರು ತಲುಪಲಿದೆ.
‘ಕೇಂದ್ರ ಮತ್ತು ರಾಜ್ಯ ಸರ್ಕಾರ ನಿಗದಿಪಡಿಸಿದ ದಿನದಂದು ಈ ಮಾರ್ಗದಲ್ಲಿ ಸಂಚಾರ ಆರಂಭಗೊಳ್ಳಲಿದೆ. 25 ನಿಮಿಷಕ್ಕೊಂದು ರೈಲುಗಳು ಸಂಚರಿಸಲಿವೆ. ನಾಲ್ಕನೇ ರೈಲು ಬಂದ ಬಳಿಕ ಆ ರೈಲಿನ ಪರಿಶೀಲನೆ ನಡೆಯಲಿದೆ. ಸೆಪ್ಟೆಂಬರ್‌ನಲ್ಲಿ ಇನ್ನೆರಡು ರೈಲುಗಳು ಬರುವ ನಿರೀಕ್ಷೆ ಇದೆ. ಹಳದಿ ಮಾರ್ಗಕ್ಕೆ ಒಟ್ಟು 15 ರೈಲುಗಳ ಅಗತ್ಯವಿದೆ’ ಎಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.
ಹಳದಿ ಮಾರ್ಗವು ಬೊಮ್ಮಸಂದ್ರ, ಹೆಬ್ಬಗೋಡಿ, ಹುಸ್ಕೂರು ರಸ್ತೆ, ಇನ್ಫೊಸಿಸ್ ಫೌಂಡೇಷನ್ (ಕೋನಪ್ಪನ ಅಗ್ರಹಾರ), ಎಲೆಕ್ಟ್ರಾನಿಕ್ ಸಿಟಿ, ಬೆರಟೇನ ಅಗ್ರಹಾರ, ಹೊಸ ರಸ್ತೆ, ಸಿಂಗಸಂದ್ರ, ಕೂಡ್ಲು ಗೇಟ್, ಹೊಂಗಸಂದ್ರ, ಬೊಮ್ಮನಹಳ್ಳಿ, ಸೆಂಟ್ರಲ್ ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜಯದೇವ ಆಸ್ಪತ್ರೆ, ರಾಗಿಗುಡ್ಡ, ಆರ್.ವಿ. ರಸ್ತೆ ನಿಲ್ದಾಣಗಳನ್ನು ಹೊಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.