ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲಿಗೆ ಕೇಂದ್ರ ರೈಲ್ವೆ ಸಚಿವಾಲಯವು ಅನುಮೋದನೆ ನೀಡಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.
ಈ ಬಗ್ಗೆ ‘ಎಕ್ಸ್’ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ತೇಜಸ್ವಿ ಸೂರ್ಯ, ‘30 ವರ್ಷಗಳ ಬೇಡಿಕೆ ಈಡೇರಿದೆ. ಹಲವು ವರ್ಷಗಳಿಂದ ಸೂಪರ್‌ಫಾಸ್ಟ್ ರೈಲಿಗಾಗಿ ನಾನು ನಿರಂತರವಾಗಿ ಪ್ರಯತ್ನಿಸುತ್ತಿದ್ದೆ’ ಎಂದು ಹೇಳಿದ್ದಾರೆ.
‘ಬೆಂಗಳೂರು ಮತ್ತು ಮುಂಬೈ ನಡುವೆ ನಾವು ಶೀಘ್ರದಲ್ಲೇ ಸೂಪರ್‌ಫಾಸ್ಟ್ ರೈಲನ್ನು ಪ್ರಾರಂಭಿಸಲಿದ್ದೇವೆ. ಎರಡೂ ನಗರಗಳು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದು ಅವುಗಳ ನಿಲ್ದಾಣಗಳಲ್ಲಿನ ಸಾಮರ್ಥ್ಯದ ವಿಸ್ತರಣೆಯಿಂದಾಗಿ ಇದು ಈಗ ಸಾಧ್ಯವಾಗಿದೆ’ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ತೇಜಸ್ವಿ ಸೂರ್ಯರೊಂದಿಗೆ ವಿಡಿಯೊ ಸಂದರ್ಶನದಲ್ಲಿ ತಿಳಿಸಿದ್ದಾರೆ.
ಬೆಂಗಳೂರು ಮತ್ತು ಮುಂಬೈ ಭಾರತದ ಎರಡು ಪ್ರಮುಖ ಆರ್ಥಿಕ ಕೇಂದ್ರಗಳಾಗಿದ್ದರೂ, ಈ ಎರಡೂ ನಗರಗಳ ನಡುವೆ ‘ಉದ್ಯಾನ್ ಎಕ್ಸ್‌ಪ್ರೆಸ್’ ರೈಲು ಮಾತ್ರ ಸಂಚರಿಸುತ್ತಿತ್ತು. ಇದು 24 ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿತ್ತು. ಕಳೆದ ಒಂದೇ ವರ್ಷದಲ್ಲಿ 26 ಲಕ್ಷಕ್ಕೂ ಹೆಚ್ಚು ಜನರು ಈ ಎರಡು ನಗರಗಳ ನಡುವೆ ವಿಮಾನದಲ್ಲಿ ಪ್ರಯಾಣಿಸಿದ್ದಾರೆ. ಈ ಹೊಸ ಸೇವೆಯು ಲಕ್ಷಾಂತರ ನಾಗರಿಕರಿಗೆ ಪ್ರಯಾಣವನ್ನು ಹೆಚ್ಚು ಕೈಗೆಟುಕುವ ದರದಲ್ಲಿ ಅನುಕೂಲವಾಗಿಸಲಿದೆ’ ಎಂದು ಸೂರ್ಯ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.