ಸಾವು
(ಪ್ರಾತಿನಿಧಿಕ ಚಿತ್ರ)
ಬೆಂಗಳೂರು: ರಾಮಮೂರ್ತಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಕೆರೆ ಬಳಿಯ ನಿರ್ಜನ ಪ್ರದೇಶದಲ್ಲಿ ಶುಕ್ರವಾರ ಬೆಳಿಗ್ಗೆ ಮಹಿಳೆಯ ಮೃತದೇಹ ಪತ್ತೆಯಾಗಿದ್ದು, ಅವರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಬಾಂಗ್ಲಾದೇಶದ 28 ವರ್ಷ ಮಹಿಳೆ ಕೊಲೆಯಾದವರು.
ಪತಿ ನೀಡಿರುವ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳ ಪತ್ತೆಗೆ ಹುಡುಕಾಟ ನಡೆಸುತ್ತಿದ್ದಾರೆ.
ಕೊತ್ತನೂರು ಬಳಿ ಬಾಡಿಗೆ ಮನೆಯೊಂದರಲ್ಲಿ ಪತಿ ಹಾಗೂ ಸಹೋದರನ ಜತೆಗೆ ಮಹಿಳೆ ವಾಸವಿದ್ದರು. ಕಲ್ಕೆರೆಯ ಅಪಾರ್ಟ್ಮೆಂಟ್ವೊಂದರಲ್ಲಿ ಮನೆಗೆಲಸ ಮಾಡುತ್ತಿದ್ದರು. ಎಂದಿನಂತೆ ಗುರುವಾರ ಸಹ ಕೆಲಸಕ್ಕೆ ತೆರಳಿದ್ದರು. ರಾತ್ರಿ ವಾಪಸ್ ಬಂದಿರಲಿಲ್ಲ. ಪತ್ನಿ ನಾಪತ್ತೆಯಾಗಿರುವ ಕುರಿತು ಪತಿ ರಾಮಮೂರ್ತಿನಗರ ಠಾಣೆಗೆ ದೂರು ನೀಡಿದ್ದರು. ಮಹಿಳೆಯ ಕೊಲೆ ಆಗಿರುವುದು ಶುಕ್ರವಾರ ಬೆಳಿಗ್ಗೆ ಗೊತ್ತಾಗಿದೆ.
‘ನಿರ್ಜನ ಪ್ರದೇಶದಲ್ಲಿ ಮೃತದೇಹ ಬಿದ್ದಿರುವುದನ್ನು ಕಂಡ ಸ್ಥಳೀಯರು, ಬೆಳಿಗ್ಗೆ 8.45ರ ಸುಮಾರಿಗೆ ಮಾಹಿತಿ ನೀಡಿದ್ದರು. ತಕ್ಷಣವೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಾಯಿತು. ತಲೆಗೆ ಕಲ್ಲಿನಿಂದ ಜಜ್ಜಿ, ಹರಿತವಾದ ಆಯುಧದಿಂದ ಚುಚ್ಚಿ ಕೊಲೆ ಮಾಡಿರುವುದು ಕಂಡುಬಂದಿದೆ. ಮುಖ ಹಾಗೂ ಕುತ್ತಿಗೆ ಭಾಗದಲ್ಲಿ ಗಾಯಗಳಾಗಿವೆ. ಸ್ಥಳಕ್ಕೆ ವಿಧಿ ವಿಜ್ಞಾನ ಪ್ರಯೋಗಾಲಯದ ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು’ ಎಂದು ಮೂಲಗಳು ತಿಳಿಸಿವೆ.
‘ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮಹಿಳೆಯ ಮೇಲೆ ಅತ್ಯಾಚಾರ ನಡೆಸಲಾಗಿತ್ತೇ ಅಥವಾ ಲೈಂಗಿಕ ದೌರ್ಜನ್ಯ ನಡೆದಿತ್ತೇ ಎಂಬುದು ಮರಣೋತ್ತರ ಪರೀಕ್ಷೆಯ ಬಳಿಕ ಗೊತ್ತಾಗಲಿದೆ’ ಎಂದು ಪೊಲೀಸರು ಹೇಳಿದರು.
ಸ್ಥಳಕ್ಕೆ ಪೂರ್ವ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ರಮೇಶ್ ಬಾನೋತ್, ಡಿಸಿಪಿ ದೇವರಾಜ್ ಭೇಟಿ ನೀಡಿ ಪರಿಶೀಲಿಸಿದರು.
‘ಕೊಲೆ ಹಾಗೂ ಲೈಂಗಿಕ ದೌರ್ಜನ್ಯ ಆರೋಪದ ಅಡಿಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕರೆಗಳ ಪರಿಶೀಲನೆ: ಕೊಲೆಯಾದ ಮಹಿಳೆಯ ಮೊಬೈಲ್ ಕರೆಗಳನ್ನು ಪರಿಶೀಲಿಸಲಾಗುತ್ತಿದೆ. ಅಲ್ಲದೇ ಮಹಿಳೆ ಓಡಾಟ ನಡೆಸಿದ್ದ ರಸ್ತೆಗಳಲ್ಲಿರುವ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಯನ್ನೂ ಪರಿಶೀಲಿಸಲಾಗಿದೆ. ಸದ್ಯ ಆರೋಪಿಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಪತಿ ಹಾಗೂ ಮಹಿಳೆಯ ಸಹೋದರನನ್ನೂ ವಿಚಾರಣೆಗೆ ಒಳಪಡಿಸಿ ಮಾಹಿತಿ ಕಲೆ ಹಾಕಲಾಗುವುದು ಎಂದು ಮೂಲಗಳು ತಿಳಿಸಿವೆ.
ಗುರುವಾರ ಅಪಾರ್ಟ್‌ಮೆಂಟ್‌ಗೆ ಕೆಲಸಕ್ಕೆ ತೆರಳಿದ್ದ ಮಹಿಳೆ, ವಿವಿಧ ಫ್ಲ್ಯಾಟ್‌ಗಳಲ್ಲಿ ಸಂಜೆ ತನಕ ಕೆಲಸ ಮಾಡಿದ್ದರು. ಕೆಲಸ ಮುಗಿಸಿ ಸ್ನೇಹಿತೆಯರ ಜತೆಗೆ ರಸ್ತೆಯಲ್ಲಿ ನಡೆದು ತೆರಳುತ್ತಿದ್ದರು. ಆ ಸಂದರ್ಭದಲ್ಲಿ ಕರೆಯೊಂದು ಬಂದಿತ್ತು ಎನ್ನಲಾಗಿದೆ. ಕರೆ ಬಂದ ಬಳಿಕ ಮಹಿಳೆ ಅಲ್ಲಿಂದ ಒಬ್ಬರೇ ತೆರಳಿದ್ದರು. ನಂತರ, ಕೊಲೆಯಾಗಿ ಪತ್ತೆ ಆಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.