ADVERTISEMENT

ಬೆಂಗಳೂರು: ಸರಕು ಸಾಗಣೆ ವಾಹನ ಡಿಕ್ಕಿ; ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2026, 14:15 IST
Last Updated 22 ಫೆಬ್ರುವರಿ 2026, 14:15 IST
<div class="paragraphs"><p>ಸಾವು&nbsp; (ಪ್ರಾತಿನಿಧಿಕ ಚಿತ್ರ)</p></div>

ಸಾವು  (ಪ್ರಾತಿನಿಧಿಕ ಚಿತ್ರ)

   

ಬೆಂಗಳೂರು: ಕೆಂಗೇರಿ ಬಳಿಯ ಧನನಾಯಕನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ರಾತ್ರಿ ದ್ವಿಚಕ್ರ ವಾಹನ ಮತ್ತು ಸರಕು ಸಾಗಣೆ ವಾಹನದ ನಡುವೆ ಸಂಭವಿಸಿದ ಅಪಘಾತದಲ್ಲಿ ಮುನಿಯಪ್ಪ (19) ಎಂಬ ಯುವಕ ಮೃತಪಟ್ಟಿದ್ದಾರೆ.

ಧನನಾಯಕನಹಳ್ಳಿಯ ಮುನಿಯಪ್ಪ, ಕೆಂಗೇರಿಯ ಬೈಕ್ ಷೋರೂಂನಲ್ಲಿ ಕೆಲಸ ಮಾಡುತ್ತಿದ್ದು, ಅನಾರೋಗ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ತನ್ನ ತಂದೆಗೆ ಊಟ ತೆಗೆದುಕೊಂಡು ಹೋಗುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಕ್ಯಾಂಟರ್ ಚಾಲಕ ಏಕಮುಖ ಸಂಚಾರದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ವಾಹನ ಚಾಲನೆ ಮಾಡಿಕೊಂಡು ಬಂದು ಮುನಿಯಪ್ಪ ಅವರ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಅಸ್ವಸ್ಥಗೊಂಡರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ. ಘಟನೆ ನಂತರ ಆತ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಜ್ಞಾನಭಾರತಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೂಲಿ ಕಾರ್ಮಿಕ ಸಾವು: ನೈಸ್ ರಸ್ತೆ ಬಳಿಯ ಮಂಗನಹಳ್ಳಿ ರಸ್ತೆಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಶ್ರೀರಾಮುಲು ರೆಡ್ಡಿ (72) ಎಂಬುವರು ಶನಿವಾರ ರಾತ್ರಿ ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶದ ಶ್ರೀರಾಮುಲು ರೆಡ್ಡಿ, ಮಂಗನಹಳ್ಳಿಯಲ್ಲಿ ವಾಸವಾಗಿದ್ದರು. ಕೂಲಿ ಕೆಲಸ ಮಾಡುತ್ತಿದ್ದ ಅವರು ಫೆ.17ರಂದು ನಡೆದು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿತ್ತು. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಜ್ಞಾನಭಾರತಿ ಸಂಚಾರ ಠಾಣೆ ಪೊಲೀಸರು ಹೇಳಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.