ADVERTISEMENT

ಬೆಂಗಳೂರು: ರಸ್ತೆ ಗುಂಡಿ ಮುಚ್ಚದ ಗುತ್ತಿಗೆದಾರರ ಟೆಂಡರ್ ರದ್ದು–ರಾಜೇಂದ್ರ ಚೋಳನ್

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2025, 16:06 IST
Last Updated 22 ಸೆಪ್ಟೆಂಬರ್ 2025, 16:06 IST
<div class="paragraphs"><p>ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ಆಯುಕ್ತ ರಾಜೇಂದ್ರ ಚೋಳನ್</p></div>

ಬೆಂಗಳೂರು ಕೇಂದ್ರ ನಗರ ಪಾಲಿಕೆ (ಬಿಸಿಸಿಸಿ) ಆಯುಕ್ತ ರಾಜೇಂದ್ರ ಚೋಳನ್

   

ಬೆಂಗಳೂರು: ರಸ್ತೆ ಗುಂಡಿಗಳನ್ನು ಮುಚ್ಚದ ಗುತ್ತಿಗೆದಾರರ ಟೆಂಡರ್‌ ರದ್ದುಗೊಳಿಸಲಾಗುವುದು ಎಂದು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ಎಚ್ಚರಿಕೆ ನೀಡಿದರು. 

ಕೇಂದ್ರ ನಗರ ಪಾಲಿಕೆಯ ಎಂಜಿನಿಯರ್‌ಗಳು, ಗುತ್ತಿಗೆದಾರರೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ‘ನಗರದ ರಸ್ತೆಗಳಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ಗುತ್ತಿಗೆದಾರರು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದು ಎಚ್ಚರಿಕೆ ನೀಡಿದರು. 

ADVERTISEMENT

ಬಿ–ಸ್ಮೈಲ್‌ನಿಂದ ರೇಸ್‌ಕೋರ್ಸ್‌ ರಸ್ತೆ, ಕಬ್ಬನ್ ರಸ್ತೆ ಹಾಗೂ ಇತರೆ ಪ್ರಮುಖ ರಸ್ತೆಗಳಲ್ಲಿ ವೈಟ್‌ ಟಾಪಿಂಗ್‌ ಕಾಮಗಾರಿ ಕೈಗೊಳ್ಳಲಾಗಿದೆ. ಅದೇ ರೀತಿ ಗುಂಡಿ ಮುಚ್ಚುವ ಕೆಲಸವನ್ನು ತುರ್ತಾಗಿ ಮಾಡಬೇಕು. ಮುಂದಿನ ಮೂರು ದಿನದೊಳಗೆ ಗುಂಡಿ ಮುಚ್ಚುವ ಕೆಲಸ ಮುಗಿಸಬೇಕು. ಇಲ್ಲದಿದ್ದರೆ ಗುತ್ತಿಗೆದಾರರ ಟೆಂಡರ್‌ ರದ್ದುಪಡಿಸಿ, ಪಾಲಿಕೆ ವತಿಯಿಂದ ಗುಂಡಿ ಮುಚ್ಚುವ ಕಾಮಗಾರಿ ಕೈಗೊಂಡು, ಇದರ ವೆಚ್ಚವನ್ನು ಗುತ್ತಿಗೆದಾರರಿಂದ ವಸೂಲು ಮಾಡಬೇಕು ಎಂದು ಮುಖ್ಯ ಎಂಜಿನಿಯರ್‌ಗೆ ಸೂಚಿಸಿದರು. 

ಪಾಲಿಕೆ ಎಂಜಿನಿಯರ್‌ಗಳು ಅವರ ವಿಭಾಗದ ವಾರ್ಡ್‌ಗಳ ರಸ್ತೆಯಲ್ಲಿರುವ ಗುಂಡಿಗಳು, ಪ್ಯಾಚ್‌ವರ್ಕ್, ಜಲ ಮಂಡಳಿ ಸೇರಿದಂತೆ ಇತರೆ ಇಲಾಖೆ ಕಾಮಗಾರಿಗಳಿಗೆ ಅಗೆದಿರುವ ಪಟ್ಟಿಯನ್ನು ನೀಡುವಂತೆ ಸೂಚಿಸಿದರು. ಈ ಪಟ್ಟಿಗಳ ಆಧಾರದ ಮೇಲೆ ಎಲ್ಲ ರಸ್ತೆ ಗುಂಡಿಗಳನ್ನು ಮುಚ್ಚಬೇಕು. ಇಲ್ಲದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದರು. 

ಕಳೆದ ಎರಡು ದಿನಗಳಲ್ಲಿ ಕೇಂದ್ರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಒಟ್ಟು 3,182 ಚದರ ಮೀಟರ್‌ ವಿಸ್ತೀರ್ಣದ ಪ್ಯಾಚ್‌ವರ್ಕ್‌ ಹಾಗೂ 228 ರಸ್ತೆ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.