ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ನೂಕುನುಗ್ಗಲಿನಿಂದ ಉಂಟಾದ ಕಾಲ್ತುಳಿತಕ್ಕೆ ಹತ್ತಕ್ಕೂ ಹೆಚ್ಚು ಜನರು ಧಾರುಣವಾಗಿ ಸಾವನ್ನಪ್ಪಿರುವ ಘಟನೆ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣ. ದುರಂತದ ಹೊಣೆಯನ್ನು ರಾಜ್ಯ ಕಾಂಗ್ರೆಸ್ ಸರಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರ್ಕಾರ ಕೂಡಲೇ ಧಾವಿಸಬೇಕು ಎಂದು ಹೇಳಿದ್ದಾರೆ.
ಕ್ರೀಡಾಂಗಣ ಹಾಗೂ ವಿಧಾನಸೌಧದ ಬಳಿ ಸಂಭ್ರಮವನ್ನು ಕಣ್ತುಂಬಿಕೊಳ್ಳಲು ಬಂದಿದ್ದ ಕ್ರಿಕೆಟ್ ಪ್ರೇಮಿಗಳು ಗಾಬರಿ, ಆತುರಕ್ಕೆ ಒಳಗಾಗದೆ ಕ್ಷೇಮವಾಗಿ ಮನೆ ತಲುಪಬೇಕು ಎಂಬುದು ನನ್ನ ಕಳಕಳಿ. ಪೊಲೀಸರು ಈ ನಿಟ್ಟಿನಲ್ಲಿ ತುರ್ತುಕ್ರಮ ವಹಿಸಿ ಜನರಿಗೆ ನೆರವಾಗಬೇಕು ಎಂದು ಮನವಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.