ಬೆಂಗಳೂರು: ಅಭಿವೃದ್ಧಿ ಹಕ್ಕು ವರ್ಗಾವಣೆ (ಟಿಡಿಆರ್) ಸೌಲಭ್ಯ ನೀಡಿ, ವಿಸ್ತರಣೆ ಮಾಡಲಾಗುತ್ತಿರುವ ರಸ್ತೆಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದರು.
ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ‘ಮುಖ್ಯ ಆಯುಕ್ತರ ನಡೆ ವಲಯದ ಕಡೆ’ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದ ಸಂದರ್ಭದಲ್ಲಿ, ‘ಕೋಡಿಪಾಳ್ಯ ಮುಖ್ಯರಸ್ತೆ ವಿಸ್ತರಣೆಗೆ ಟಿಡಿಆರ್ ನೀಡಲಾಗಿದೆ. ಆ ಜಾಗವನ್ನು ಕೆಲವರು ಒತ್ತುವರಿ ಮಾಡಿಕೊಂಡಿದ್ದಾರೆ’ ಎಂದು ನಾಗರಿಕರು ದೂರಿದರು.
ಇದಕ್ಕೆ ಪ್ರತಿಕ್ರಿಯಿಸಿದ, ತುಷಾರ್ ಗಿರಿನಾಥ್, ‘ರಸ್ತೆ ಮೂಲ ಸೌಕರ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ಏಳು ದಿನಗಳಲ್ಲಿ ಒತ್ತುವರಿ ತೆರವುಗೊಳಿಸಿ, ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ವಲಯ ಆಯುಕ್ತರಿಗೆ ಸೂಚಿಸಿದರು.
ಹೇರೋಹಳ್ಳಿ ಕೆರೆಯಲ್ಲಿ ರಾಸಾಯನಿಕ ಸೇರಿರುವುದರಿಂದ ಸುಮಾರು 1.5 ಕಿ.ಮೀ ಸುತ್ತಮುತ್ತ ಪ್ರದೇಶದಲ್ಲಿ ದುರ್ವಾಸನೆ ಬೀರುತ್ತಿದೆ ಎಂಬ ದೂರಿಗೆ ಪ್ರತಿಕ್ರಿಯಿಸಿದ ತುಷಾರ್ ಗಿರಿನಾಥ್, ವಲಯ ಆಯುಕ್ತರು, ಕೆರೆಗಳ ವಿಭಾಗ, ರಾಜಕಾಲುವೆ ವಿಭಾಗ, ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಸ್ಥಳ ಪರಿಶೀಲಿಸಬೇಕು. ದುರ್ವಾಸನೆಗೆ ಕಾರಣರಾದವರ ಮೇಲೆ ಶಿಸ್ತು ಕ್ರಮ ಜರುಗಿಸಬೇಕು ಎಂದರು.
ತುರಹಳ್ಳಿ ಅರಣ್ಯ ಪ್ರದೇಶದಲ್ಲಿ ಚಿರತೆಗಳ ಕಾಟ ಹೆಚ್ಚಾಗಿದ್ದು, ಬೋನ್‌ಗಳ ವ್ಯವಸ್ಥೆ ಮಾಡಬೇಕು. ಮೈಲಸಂದ್ರ ಕೆರೆಗೆ ಸಪ್ತಗಿರಿ ಲೇಔಟ್‌ನಿಂದ ತ್ಯಾಜ್ಯ ನೀರು ಬಿಡುತ್ತಿದ್ದು, ಅದನ್ನು ನಿಯಂತ್ರಿಸಬೇಕು. ಮೈಸೂರು ರಸ್ತೆ ಬದಿ ಕಸ ಬಿಸಾಡುತ್ತಿದ್ದು, ಅದನ್ನು ತೆರವುಗೊಳಿಸಬೇಕು ಎಂದು ನಾಗರಿಕರು ಮನವಿ ಮಾಡಿಕೊಂಡರು. ಶೀಘ್ರವಾಗಿ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದರು.
ಯಶವಂತಪುರದಲ್ಲಿ 950 ಮೀಟರ್ ಉದ್ದದ ಎಂಇಐ ರಸ್ತೆಯಲ್ಲಿ ಸಂಚಾರ ಪೊಲೀಸ್ ಇಲಾಖೆಯಿಂದ ಅನುಮತಿ ಪಡೆದು ಎರಡು ತಿಂಗಳಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಸಲಾಗುತ್ತಿದೆ. ಎರಡೂ ಬದಿಯ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಕಾಮಗಾರಿ ನಡೆಸಲಾಗುತ್ತಿದೆ. ಈ ರಸ್ತೆಯಲ್ಲಿ ನೀರುಗಾಲುವೆ, ಒಳಚರಂಡಿ ಮಾರ್ಗ, ಡಕ್ಟ್ ಅಳವಡಿಕೆ, ವಿದ್ಯುತ್ ಮಾರ್ಗದ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ಪಾದಚಾರಿ ಮಾರ್ಗ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಕಾಮಗಾರಿಯನ್ನು 2025ರ ಮಾರ್ಚ್ ಅಂತ್ಯಕ್ಕೆ ಪೂರ್ಣಗೊಳಿಸಬೇಕು ಎಂದು ಮುಖ್ಯ ಆಯುಕ್ತರು ಹೇಳಿದರು.
ನಾಗರಬಾವಿ ಕೆರೆಗೆ ಫೆನ್ಸಿಂಗ್
ನಾಗರಬಾವಿ ಕೆರೆಯ ಸರ್ವೆ ನಡೆಸಿ ಅದರಂತೆ ಫೆನ್ಸಿಂಗ್ ಕಾರ್ಯ ಕೈಗೊಳ್ಳಲು ಕೆರೆ ವಿಭಾಗದ ಅಧಿಕಾರಿಗಳಿಗೆ ತುಷಾರ್ ಗಿರಿನಾಥ್ ಸೂಚಿಸಿದರು. ನಾಗರಬಾವಿ ಕೆರೆ 4 ಎಕರೆ 7 ಗುಂಟೆ ಇದ್ದು ಅಭಿವೃದ್ಧಿ ಕಾಮಗಾರಿಯನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು. ಉದ್ಯಾನಕ್ಕೆ ಮೀಸಲಿಟ್ಟ ಜಾಗಕ್ಕೂ ಫೆನ್ಸಿಂಗ್ ಹಾಕಬೇಕು ಎಂದರು. ಕೆಂಗೇರಿ ಹಳೆ ವರ್ತುಲ ರಸ್ತೆಯಿಂದ ಅಮ್ಮ ಆಶ್ರಮದವರೆಗಿನ ಕುವೆಂಪು ಮುಖ್ಯರಸ್ತೆಯ 1.04 ಕಿ.ಮೀ ಉದ್ದ ವೈಟ್ ಟಾಪಿಂಗ್ ಕಾಮಗಾರಿಯನ್ನು ಫೆಬ್ರುವರಿ ಅಂತ್ಯದೊಳಗಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಆದೇಶಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.