ಜಿಬಿಎ
ಬೆಂಗಳೂರು: ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆಗೆ ಮತದಾರರ ಅಂತಿಮ ಪಟ್ಟಿ ಪ್ರಕಟಿಸಲಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವ್ಯಾಪ್ತಿಯಲ್ಲಿ 18,496 ಮತದಾರರಿದ್ದಾರೆ ಎಂದು ಪ್ರಾಧಿಕಾರ ಮುಖ್ಯ ಆಯುಕ್ತ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಎಂ.ಮಹೇಶ್ವರ್ ರಾವ್ ತಿಳಿಸಿದರು.
ಜಿಬಿಎ ಕೇಂದ್ರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯಲ್ಲಿ ಮಾತನಾಡಿದ ಅವರು, ಬೆಂಗಳೂರು ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಪ್ರಕಟಿಸಲು ಕೇಂದ್ರ ಚುನಾವಣಾ ಆಯೋಗ ನಿರ್ದೇಶನ ನೀಡಿತ್ತು. ಅದರಂತೆ ನ.25ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿತ್ತು ಎಂದರು.
ಅಯೋಗದ ವೇಳಾ ಪಟ್ಟಿಯಂತೆ ನ.25ರಿಂದ ಡಿ.10ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಸ್ವೀಕರಿಸಲಾದ ಅರ್ಜಿಗಳ ಪರಿಶೀಲನೆಯ ನಂತರ, ಜಿಬಿಎ ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು ಮಂಗಳವಾರ ಪ್ರಕಟಿಸಲಾಗಿದೆ ಎಂದು ಮಾಹಿತಿ ನೀಡಿದರು.
ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್. ರಾಮಚಂದ್ರನ್ ಮಾತನಾಡಿ, ‘ಅಂತಿಮ ಪರಿಷ್ಕರಣೆಯಲ್ಲಿ ತಪ್ಪಿಹೋದ ಅರ್ಹ ಶಿಕ್ಷಕರಿಗೆ, ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವ ಕೊನೆಯ ದಿನಾಂಕದವರೆಗೂ ಹೆಸರು ಸೇರಿಸಲು ಅವಕಾಶವಿದೆ. ಮತದಾರರ ನೋಂದಣಿ ಹಾಗೂ ನವೀಕರಣ ಪ್ರಕ್ರಿಯೆ ನಿರಂತರವಾಗಿ ನಡೆಯಲಿದೆ’ ಎಂದು ತಿಳಿಸಿದರು.
ಕಚೇರಿಗಳಲ್ಲಿ ಪ್ರಕಟ
ಮತದಾರರ ಪಟ್ಟಿ ಬೆಂಗಳೂರು ವಿಭಾಗದ ಶಿಕ್ಷಕರ ಕ್ಷೇತ್ರ ಹಾಗೂ ಪ್ರಾದೇಶಿಕ ಆಯುಕ್ತರ ಕಚೇರಿ ಹಾಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಶೀಲ್ದಾರರ ಕಚೇರಿ, ಜಿಬಿಎ ಕೇಂದ್ರ, ಉತ್ತರ, ದಕ್ಷಿಣ, ಪೂರ್ವ ಹಾಗೂ ಪಶ್ಚಿಮ ನಗರಪಾಲಿಕೆ ಕಚೇರಿಯಲ್ಲಿ ಪರಿಶೀಲನೆಗಾಗಿ ದೊರೆಯಲಿದೆ ಎಂದು ಬೆಂಗಳೂರು ವಿಭಾಗದ ಮತದಾರರ ನೋಂದಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.