ಬೆಂಗಳೂರು: ಸಾಫ್ಟ್‌ವೇರ್ ಎಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯುತ್ತಿದ್ದು, ಈವರೆಗೂ ಯಾರನ್ನೂ ಬಂಧಿಸಿಲ್ಲ ಎಂದು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದರು.
ಮೃತನ ಸಹೋದರ ನೀಡಿದ ದೂರಿನ ಮೇರೆಗೆ ಮಾರತ್‌ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಎರಡು ವಿಶೇಷ ತಂಡ ರಚಿಸಿ, ತನಿಖೆ ಕೈಗೊಳ್ಳಲಾಗಿದೆ. ಸಾಕ್ಷ್ಯಾಧಾರಗಳ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ. ಮೃತ ವ್ಯಕ್ತಿಗೆ ನ್ಯಾಯ ಕೊಡಿಸುವುದು ಪೊಲೀಸರ ಜವಾಬ್ದಾರಿ. ಆ ನಿಟ್ಟಿನಲ್ಲಿ ತನಿಖೆ ಕೈಗೊಳ್ಳಲಾಗುತ್ತಿದೆ. ಶೀಘ್ರ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಸ್ಥಳೀಯ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆರೋಪಿಗಳ ಪತ್ತೆಗೆ ಸಹಕಾರ ನೀಡುತ್ತಿದ್ದಾರೆ ಎಂದರು.
ಮನೆ ಬಾಗಿಲಿಗೆ ನೋಟಿಸ್: ‘ಉತ್ತರ ಪ್ರದೇಶಕ್ಕೆ ತೆರಳಿರುವ ರಾಜ್ಯದ ಎರಡು ಪೊಲೀಸ್ ತಂಡಗಳು ಆರೋಪಿಗಳ ಶೋಧ ಕಾರ್ಯ ಕೈಗೊಂಡಿವೆ. ಸ್ಥಳೀಯ ಪೊಲೀಸರ ಸಹಾಯದಿಂದ ಅತುಲ್ ಸುಭಾಷ್ ಅವರ ಅತ್ತೆ ಮನೆಗೆ ರಾಜ್ಯ ಪೊಲೀಸರು ಭೇಟಿ ನೀಡಿದ್ದರು. ಆದರೆ, ಅತುಲ್ ಅತ್ತೆ ಮನೆಯವರು ಮೊಬೈಲ್ ಫೋನ್ ಸ್ವಿಚ್ಡ್ ಆಫ್ ಮಾಡಿಕೊಂಡು, ಮನೆಗೆ ಬೀಗ ಹಾಕಿ ಪರಾರಿಯಾಗಿದ್ದರು. ಮನೆಯ ಪ್ರವೇಶದ್ವಾರದಲ್ಲಿ ನೋಟಿಸ್ ಅಂಟಿಸಿದ್ದು, ಅತುಲ್ ಪತ್ನಿ ನಿಖಿತಾ ಸಿಂಘಾನಿಯಾ ಅವರು ತನಿಖಾಧಿಕಾರಿಯ ಮುಂದೆ ಮೂರು ದಿನದೊಳಗೆ ಹಾಜರಾಗುವಂತೆ ಸೂಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಾರತ್ ಹಳ್ಳಿ ಪೊಲೀಸ್ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಸಂಜೀತ್ ಕುಮಾರ್ ಅವರು ಸ್ಥಳೀಯ ಪೊಲೀಸ್ ವರಿಷ್ಠಾಧಿಕಾರಿ ಅಜಯ್ ಪಾಲ್ ಶರ್ಮಾ ಅವರನ್ನು ಭೇಟಿ ಮಾಡಿ, ಘಟನೆ ಕುರಿತು ವಿವರಿಸಿದ್ದಾರೆ. ಸ್ಥಳೀಯ ಠಾಣೆಗೂ ಭೇಟಿ ನೀಡಿ, ಮೃತನ ಕುಟುಂಬದ ಸದಸ್ಯರ ಮಾಹಿತಿ ಕಲೆ ಹಾಕಿದ್ದಾರೆ. ಅಲ್ಲದೇ ಜೌನಾಪುರದ ಸಿಟಿ ಸಿವಿಲ್ ನ್ಯಾಯಾಲಯಕ್ಕೂ ತೆರಳಿ, ಅತುಲ್ ವಿರುದ್ಧ ನಿಖಿತಾ ದಾಖಲಿಸಿದ್ದ ಪ್ರಕರಣಗಳ ಬಗ್ಗೆ ಮಾಹಿತಿ ಪಡೆಯಲು ತನಿಖಾ ತಂಡ ನಿರ್ಧರಿಸಿದೆ ಎಂದು ಮೂಲಗಳು ಹೇಳಿವೆ.
ಆರೋಪಿಗಳ ಪೈಕಿ ವಿಚಾರಣೆಗೆ ಹಾಜರಾಗುವಂತೆ ಅತುಲ್ ಪತ್ನಿ ನಿಖಿತಾ ಸಿಂಘಾನಿಯಾಗೆ ಮಾತ್ರ ನೋಟಿಸ್ ಜಾರಿ ಮಾಡಲಾಗಿದೆ. ಉಳಿದ ಆರೋಪಿಗಳಾದ ನಿಶಾ ಸಿಂಘಾನಿಯಾ, ಅನುರಾಗ್ ಸಿಂಘಾನಿಯಾ ಹಾಗೂ ಸುಶೀಲ್ ಸಿಂಘಾನಿಯಾ ಅವರಿಗೆ ನೋಟಿಸ್ ನೀಡಿಲ್ಲ ಎಂದು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.