ADVERTISEMENT

ಬೆಂಗಳೂರು ಸುರಂಗ ರಸ್ತೆ | ಮರ ಕತ್ತರಿಸುವಂತಿಲ್ಲ: ಸರ್ಕಾರಕ್ಕೆ ಹೈಕೋರ್ಟ್‌

​ಪ್ರಜಾವಾಣಿ ವಾರ್ತೆ
Published 28 ಅಕ್ಟೋಬರ್ 2025, 23:20 IST
Last Updated 28 ಅಕ್ಟೋಬರ್ 2025, 23:20 IST
ಹೈಕೋರ್ಟ್‌
ಹೈಕೋರ್ಟ್‌   

ಬೆಂಗಳೂರು: ‘ಹೆಬ್ಬಾಳದಿಂದ ಸಿಲ್ಕ್‌ ಬೋರ್ಡ್‌ವರೆಗೂ ಸುರಂಗ ರಸ್ತೆ ನಿರ್ಮಾಣ ಯೋಜನೆಗೆ ಸಂಬಂಧಿಸಿದಂತೆ ಲಾಲ್‌ಬಾಗ್‌ನಲ್ಲಿ ಯಾವುದೇ ಮರಗಳನ್ನು ಕಡಿಯುವುದಿಲ್ಲ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ.

‘ಯೋಜನೆಗೆ ಸಂಬಂಧಿಸಿದ ಟೆಂಡರ್ ಅಧಿಸೂಚನೆ ರದ್ದುಪಡಿಸಬೇಕು’ ಎಂದು ಕೋರಿ ಚಲನಚಿತ್ರ ನಟ ಪ್ರಕಾಶ್ ಬೆಳವಾಡಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ್‌ ಶೆಟ್ಟಿ ಅವರನ್ನು ನ್ಯಾಯಪೀಠ, ‘ಲಾಲ್‌ಬಾಗ್‌ನಲ್ಲಿ ಮರಗಳನ್ನು ಕತ್ತರಿಸಲಾಗುತ್ತಿದೆಯೇ’ ಎಂದು ಪ್ರಶ್ನಿಸಿತು. ಇದಕ್ಕೆ ಶಶಿಕಿರಣ ಶೆಟ್ಟಿ ‘ಇಲ್ಲ’ ಎಂದು ಉತ್ತರಿಸಿದರು.

ADVERTISEMENT

ಇದನ್ನು ಮನ್ನಿಸಿದ ನ್ಯಾಯಪೀಠ, ‘ಮುಂದಿನ ವಿಚಾರಣೆಯವರೆಗೆ ಲಾಲ್‌ಬಾಗ್‌ನಲ್ಲಿ ಯಾವುದೇ ಮರಗಳನ್ನು ಕತ್ತರಿಸುವುದಿಲ್ಲ ಎಂದು ಅಡ್ವೊಕೇಟ್‌ ಜನರಲ್‌ ತಿಳಿಸಿದ್ದಾರೆ. ಹೀಗಾಗಿ, ಯಾವುದೇ ಮಧ್ಯಂತರ ಆದೇಶದ ಅಗತ್ಯವಿಲ್ಲ’ ಎಂದು ನುಡಿಯಿತು.

ಅರ್ಜಿದಾರರ ಪರ ಹಾಜರಿದ್ದ ಪದಾಂಕಿತ ಹಿರಿಯ ವಕೀಲ ಡಿ.ಆರ್‌.ರವಿಶಂಕರ್‌ ಮತ್ತು ಸಂಸದ ತೇಜಸ್ವಿ ಸೂರ್ಯ ಅವರು, ‘ಯೋಜನೆ ಇನ್ನೂ ಕಾಗದದ ಮೇಲಷ್ಟೇ ಇದೆ. ಇದು ಕಾರ್ಯಗತ ಆಗಬೇಕಿರುವ ಯೋಜನೆಯಾದರೂ ಸರ್ಕಾರ ಈಗಾಗಲೇ ಟೆಂಡರ್‌ ಪ್ರಕ್ರಿಯೆ ಆರಂಭಿಸಿದೆ’ ಎಂದು ಆಕ್ಷೇಪಿಸಿದರು.

ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಡಿಸೆಂಬರ್ 9ಕ್ಕೆ ಮುಂದೂಡಿತು. ಅರ್ಜಿದಾರರ ಪರ ಪದಾಂಕಿತ ಹಿರಿಯ ಡಿ.ಆರ್.ರವಿಶಂಕರ್‌ ಮತ್ತು ಸಂಸದರೂ ಆದ ವಕೀಲ ತೇಜಸ್ವಿ ಸೂರ್ಯ ಹಾಜರಿದ್ದರು.

ಸೊಸೈಟಿ ಕಾನೂನು ಬದ್ಧತೆ ಪ್ರಶ್ನೆ: ನೋಟಿಸ್‌

‘ಕರ್ನಾಟಕ ನೌಕರರ ರಾಜ್ಯ ವಿಮಾ ಸೊಸೈಟಿ’ ನೋಂದಣಿಯ ಕಾನೂನು ಬದ್ಧತೆ ಮತ್ತು ಸಿಂಧುತ್ವವನ್ನು ಪ್ರಶ್ನಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಡಿ.ವಿ.ದೊರೈ ರಾಯನ ಗೌಡ ಸೇರಿದಂತೆ ಒಟ್ಟು 160 ಜನ ಸಲ್ಲಿಸಿರುವ ರಿಟ್‌ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಪದಾಂಕಿತ ಹಿರಿಯ ವಕೀಲ ಡಿ.ಆರ್.ರವಿಶಂಕರ್ ಅವರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಾರ್ಮಿಕ ಇಲಾಖೆ ಪ್ರಧಾನ ಕಾರ್ಯದರ್ಶಿ, ಕಾರ್ಮಿಕ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆಯ ಆಯುಕ್ತರು, ಇಎಸ್ಐ ನಿಗಮ, ಇಎಸ್ಐ ಸೊಸೈಟಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 29ಕ್ಕೆ ಮುಂದೂಡಿತು.

ಕಾರ್ಮಿಕ ರಾಜ್ಯ ವಿಮಾ ಯೋಜನೆಯ ವೈದ್ಯಕೀಯ ಸೇವೆಗಳ ಇಲಾಖೆ ರಚಿಸಿರುವ ಈ ಕಾನೂನನ್ನು ಪ್ರಶ್ನಿಸಿರುವ ಅರ್ಜಿದಾರರು ರಾಜ್ಯದ ವಿವಿಧ ಇಎಸ್ಐ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಅರ್ಜಿದಾರರ ಪರ ಹೈಕೋರ್ಟ್ ವಕೀಲ ಬಿ.ಎಂ.ಸಂತೋಷ್‌ ವಕಾಲತ್ತು ವಹಿಸಿದ್ದಾರೆ.