ಬೆಂಗಳೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜ್ಞಾನಜ್ಯೋತಿ ಕ್ಯಾಂಪಸ್‌ನಲ್ಲಿ ಶೀಘ್ರದಲ್ಲೇ ಎಂಸಿಎ (ಮಾಸ್ಟರ್ ಆಫ್ ಕಂಪ್ಯೂಟರ್ ಅಪ್ಲಿಕೇಷನ್) ಸ್ನಾತಕೋತ್ತರ ಪದವಿ ಕೋರ್ಸ್ ಆರಂಭಿಸಲಾಗುವುದು ಎಂದು ಬಿಸಿಯು ಕುಲಸಚಿವ (ಮೌಲ್ಯಮಾಪನ) ಪ್ರೊ. ಬಿ.ರಮೇಶ್ ತಿಳಿಸಿದರು.
ಸೆಂಟ್ರಲ್ ಕಾಲೇಜಿನ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಬಿಸಿಯು ಪ್ರಥಮ ತಂಡದ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಸ್ನಾತಕೋತ್ತರ ಪದವಿಯಲ್ಲಿ ಕಂಪ್ಯೂಟರ್ ಅಪ್ಲಿಕೇಷನ್‌ಗೆ ಸಂಬಂಧಿಸಿದ ಕೋರ್ಸ್ ಆರಂಭಿಸುವುದರಿಂದ ಬಿಸಿಎ ಪದವೀಧರರಿಗೆ ಅನುಕೂಲವಾಗಲಿದೆ’ ಎಂದು ತಿಳಿಸಿದರು.
ಬಿಸಿಯು ವಿಶ್ರಾಂತ ಕುಲಪತಿ ಪ್ರೊ.ಲಿಂಗರಾಜ ಗಾಂಧಿ, ‘ಭವಿಷ್ಯದ ಬೆಳವಣಿಗೆಯಲ್ಲಿ ಕೃತಕ ಬುದ್ಧಿಮತ್ತೆ ಮಹತ್ವದ ಪಾತ್ರ ವಹಿಸುತ್ತದೆ. ಭಾರತದ ಆರ್ಥಿಕ ರಂಗದಲ್ಲಿ ಗಣಕ ವಿಜ್ಞಾನ ಪದವೀಧರರಿಗೆ ವಿಪುಲ ಉದ್ಯೋಗಾವಕಾಶಗಳಿವೆ. ಅಗತ್ಯಕ್ಕೆ ತಕ್ಕಂತೆ ಕೌಶಲ ಅಭಿವೃದ್ಧಿಪಡಿಸಿಕೊಳ್ಳಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನೂತನ ಕುಲಸಚಿವ ನವೀನ್ ಜೋಸೆಫ್ ಮಾತನಾಡಿದರು. ಬಿಸಿಯು ವಿತ್ತಾಧಿಕಾರಿ ಎಂ.ವಿ. ವಿಜಯಲಕ್ಷ್ಮಿ ಮತ್ತು ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ. ರಮೇಶ್ ಬಿ.ಕುಡೇನಟ್ಟಿ ಮಾತನಾಡಿದರು.
ಇದೇ ವೇಳೆ, ವಿವಿಧ ಶೈಕ್ಷಣಿಕ ಚಟುವಟಿಕೆ ಹಾಗೂ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.